ಬೆಂಗಳೂರು: ಇಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಆರಂಭದಲ್ಲಿ ಬೆಡ್ ಸಿಕ್ಕಿರಲಿಲ್ಲ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ಏಪ್ರಿಲ್ 15ರಂದು ಜ್ವರ ಕಾಣಿಸಿಕೊಂಡ ಹಿನ್ನೆಲೆ ಕುಮಾರಸ್ವಾಮಿ ಅವರು ಬೆಂಗಳೂರಿಗೆ ವಾಪಸ್ ಆಗಿದ್ದರು. ಮುಂಜಾಗ್ರತ ಕ್ರಮವಾಗಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕ್ವಾರಂಟೈನ್ ಆಗಿದ್ದರು. ಇಂದು ಬಂದ ಆರ್.ಟಿ-ಪಿಸಿಆರ್ ವರದಿಯಲ್ಲಿ ಸೋಂಕು ತಗುಲಿದ್ದು ಖಚಿತವಾಗಿತ್ತು. ಆರಂಭದಲ್ಲಿ ಕುಮಾರಸ್ವಾಮಿ ಅವರಿಗೆ ಬೆಡ್ ಸಿಕ್ಕಿರಲಿಲ್ಲ. ಹಾಗಾಗಿ ಖಾಸಗಿ ಆಸ್ಪತ್ರೆಯಲ್ಲಿಯೇ ಉಳಿದುಕೊಂಡಿದ್ದರು. ತದನಂತರ ಮಣಿಪಾಲ ಆಸ್ಪತ್ರೆಯಲ್ಲಿ ಕುಮಾರಸ್ವಾಮಿ ಅವರಿಗಾಗಿ ವಿಶೇಷ ವಾರ್ಡ್ ಸಿದ್ಧಪಡಿಸಲಾಯ್ತು.
ಆದ್ರೆ ಈ ಹಿಂದೆ ತಮ್ಮನ್ನ ಪರೀಕ್ಷಿಸಿದ್ದ ವೈದ್ಯರಿರುವ ಬನ್ನೇರುಘಟ್ಟ ರಸ್ತೆಯಲ್ಲಿಯ ಸಾಗರ್ ಅಪೋಲೋ ಆಸ್ಪತ್ರೆಗೆ ಕುಮಾರಸ್ವಾಮಿ ಅವರು ದಾಖಲಾಗಿದ್ದಾರೆ. ನಿನ್ನೆಯಷ್ಟೆ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೂ ಕೊರೊನಾ ದೃಢಪಟ್ಟ ಹಿನ್ನೆಲೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಯಡಿಯೂರಪ್ಪನವರ ಮೊಮ್ಮಗಳು ಸೌಂದರ್ಯ ಮತ್ತು ಪತಿ ಡಾ.ನಿರಂಜನ್ ಅವರಿಗೂ ಸೋಂಕು ತಗುಲಿದೆ. ಯಡಿಯೂರಪ್ಪನವರು ದಾಖಲಾದ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.