ರಾಯಚೂರು: ಕೃಷ್ಣಾ ನದಿಯಿಂದ ಅಕ್ರಮವಾಗಿ ಮರಳು ಸಾಗಣೆ ಮಾಡುತ್ತಿದ್ದ ಟ್ರ್ಯಾಕ್ಟರ್ ಹರಿದು ನಾಲ್ಕು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ದೇವದುರ್ಗದ ನಗರಗುಂಡ ಗ್ರಾಮದಲ್ಲಿ ನಡೆದಿದೆ.
ಉದಯಕುಮಾರ್(4) ಸ್ಥಳದಲ್ಲೇ ಸಾವನ್ನಪ್ಪಿರುವ ನತದೃಷ್ಟ ಬಾಲಕ. ವೇಗವಾಗಿ ಬರುತ್ತಿದ್ದ ಟ್ರ್ಯಾಕ್ಟರ್ ರಸ್ತೆ ದಾಟುತ್ತಿದ್ದ ಬಾಲಕನ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಅಕ್ರಮವಾಗಿ ಮರಳನ್ನ ಸಾಗಣೆ ಮಾಡಿ, ನದಿ ಕಡೆಗೆ ಟ್ರ್ಯಾಕ್ಟರ್ ಹೊರಟಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ದೇವದುರ್ಗ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಇನ್ನೂ ಪ್ರಕರಣ ದಾಖಲಾಗಿಲ್ಲ.
ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆ ದಂಧೆ ಹಾಗೂ ಮರಳನ್ನು ಸಾಗಿಸುವ ವಾಹನಗಳ ಅತೀ ವೇಗ, ಅಡ್ಡಾದಿಡ್ಡಿ ಓಡಾಟಕ್ಕೆ ಯಾರೂ ಕೇಳುವವರೇ ಇಲ್ಲದಂತಾಗಿದೆ. ಜನವಸತಿ ಪ್ರದೇಶಗಳಲ್ಲೂ ಅತೀ ವೇಗವಾಗಿ ಟ್ರ್ಯಾಕ್ಟರ್ ಚಲಾಯಿಸಿದ್ದೇ ಈ ಅಪಘಾತಕ್ಕೆ ಕಾರಣವಾಗಿದೆ. ಈ ಬಗ್ಗೆ ಪೊಲೀಸರು ಕ್ರಮ ತೆಗೆದುಕೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.