ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿ ಪ್ರತಿಷ್ಠಿತ ರಸ್ತೆಯಲ್ಲಿ ಒಂದಾಗಿರುವ ಕೊಯಿನ್ ರಸ್ತೆಯಲ್ಲಿ ಚರಂಡಿ ಕಾಮಗಾರಿ ಮಾಡುವ ವೇಳೆ ಮಣ್ಣು ಕುಸಿದು ಕಾರ್ಮಿಕ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ನಡೆದಿದೆ.
ರವಿ ಯಲಿವಾಳ ಸಾವನ್ನಪ್ಪಿರುವ ವ್ಯಕ್ತಿ. ಇವರು ಕುಂದಗೋಳ ತಾಲೂಕಿನ ಯಲಿವಾಳ ಗ್ರಾಮದ ನಿವಾಸಿ. ಕಾಮಗಾರಿ ವೇಳೆ ಮಣ್ಣು ಕುಸಿದು ಬಿದ್ದಿದ್ದರಿಂದ ಉಸಿರುಗಟ್ಟಿ ಕಾರ್ಮಿಕ ಮೊದಲು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಕಾರ್ಮಿಕ ಮಣ್ಣಿನಡಿ ಸಿಲುಕಿದ ವಿಚಾರ ತಿಳಿಯುತ್ತಿದ್ದಂತೆಯೇ ಸುತ್ತಮುತ್ತಲಿದ್ದ ಸಾರ್ವಜನಿಕರು ಕುಡಲೇ ಕಾರ್ಮಿಕನ ರಕ್ಷಣೆಗೆ ಮುಂದಾಗಿದ್ದಾರೆ. ಒಂದು ಗಂಟೆಗೂ ಅಧಿಕ ಸಮಯ ಮಣ್ಣಿನಲ್ಲಿ ಸಿಲುಕಿದ ಪರಿಣಾಮ ಕಾರ್ಮಿಕ ಇದೀಗ ಮೃತಪಟ್ಟಿದ್ದಾರೆ.
ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಇಂದಿನ ಪ್ರಕರಣ ಸೇರಿ ಇದೂವರೆಗೂ ಇಬ್ಬರು ಮೃತಪಟ್ಟಿದ್ದಾರೆ. ಹೀಗಾಗಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಸುವ ಗುತ್ತಿಗೆದಾರರು ಸುರಕ್ಷಿತ ಕ್ರಮಗಳನ್ನ ಕೈಗೊಂಡು ಕಾಮಗಾರಿ ನಡೆಸಲಿ ಎಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ. ಘಟನೆ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.