ಧರ್ಮದ ಹೆಸರಿನಲ್ಲಿ ಗೂಂಡಾಗಿರಿ ಮಾಡುವವರಿಗೆ ಶಿಕ್ಷೆಯಾಗಬೇಕು: ಹೆಚ್‍ಡಿಕೆ

Public TV
2 Min Read
Kumaraswamy

ಬೆಂಗಳೂರು: ಮಂಗಳವಾರ ರಾತ್ರಿ ಕಾವಲಭೈರಸಂದ್ರದಲ್ಲಿ ನಡೆದ ಗಲಭೆ ವಿಚಾರವಾಗಿ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಧರ್ಮದ ಹೆಸರಿನಲ್ಲಿ ಗೂಂಡಾಗಿರಿ ಮಾಡುವವರಿಗೆ ಶಿಕ್ಷೆಯಾಗಬೇಕು ಎಂದಿದ್ದಾರೆ.

ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಹೆಚ್‍ಡಿಕೆ, ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಅಕ್ಷಮ್ಯ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು ಎಂದು ಒತ್ತಾಯ ಮಾಡಿದ್ದಾರೆ.

ಯಾವುದೇ ಧರ್ಮದ ಸಮುದಾಯ ಕಾನೂನಿಗೆ ಅತೀತರಲ್ಲ. ನೆಲದ ಕಾನೂನನ್ನು ಗೌರವಿಸದ ಯಾರೊಬ್ಬರೂ ಶಿಕ್ಷೆಗೆ ಅರ್ಹರು. ಸರ್ಕಾರ ಪುಂಡಾಟ ನಡೆಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಮುಂದೆಂದೂ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು. ಅವಿವೇಕಿಯೊಬ್ಬ ಪೈಗಂಬರ್ ಅವರ ಬಗ್ಗೆ ಅವಹೇಳನ ಮಾಡಿದ, ಆತನಿಗೆ ಶಿಕ್ಷೆಯಾಗಬೇಕು ನಿಜ, ಆದರೆ ಪೈಗಂಬರ್ ಅನುಯಾಯಿಗಳು ದಾಂಧಲೆಗಿಳಿಯುವ ಮೂಲಕ ಪ್ರವಾದಿಯ ಪವಿತ್ರ ಸಂದೇಶಗಳನ್ನು ಮಣ್ಣುಪಾಲು ಮಾಡುವುದು ಆ ಧರ್ಮಕ್ಕೆ ಮಾಡಿದ ಅಪಚಾರ ಎಂದು ಹೇಳಿದ್ದಾರೆ.

ಕಾನೂನು ಪಾಲಕ ಪೊಲೀಸರು ಮತ್ತು ವರದಿಗಾಗಿ ತೆರಳಿದ್ದ ಪತ್ರಕರ್ತರ ಮೇಲೆ ಅಮಾನುಷ ದೌರ್ಜನ್ಯ ನಡೆಸುವ ಮೂಲಕ ನಾಗರಿಕ ಸಮಾಜಕ್ಕೆ ಯಾವ ಸಂದೇಶ ರವಾನಿಸುತ್ತದೆ ಎಂಬ ಕನಿಷ್ಠ ಪ್ರಜ್ಞೆಯೂ ಇಲ್ಲದೆ ವರ್ತಿಸಿರುವುದು ಅತ್ಯಂತ ಖಂಡನೀಯ. ಸವಾರಿ ಮಾಡುವ ಇಂತಹ ಘಟನೆಗಳಿಂದ ಸಾರ್ವತ್ರಿಕ ತಿರಸ್ಕಾರಕ್ಕೆ ಮತ್ತು ಅವಗಣನೆಗೆ ಸಮುದಾಯವೊಂದು ಪದೇ ಪದೇ ಗುರಿಯಾಗುತ್ತಿರುವುದು ಸ್ವಯಂಕೃತ ಅಪರಾಧವಲ್ಲದೆ ಬೇರೇನಿಲ್ಲ ಎಂದು ಅಸಮಾದಾನ ವ್ಯಕ್ತಪಡಿಸಿದ್ದಾರೆ.

ಈ ಘಟನೆ ಪೂರ್ವಯೋಜಿತ ಸಂಚು ಎಂಬ ಅನುಮಾನಕ್ಕೂ ಪುಷ್ಟಿ ನೀಡಿದೆ. ಸ್ಥಳೀಯ ಜನಪ್ರತಿನಿಧಿಗಳ ಸ್ವಜನಪಕ್ಷಪಾತ, ಅಧಿಕಾರ ಲಾಲಸೆಗಳಿಂದಾಗಿ ಇಂಥದೊಂದು ಸಣ್ಣ ಕಿಡಿ ಬೆಂಕಿಯುಂಡೆ ಆಗುವ ಮೂಲಕ ಅಮಾಯಕ ಜನರ ಸಿಟ್ಟು-ಸೆಡವು ಸ್ಫೋಟಗೊಂಡಿದೆ. ನಿರುಪದ್ರವಿಗಳ ರಕ್ತ ಚೆಲ್ಲಾಡಿದೆ. ಕೌಟುಂಬಿಕ ದ್ವೇಷಾಸೂಯೆಗಳು ದುರ್ವರ್ತನೆಗೆ ವೇದಿಕೆಯಾಗಿರುವುದು ಸುಳ್ಳಲ್ಲ ಎಂದು ಟ್ವೀಟ್ ಮಾಡುವ ಮೂಲಕ ಕಿಡಿ ಕಾರಿದ್ದಾರೆ.

ಅಲ್ಲಾಹ್ ನ್ಯಾಯ, ಪರೋಪಕಾರ ಹಾಗೂ ಆಪ್ತೇಷ್ಟರ ಸೌಜನ್ಯದ ಆಜ್ಞೆ ನೀಡುತ್ತಾನೆ. ಮತ್ತು ಅಶ್ಲೀಲಕಾರ್ಯ, ದುಷ್ಕೃತ್ಯ, ಅಕ್ರಮ, ಅತ್ಯಾಚಾರಗಳನ್ನು ನಿಷೇಧಿಸುತ್ತಾನೆ. ನೀವು ಜಾಗೃತರಾಗಲಿಕ್ಕಾಗಿ ಅವನು ನಿಮಗೆ ಉಪದೇಶ ನೀಡುತ್ತಾನೆ. ದಯವಿಲ್ಲದ ಧರ್ಮವಾವುದಯ್ಯಾ? ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ ದಯವೇ ಧರ್ಮದ ಮೂಲವಯ್ಯಾ, ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ ಎಂದು ಟ್ವೀಟ್ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *