ನವದೆಹಲಿ: ಕೊರೊನಾ ಎರಡನೇ ಅಲೆ ಹಿನ್ನೆಲೆ ಈ ಬಾರಿಯ ಚಳಿಗಾಲದ ಅಧಿವೇಶನವನ್ನು ನಡೆಸದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಆದರೆ ಇದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಸೋಮವಾರ ಪತ್ರದ ಮೂಲಕ ಸ್ಪಷ್ಟಪಡಿಸಿದ್ದು, ಕೊರೊನಾ ಹರಡುವ ಭೀತಿಯಿಂದ ಚಳಿಗಾಲದ ಅಧಿವೇಶನವನ್ನು ನಡೆಸಲಾಗುತ್ತಿಲ್ಲ. ಅಲ್ಲದೆ ಒಮ್ಮೆಲೆ ಜನವರಿಯಲ್ಲಿ ಬಜೆಟ್ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಕಾಂಗ್ರೆಸ್ ಲೋಕಸಭಾ ನಾಯಕ ಅಧೀರ್ ರಂಜನ್ ಚೌಧರಿ ಅವರು ಚಳಿಗಾಲದ ಅಧಿವೇಶನ ನಡೆಸಬೇಕು. ಅಲ್ಲದೆ ರೈತರ ಕಾನೂನುಗಳ ಬಗ್ಗೆ ಚರ್ಚೆ ನಡೆಸಬೇಕು. ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದರು. ಇದಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಪತ್ರದ ಮೂಲಕ ಪ್ರತಿಕ್ರಿಯಿಸಿದ್ದಾರೆ. ಕೊರೊನಾ ಹಿನ್ನೆಲೆ ಚಳಿಗಾಲದ ಅಧಿವೇಶನ ನಡೆಸುತ್ತಿಲ್ಲ ಎಂದು ತಿಳಿಸಿದ್ದಾರೆ.
ಈ ಕುರಿತು ಎಲ್ಲ ಪಕ್ಷಗಳ ಮುಖಂಡರೊಂದಿಗೆ ಚರ್ಚೆ ನಡೆಸಲಾಗಿದೆ. ಕೊರೊನಾ ಹಿನ್ನೆಲೆ ಅಧೀವೇಶನ ನಡೆಸದಿರಲು ಒಮ್ಮತವಿದೆ. ಸೆಪ್ಟೆಂಬರ್ ನಲ್ಲಿ ನಡೆದ ಮಾನ್ಸೂನ್ ಅಧಿವೇಶದ ಸಂದರ್ಭದಲ್ಲಿ ಹಲವರಿಗೆ ಸೋಂಕು ತಗುಲಿರುವುದು ಪತ್ತೆಯಾಗಿತ್ತು ಎಂದು ಜೋಷಿ ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ. 10 ನಿರಂತರ ಸಭೆಯಲ್ಲಿ 27 ಮಸೂದೆಗಳನ್ನು ಸರ್ಕಾರ ಪಾಸ್ ಮಾಡಿದೆ. ಇವುಗಳ ಪೈಕಿ ಮೂರು ರೈತರ ಬಗೆಗಿನ ಕಾನೂನುಗಳು ಆಕ್ರೋಶಕ್ಕೆ ಕಾರಣವಾಗಿದ್ದು, ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಕೊರೊನಾ ವೈರಸ್ ನಿಯಂತ್ರಣಕ್ಕೆ ಚಳಿಗಾಲದ ತಿಂಗಳುಗಳು ನಿರ್ಣಾಯಕವಾಗಿದ್ದು, ಈ ಅವಧಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ವಿಶೇಷವಾಗಿ ದೆಹಲಿಯಲ್ಲಿ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ ಎಂದು ಜೋಷಿ ಅವರು ತಮ್ಮ ಪತ್ರದಲ್ಲಿ ಬರೆದಿದ್ದಾರೆ.