ಸಿನಿಮಾ ಕಾರ್ಮಿಕರಿಗೆ ಉಪ್ಪಿ ಸಹಾಯ ಹಸ್ತ

Public TV
2 Min Read
upendra

ಬೆಂಗಳೂರು: ಇಷ್ಟು ದಿನ ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರಕ್ಕೆ ಮೆಚ್ಚುಗೆ ಹಾಗೂ ಸಲಹೆ ನೀಡುತ್ತಿದ್ದ ನಟ ರಿಯಲ್ ಸ್ಟಾರ್ ಉಪೇಂದ್ರ, ಇದೀಗ ಸಿನಿಮಾ ಕಾರ್ಮಿಕರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

gdg corona death 1

ಈಗಾಗಲೇ ಹಲವು ನಟ, ನಟಿಯರು ಸಹಾಯ ಮಾಡಿದ್ದು, ಕೆಲವರು ಪಿಎಂ ಕೇರ್ಸ್ ಹಾಗೂ ಸಿಎಂ ಪರಿಹಾರ ನಿಧಿಗೆ ನೀಡಿದರೆ, ಇನ್ನೂ ಕೆಲವರು ಬಡವರಿಗೆ ಆಹಾರ ಪದಾರ್ಥಗಳನ್ನು ದಾನ ಮಾಡುವ ಮೂಲಕ ನೆರವಾಗುತ್ತಿದ್ದಾರೆ. ಮಾತ್ರವಲ್ಲದೆ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವು ನಟರು ಸಿನಿಮಾ ಕಾರ್ಮಿಕರ ನೆರವಿಗೆ ನಿಂತಿದ್ದು, ನೇರವಾಗಿ ಅವರ ಖಾತೆಗೆ ಹಣ ಸಂದಾಯ ಮಾಡುತ್ತಿದ್ದಾರೆ. ಸಿನಿಮಾ ಕಾರ್ಮಿಕರು ದಿನಗೂಲಿ ನೆಚ್ಚಿ ಜೀವನ ಸಾಗಿಸುತ್ತಿರುತ್ತಾರೆ. ಇದೀಗ ತಿಂಗಳೂಗಟ್ಟಲೆ ಕೆಲಸವಿಲ್ಲದೆ ಪರದಾಡುತ್ತಿದ್ದು, ತುತ್ತು ಅನ್ನಕ್ಕೂ ಪರಿತಪಿಸುತ್ತಿದ್ದಾರೆ.

coronavirus 1 1000x600 1

ಇದೆಲ್ಲವನ್ನು ಅರಿತ ನಟ, ನಟಿಯರು ಅವರ ಸಹಾಯಕ್ಕೆ ಧಾವಿಸುತ್ತಿದ್ದಾರೆ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ. ಇದೀಗ ರಿಯಲ್ ಸ್ಟಾರ್ ಉಪೇಂದ್ರ ಸಹ ಅವರ ಕಷ್ಟಕ್ಕೆ ಮಿಡಿಯುತ್ತಿದ್ದು, 4.50 ಲಕ್ಷ ರೂ.ಗಳನ್ನು ನೀಡಿದ್ದಾರೆ. ಕನ್ನಡ ಚಲನಚಿತ್ರ ಕಾರ್ಮಿಕ ಸಂಘಗಳ ಒಕ್ಕೂಟದ ಒಟ್ಟು 18 ಸಂಘಗಳಿಗೆ ತಲಾ 25 ಸಾವಿರ ರೂ. ನೀಡಿದ್ದಾರೆ. ಈ ಕುರಿತು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.

Upendra Images 5

ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಕನ್ನಡ ಚಲನಚಿತ್ರ ಕಾರ್ಮಿಕ ಸಂಘಗಳ ಒಕ್ಕೂಟದ ಒಟ್ಟು 18 ಸಂಘಗಳಿಗೆ ತಲಾ 25 ಸಾವಿರದಂತೆ 4.50 ಲಕ್ಷ ರೂ.ಗಳನ್ನು ನೀಡುತ್ತಿದ್ದೇನೆ. ಆದಷ್ಟು ಬೇಗ ಈ ಕೊರೊನಾ ಸಮಸ್ಯೆಯಿಂದ ಎಲ್ಲರೂ ಹೊರಬರುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಾ ನಿಮ್ಮ ಜೊತೆ ಎಂದೆಂದೂ ನಾನಿರುತ್ತೇನೆ ವಿಶ್ವಾಸವಿರಲಿ ಎಂದು ಬರೆದುಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳ ಮೂಲಕವೇ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸಲಹೆ ಹಾಗೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದ ನಟ ಉಪೇಂದ್ರ, ಇದೀಹ ಸಹಾಯ ಮಾಡಿದ್ದಾರೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅಲ್ಲದೆ ಮುಖ್ಯಮಂತ್ರಿಗಳೂ ಹೀಗೆ ಪ್ರತಿ ಕ್ಷೇತ್ರದ ಸಚಿವರೊಂದಿಗೆ ಚರ್ಚೆ ನಡೆಸಿ ಪರಿಹಾರ ಕೈಗೊಳ್ಳಲಿ ಎಂದು ಸಲಹೆ ನೀಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *