ಪರಿಸ್ಥಿತಿ ಹೀಗೆ ಮುಂದುವರಿದರೆ ಮತ್ತೆ ಲಾಕ್‍ಡೌನ್‍ಗೆ ಚಿಂತನೆ – ಶ್ರೀರಾಮುಲು

Public TV
1 Min Read
gdg sriramulu 1

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಾಹಾಮಾರಿ ಅಟ್ಟಹಾಸ ಮೆರೆಯುತ್ತಿದ್ದು, ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿವೆ. ಹೀಗಾಗಿ ಮತ್ತೆ ಲಾಕ್‍ಡೌನ್ ಕುರಿತು ಚರ್ಚೆ ಆರಂಭವಾಗಿದೆ. ಈ ಕುರಿತು ಇದೀಗ ಸ್ವತಃ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಸ್ಪಷ್ಟನೆ ನೀಡಿದ್ದಾರೆ.

ಟ್ವೀಟ್ ಮಾಡಿರುವ ಅವರು, ಮತ್ತೆ ಲಾಕ್‍ಡೌನ್ ಘೋಷಿಸುವ ಕುರಿತು ಸುಳಿವು ನೀಡಿದ್ದಾರೆ. ರಾಜ್ಯದಲ್ಲಿ ಇತ್ತೀಚೆಗೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಮತ್ತೊಮ್ಮೆ ಲಾಕ್‍ಡೌನ್ ಬಗ್ಗೆ ಚಿಂತಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಮೂಲಕ ಮತ್ತೊಮ್ಮೆ ಲಾಕ್‍ಡೌನ್ ಘೋಷಿಸುವ ಕುರಿತು ಸುಳಿವು ನೀಡಿದ್ದಾರೆ.

ಮತ್ತೊಮ್ಮೆ ಲಾಕ್‍ಡೌನ್ ಮಾಡುವ ಕುರಿತು ಟಾಸ್ಕ್‍ಫೋರ್ಸ್ ಸಭೆ, ತಜ್ಞರು ಹಾಗೂ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ಮಾಡಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಕೊರೊನಾ ಸೋಂಕು ನಿಯಂತ್ರಿಸಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಮಾಸ್ಕ್ ಕಡ್ಡಾಯವಾಗಿ ಧರಿಸುವುದು, ಸ್ಯಾನಿಟೈಸರ್ ಬಳಕೆ ಹಾಗೂ ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಮತ್ತೊಂದು ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸಮುದಾಯ ಭವನಗಳು, ಶಾಲೆ, ಮದುವೆ ಹಾಲ್‍ಗಳು, ಪ್ರದರ್ಶನ ಕೇಂದ್ರಗಳು, ಹೋಟೆಲ್ ಹಾಗೂ ಸ್ಟೇಡಿಯಂಗಳನ್ನು ಕೋವಿಡ್ ಕೇರ್ ಸೆಂಟರ್‍ಗಳಾಗಿ ಪರಿವರ್ತಿಸಲಾಗುವುದು ಎಂದು ತಿಳಿಸಿದ್ದಾರೆ.

ಕೋವಿಡ್ ಕೇರ್ ಸೆಂಟರ್‍ನಲ್ಲಿ ಅಗತ್ಯ ವೈದ್ಯಕೀಯ ಸಿಬ್ಬಂದಿ ಇರಲಿದ್ದು, ಎಲ್ಲ ದಿನಗಳಲ್ಲಿಯೂ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲಿವೆ. 50 ವರ್ಷಕ್ಕಿಂತ ಕೆಳಗಿನ, ಸೋಂಕಿನ ಲಕ್ಷಣಗಳಿಲ್ಲದವರಿಗೆ ಇಲ್ಲಿ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

https://www.facebook.com/publictv/posts/4430613563623028

Share This Article
Leave a Comment

Leave a Reply

Your email address will not be published. Required fields are marked *