ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ರಾಜ್ಯ ಸರ್ಕಾರ ಕೋವಿಡ್ 19 ನಿಯಂತ್ರಣಕ್ಕೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೊರೊನಾ ಎರಡನೇ ಅಲೆಯ ಪರಿಣಾಮ ಹೆಚ್ಚಾಗದಂತೆ ಮುನ್ನೆಚ್ಚರಿಕೆಯ ನಿರ್ಬಂಧಗಳನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಜಾರಿಗೊಳಿಸಲಾಗುತ್ತಿದೆ. ಈ ನಿರ್ಬಂಧಗಳಿಗೆ ಚಿತ್ರರಂಗ ಕೂಡ ಹೊರತಾಗಿಲ್ಲ.
ಕೊರೊನಾ ಹರಡುವಿಕೆ ತಡೆಯಲು ಚಿತ್ರಮಂದಿರಗಳಲ್ಲಿ ಶೇಕಡಾ 50ರಷ್ಟು ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ನೀಡಲಾಗಿದೆ. ನೈಟ್ ಕಫ್ರ್ಯೂ ಜಾರಿಗೆ ತಂದು ಜನರ ರಾತ್ರಿ ಓಡಾಟಕ್ಕೇ ಬ್ರೇಕ್ ಹಾಕಿದ್ರೂ ಕೂಡ ಕೊರೊನಾ ನಿಯಂತ್ರಣಕ್ಕೆ ಬಂದಿಲ್ಲ. ಹೀಗೆ ದಿನದಿಂದ ದಿನಕ್ಕೆ ಕೋವಿಡ್ 19 ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಚಿತ್ರಮಂದಿರಗಳೂ ಕೂಡ ಜನರಿಲ್ಲದೆ ಬಣಗುಟ್ಟತ್ತಿವೆ. ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ಸಿನಿಮಾಗಳಿಗೆ ಪ್ರೇಕ್ಷಕರ ಕೊರತೆ ಎದುರಾಗಿದೆ. ಈ ಕಾರಣಕ್ಕಾಗಿ ಕಳೆದ ವಾರ ತೆರೆಕಂಡ `ಕೊಡೆಮುರುಗ’ ಸಿನಿಮಾವನ್ನು ಹಿಂಪಡೆದು ಮರು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.
ಈ ಬಗ್ಗೆ ಮಾತನಾಡಿರುವ `ಕೊಡೆಮುರುಗ’ ಚಿತ್ರದ ನಿರ್ದೇಶಕ ಸುಬ್ರಮಣ್ಯ ಪ್ರಸಾದ್, ಸಿನಿಮಾ ಎಲ್ಲೆಡೆ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದೆ. ಶೇಕಡಾ 50ರಷ್ಟು ಆಸನಕ್ಕೆ ಅವಕಾಶ ನೀಡಿದ್ದರು ಕೂಡ ಸಿನಿಮಾ ಬಗ್ಗೆ ಒಳ್ಳೆಯ ಅಭಿಪ್ರಾಯ ಇದ್ದಿದ್ದರಿಂದ ಜನ ಬರುತ್ತಿದ್ದರು. ಆದರೆ ಕೊರೊನಾ ಎರಡನೇ ಅಲೆ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಜನ ಚಿತ್ರಮಂದಿರಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಬೆಳಗಿನ ಶೋಗಳಿಗೆ ಬರುವ ಪ್ರೇಕ್ಷಕರ ಸಂಖ್ಯೆಯಲ್ಲೂ ಇಳಿಮುಖವಾಗಿದೆ. ಆದುದರಿಂದ ಕೋವಿಡ್ 19 ಸುಧಾರಣೆಗೆ ಬಂದ ಮೇಲೆ ಸಿನಿಮಾ ಮರು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ ಎಂದಿದ್ದಾರೆ.
ನಿರ್ದೇಶಕ ಸುಬ್ರಮಣ್ಯ ಪ್ರಸಾದ್. ಸರ್ಕಾರದ ಆದೇಶವನ್ನು ಗೌರವಿಸುತ್ತ, ಸಾರ್ವಜನಿಕರ ಹಿತದೃಷ್ಟಿಯನ್ನೂ ಗಮನದಲ್ಲಿಟ್ಟುಕೊಂಡು `ಕೊಡೆಮುರುಗ’ ಸಿನಿಮಾವನ್ನು ಚಿತ್ರಮಂದಿರದಿಂದ ಹಿಂಪಡೆದಿದ್ದು, ಜುಲೈ ತಿಂಗಳಲ್ಲಿ ಮರು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧಾರ ಮಾಡಿದೆ. `ಕೊಡೆಮುರುಗ’ ಸುಬ್ರಮಣ್ಯ ಪ್ರಸಾದ್ ನಿರ್ದೇಶನದ ಚೊಚ್ಚಲ ಸಿನಿಮಾ. ಮುನಿಕೃಷ್ಣ ಹಾಗೂ ನಿರ್ದೇಶಕ ಸುಬ್ರಮಣ್ಯ ಪ್ರಸಾದ್, ಪಲ್ಲವಿ ಗೌಡ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಇದೊಂದು ಕಾಮಿಡಿ ಎಂಟಟೈನ್ಮೆಂಟ್ ಸಿನಿಮಾವಾಗಿದ್ದು ಕೆ. ರವಿಕುಮಾರ್ ಹಾಗೂ ಅಶೋಕ್ ಶಿರಾಲಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಎಂ ಎಸ್ ತ್ಯಾಗರಾಜ್ ಸಂಗೀತ ಸಂಯೋಜನೆ ರುದ್ರಮುನಿ ಬೆಳಗೆರೆ ಛಾಯಾಗ್ರಹಣ ಚಿತ್ರಕ್ಕಿದೆ.