ಲಕ್ನೋ: ವಿವಾಹಿತ ಮಹಿಳೆಯೊಬ್ಬಳು ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ.
ಶಶಿಲತಾ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಜಿಲ್ಲೆಯ ಸೊರೊನ್ ಪೊಲೀಸ್ ಠಾಣೆ ಪ್ರದೇಶದ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ಮೃತ ಶಶಿಲತಾ ಪ್ರಹ್ಲಾದ್ಪುರ ಗ್ರಾಮದ ನಿವಾಸಿ ಸುರೇಂದ್ರ ಜೊತೆ ಮದುವೆಯಾಗಿದ್ದಳು. ಆದರೆ ಇಂದು ಬೆಳಗ್ಗೆ ಆಕೆ ಶವವಾಗಿ ಪತ್ತೆಯಾಗಿದ್ದಾಳೆ.
ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯಕ್ಕೆ ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಮಹಿಳೆ ತಲೆಗೆ ಭಾರವಾದ ವಸ್ತುವಿನಿಂದ ಹೊಡೆದಿದ್ದರಿಂದ ಮೃತಪಟ್ಟಿದ್ದಾಳೆ. ಇತ್ತ ಮೃತ ಮಹಿಳೆಯ ಪತಿ ಪರಾರಿಯಾಗಿದ್ದಾನೆ. ಸದ್ಯಕ್ಕೆ ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಮೃತ ಶಶಿಲತಾ ಮನೆಗೆ ಅದೇ ಹಳ್ಳಿಯ ಯುವಕನೊಬ್ಬ ಪ್ರತಿದಿನ ಬರುತ್ತಿದ್ದನು. ಈ ಬಗ್ಗೆ ಪತಿ ಗಲಾಟೆ ಮಾಡಿದ್ದಾನೆ ಎಂದು ಪೊಲೀಸರ ತನಿಖೆ ವೇಳೆ ತಿಳಿದುಬಂದಿದೆ. ಗ್ರಾಮಸ್ಥರು ಯುವಕ ಮತ್ತು ಶಶಿಕಲಾ ನಡುವೆ ಪ್ರೇಮವಿತ್ತು ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಇತ್ತ ಪತಿ ನಾಪತ್ತೆಯಾಗಿರುವ ಬಗ್ಗೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ.