ಮೈಸೂರು: ಪ್ರವಾಸಿ ತಾಣಗಳು ಇಂದಿನಿಂದ ಓಪನ್ ಮಾಡುವಂತೆ ಸಚಿವ ಎಸ್ ಟಿ ಸೋಮಶೇಖರ್ ಘೋಷಣೆ ಮಾಡಿದ್ದಾರೆ.
ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆದೇಶದ ಮೇರೆಗೆ ತೆರೆಯುವಂತೆ ಸಚಿವರು ಘೋಷಿಸಿದ್ದಾರೆ.
ಚಾಮುಂಡಿ ಬೆಟ್ಟ ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನ ಅರಮನೆ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ನವೆಂಬರ್ 1 ರವೆಗೂ ಮೈಸೂರು ಜಿಲ್ಲಾಡಳಿತ ನಿರ್ಬಂಧ ಹೇರಿತ್ತು. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಮೈಸೂರಿನ ಹಲವು ಸಂಘ ಸಂಸ್ಥೆಗಳು ಈ ಬಗ್ಗೆ ಸಿಎಂಗೆ ಮನವಿ ಮಾಡಿಕೊಂಡವು. ಈ ಮನವಿಗೆ ಸಿಎಂ ಸ್ಪಂದಿಸಿದ್ದು, ಸದ್ಯ ಎಲ್ಲಾ ಪ್ರವಾಸಿತಾಣಗಳು ಪ್ರವಾಸಿಗರಿಗೆ ಮುಕ್ತವಾಗಲಿದೆ.
ವಿಶ್ವವಿಖ್ಯಾತ ಮೈಸೂರು ದಸರಾಗೆ ಜಯದೇವ ಆಸ್ಪತ್ರೆ ನಿರ್ದೇಶಕ, ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಚಾಲನೆ ನೀಡಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ 410ನೇ ಮೈಸೂರು ದಸರಾ ಉದ್ಘಾಟನೆ ನೆರವೇರಿದೆ. ಈ ಬಾರಿ ಕೊರೊನಾ ವಾರಿಯರ್ಸ್‍ಗೆ ಆದ್ಯತೆ ನೀಡಲಾಗಿದ್ದು, ವೈದ್ಯರಿಂದ ದಸರಾ ಉದ್ಘಾಟಿಸಲಾಗಿದೆ. ಅಲ್ಲದೆ ಕೊರೊನಾ ವಾರಿಯರ್ಸ್ ಗೆ ಸನ್ಮಾನ ಸಹ ಮಾಡಲಾಗುತ್ತಿದೆ. ಕೊರೊನಾ ಹಿನ್ನೆಲೆ ಅತ್ಯಂತ ಸರಳ, ಸಾಂಪ್ರದಾಯಿಕವಾಗಿ ದಸರಾ ಆಚರಿಸಲಾಗುತ್ತಿದೆ.
ಮೈಸೂರು ದಸರಾ 2020ಕ್ಕೆ ವೈಭವದ ಚಾಲನೆ ದೊರೆತಂತಾಗಿದ್ದು, ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾಗೆ ಚಾಲನೆ ನೀಡಲಾಗಿದೆ. ಉದ್ಘಾಟಕರಿಗೆ ಸಿಎಂ ಯಡಿಯೂರಪ್ಪ ಹಾಗೂ ಸಚಿವರು ಜೊತೆಯಾಗಿದ್ದಾರೆ. ಶುಭ ತುಲಾ ಲಗ್ನದಲ್ಲಿ ದಸರಾ 2020 ಉದ್ಘಾಟನೆಗೊಂಡಿದೆ. ಮೊದಲು ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಯಾವುದೇ ಸ್ವಾಗತವಿಲ್ಲದೆ ನೇರವಾಗಿ ದೇವಾಲಯಕ್ಕೆ ಸಿಎಂ ತೆರಳಿದರು. ಪ್ರತಿಬಾರಿ ಪೂರ್ಣಕುಂಭ ಸ್ವಾಗತದೊಂದಿಗೆ ಸಿಎಂ ಹಾಗೂ ಉದ್ಘಾಟಕರು ದೇವಾಲಯ ಪ್ರವೇಶಿಸುತ್ತಿದ್ದರು. ಆದರೆ ಈ ಬಾರಿ ಪೂರ್ಣಕುಂಭ ಸ್ವಾಗತ ಮಾಡಲಾಗಿಲ್ಲ.