ದಾವಣಗೆರೆ: ಪೌರತ್ವ ಕಾಯ್ದೆ ಜಾಗೃತಿ ಕಾರ್ಯಕ್ರಮದಲ್ಲಿ ಮುಸ್ಲಿಂರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರನ್ನು ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ದಾವಣಗೆರೆಯಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ.
ದಾವಣಗೆರೆಯ ಉಪವಿಭಾಗಧಿಕಾರಿಗಳ ಕಚೇರಿಗೆ ಪ್ರಗತಿಪರ ಸಂಘಟನೆಗಳ ಒಕ್ಕೂಟ ತೆರಳಿ ಎಸ್ಪಿ ಅವರಿಗೆ ಮನವಿ ಮಾಡಿದರು. ಇದೇ ತಿಂಗಳ 20ರಂದು ಹೊನ್ನಾಳಿಯಲ್ಲಿ ನಡೆದ ಪೌರತ್ವ ಕಾಯ್ದೆ ಜಾಗೃತಿ, ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾಗೆ ಅಭಿನಂಧನಾ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಒಂದು ಸಮುದಾಯವನ್ನು ಓಲೈಸುವುದಕ್ಕಾಗಿ ಹಾಗೂ ಪೌರತ್ವ ಕಾಯ್ದೆಯನ್ನು ಸಮರ್ಥನೆ ಮಾಡುವ ಭರದಲ್ಲಿ ಮುಸ್ಲಿಂ ಸಮುದಾಯಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ‘ಮುಸ್ಲಿಂರನ್ನು ಎಲ್ಲಿಡಬೇಕೋ ಅಲ್ಲಿ ಇಡುತ್ತೇವೆ’- ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ
ಮಸೀದಿಗಳಲ್ಲಿ ಶಸ್ತ್ರಾಸ್ತ್ರಗಳನ್ನು ಸಂಗ್ರಹ ಮಾಡುತ್ತಾರೆ. ನಿಮ್ಮನ್ನು ಎಲ್ಲಿ ಇಡಬೇಕೋ ಅಲ್ಲೇ ಇಡುತ್ತೇವೆ, ಮುಸ್ಲಿಂ ಕೇರಿಗೆ ಬಂದ ಅನುದಾನವನ್ನು ಹಿಂದೂಗಳ ಕೇರಿಗೆ ಹಾಕಿ ಅವರನ್ನು ಅಭಿವೃದ್ಧಿ ಮಾಡುತ್ತೇನೆ. ಇನ್ಮುಂದೆ ರಾಜಕಾರಣ ಏನು ಎನ್ನುವುದನ್ನು ಮಾಡಿ ತೋರಿಸುತ್ತೇನೆ ಎಂದು ಮುಸ್ಲಿಂ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಪ್ರಚೋನಕಾರಿ ಭಾಷಣ ಮಾಡಿದ್ದರು. ಇದನ್ನೂ ಓದಿ: ಶಾಸಕ ರೇಣುಕಾಚಾರ್ಯ ಫೋಟೋಗೆ ಚಪ್ಪಲಿ ಏಟು!
ಇದರಿಂದ ಎಂಪಿ ರೇಣುಕಾಚಾರ್ಯ ಕೂಡಲೇ ತಮ್ಮ ಹೇಳಿಕೆಯನ್ನು ಹಿಂಪಡೆದು ಕ್ಷಮೆಯಾಚಿಸಬೇಕು ಹಾಗೂ ತಮ್ಮ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿಗಳ ಸ್ಥಾನದಿಂದ ಕೆಳಗಿಳಿಯಬೇಕು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸದಸ್ಯರು ಒತ್ತಾಯಿಸಿದ್ದಾರೆ.