ಮಡಿಕೇರಿ: ಪದವಿ ಪೂರ್ವ ಕಾಲೇಜು ಆರಂಭವಾಗಿ ತಿಂಗಳು ಕಳೆಯುವಷ್ಟರಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಗರಗಂದೂರು ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನ 24 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ ಪಟ್ಟಿದೆ.
ಕಳೆದ ವಾರವಷ್ಟೇ ವಿದ್ಯಾರ್ಥಿಗೆ ತೀವ್ರ ಜ್ವರ ಕಾಣಿಸಿಕೊಂಡಿತ್ತು. ಬಳಿಕ ಪೋಷಕರನ್ನು ಕರೆದು ವಿದ್ಯಾರ್ಥಿಯನ್ನು ಮನೆಗೆ ಕಳುಹಿಸಿಕೊಡಲಾಗಿತ್ತು. ತೀವ್ರ ಜ್ವರ ಇದ್ದಿದ್ದರಿಂದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಸೋಮವಾರ ವಿದ್ಯಾರ್ಥಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಹೀಗಾಗಿ ತಕ್ಷಣವೇ ಎಚ್ಚೆತ್ತುಕೊಂಡ ಕಾಲೇಜು ಪ್ರಾಂಶುಪಾಲ ಲೋಕೇಶ್, ಆರೋಗ್ಯ ಇಲಾಖೆ ಸಿಬ್ಬಂದಿ ಕರೆಸಿ ಕಾಲೇಜಿನಲ್ಲೇ ಎಲ್ಲಾ ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. ಈ ವೇಳೆ 24 ವಿದ್ಯಾರ್ಥಿಗಳಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಆರೋಗ್ಯ ಸರಿಯಿಲ್ಲವೆಂದು ಮನೆಗೆ ಕಳುಹಿಸಿದ್ದ ವಿದ್ಯಾರ್ಥಿ ಸೇರಿದಂತೆ ಒಟ್ಟು 25 ವಿದ್ಯಾರ್ಥಿಗಳಿಗೆ ಮೊದಲು ಕೋವಿಡ್ ಪಾಸಿಟಿವ್ ಬಂದಿದೆ.
ಜನವರಿ 11 ರಂದು ಕಾಲೇಜು ಆರಂಭವಾಗಿತ್ತು. ಈ ವೇಳೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಕೊವಿಡ್ ನೆಗೆಟಿವ್ ವರದಿ ಪಡೆದೇ ಕಾಲೇಜಿಗೆ ತರಗತಿಗೆ ಅವಕಾಶ ನೀಡಲಾಗಿತ್ತು. ಆದರೆ ಮೊದಲು ಪಾಸಿಟಿವ್ ಬಂದ ವಿದ್ಯಾರ್ಥಿ ಆರೋಗ್ಯ ಸರಿಯಿಲ್ಲದೆ ಒಮ್ಮೆ ಮನೆಗೆ ಹೋಗಿ ಬಂದಿದ್ದ. ಹೀಗಾಗಿ ಆ ವಿದ್ಯಾರ್ಥಿಗೆ ಕೊರೊನಾ ಸೋಂಕು ತಗುಲಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಕಾಲೇಜಿನ ದ್ವಿತೀಯ ಪಿಯುಸಿ ತರಗತಿಯಲ್ಲಿ ಒಟ್ಟು 76 ವಿದ್ಯಾರ್ಥಿಗಳಿದ್ದು, 49 ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ. ಉಳಿದ ಇಬ್ಬರು ಹೆಣ್ಣು ಮಕ್ಕಳಿಗೆ ಶೀತದ ಲಕ್ಷಣವಿದ್ದು ಆ ವಿದ್ಯಾರ್ಥಿನಿಯರನ್ನು ವಸತಿ ನಿಲಯದಲ್ಲೇ ಪ್ರತ್ಯೇಕವಾಗಿ ಇರಿಸಲಾಗಿದೆ.
ಕಾಲೇಜಿನ ಎಲ್ಲಾ ಸಿಬ್ಬಂದಿಗೂ ಕೋವಿಡ್ ಟೆಸ್ಟ್ ಮಾಡಲಾಗಿದ್ದು ಎಲ್ಲರ ವರದಿ ನೆಗೆಟಿವ್ ಬಂದಿದೆ. ಆದರೆ ಎಲ್ಲರೂ ಪಾಸಿಟಿವ್ ವಿದ್ಯಾರ್ಥಿಗಳ ಪ್ರಾಥಮಿಕ ಸಂಪರ್ಕದಲ್ಲಿರುವುದರಿಂದ ಕ್ವಾರಂಟೈನ್ ಮಾಡಲಾಗಿದೆ. ಪಾಸಿಟಿವ್ ಬಂದಿರುವ ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಎಲ್ಲರೂ ಆರೋಗ್ಯವಾಗಿದ್ದಾರೆ ಎಂದು ಕೊಡಗು ಡಿಎಚ್‍ಓ ಮೋಹನ್ ಕುಮಾರ್ ಹೇಳಿದ್ದಾರೆ.