ಹುಬ್ಬಳ್ಳಿ: ಹಿರಿಯ ಪತ್ರಕರ್ತ, ರಾಜ್ಯಸಭೆ ಮಾಜಿ ಸದಸ್ಯ ನಾಡೋಜ ಡಾ.ಪಾಟೀಲ ಪುಟ್ಟಪ್ಪ (102) ಅವರು ವಿಧಿವಶರಾಗಿದ್ದಾರೆ.
ನಾಡೋಜ ಡಾ.ಪಾಟೀಲ ಪುಟ್ಟಪ್ಪ ಅವರು ಜಿಲ್ಲೆಯ ಕಿಮ್ಸ್‌ನಲ್ಲಿ ಕಳೆದ ಫೆ.10 ರಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ನಿಧನರಾಗಿದ್ದಾರೆ.
ನಿನ್ನೆಯಷ್ಟೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪಾಪು ಅವರ ಆರೋಗ್ಯ ವಿಚಾರಿಸಿದ್ದರು. ಬಳಿಕ ಮಾತನಾಡಿದ್ದ ಸಿಎಂ, ರಾಷ್ಟ್ರೀಯ ಬಸವ ಪುರಸ್ಕಾರದೊಂದಿಗೆ ಹತ್ತು ಲಕ್ಷ ರೂ. ನಗದು ನೀಡಲಾಗುವುದು. ಅಲ್ಲದೆ ಡಾ.ಪಾಟೀಲ ಪುಟ್ಟಪ್ಪ ಅವರ ಆರೋಗ್ಯ ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದರು.
ನಾಡೋಜ ಪಾಪು ಅವರು, ವಿಪರೀತ ಜ್ವರ, ಉಸಿರಾಟ ತೊಂದರೆ ಹಾಗೂ ಆಯತಪ್ಪಿ ಬಿದ್ದ ಪರಿಣಾಮ ತಲೆಗೆ ಪೆಟ್ಟಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲದೇ ದೀರ್ಘಕಾಲದ ಪುಪ್ಪಸ ತೊಂದರೆ ಹಾಗೂ ತಲೆಯಲ್ಲಿ ರಕ್ತಸ್ರಾವ ಉಂಟಾಗಿದ್ದರಿಂದ ಚಿಕಿತ್ಸೆ ಮಾಡಲಾಗಿತ್ತು. ಕಿಡ್ನಿ ತೊಂದರೆ, ರಕ್ತ ಹೀನತೆ ಹಾಗೂ ಸೋಂಕು ಕಂಡು ಬಂದಿದ್ದು, ಎಲ್ಲಾ ಖಾಯಿಲೆಗಳಿಗೆ ಚಿಕಿತ್ಸೆ ನೀಡಲಾಗಿತ್ತು.
ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದರಿಂದ ಶಸ್ತ್ರಚಿಕಿತ್ಸೆ ಮಾಡಲಾಯಿತು. ಆದರೆ ಶಸ್ತ್ರಚಿಕಿತ್ಸೆ ನಂತರ ಆರೋಗ್ಯ ಗಂಭೀರವಾಗಿತ್ತು. ಬಳಿಕ ಕೃತಕ ಉಸಿರಾಟ ಯಂತ್ರ (ವೆಂಟಿಲೇಟರ್) ಅಳವಡಿಸಲಾಗಿತ್ತು. ದೀರ್ಘಕಾಲ ಹಾಸಿಗೆ ಹಿಡಿದ ಪರಿಣಾಮ ಪಲ್ಮನರಿ ಥ್ರಂಬೋ ಎಂಬೋಲಿಸಂ ಆಗಿದೆ ಎಂದು ತಜ್ಞ ವೈದ್ಯ ಪ್ರೊ.ಡಿ.ಎಂ.ಕಬಾಡಿ ತಿಳಿಸಿದ್ದರು.