ಬೆಂಗಳೂರು: ರಾಜ್ಯ ಹೈಕೋರ್ಟ್ ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ತಾತ್ಕಾಲಿಕವಾಗಿ ತಡೆ ನೀಡಿದೆ
ಕೊರೊನಾ ರಣಾರ್ಭಟ ಹಿನ್ನೆಲೆಯಲ್ಲಿ ಪರೀಕ್ಷೆ ಇಲ್ಲದೆ ದ್ವಿತೀಯ ಪಿಯು ವಿದ್ಯಾರ್ಥಿಗಳು ಪಾಸ್ ಅಂತ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಆದರೆ ರಿಪೀಟರ್ಸ್ ಅಂದ್ರೆ ಈಗಾಗಲೇ ಫೇಲ್ ಆಗಿರೋ ವಿದ್ಯಾರ್ಥಿಗಳನ್ನು ಪರೀಕ್ಷೆ ಮಾಡಿಯೇ ಪಾಸ್ ಮಾಡಲು ನಿರ್ಧರಿಸಿದೆ. ಸರ್ಕಾರದ ಈ ದ್ವಂದ್ವ ನಿರ್ಧಾರಕ್ಕೆ ರಾಜ್ಯ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.
ರಿಪೀಟರ್ಸ್ ಪರವಾಗಿ ದಾಖಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪರೀಕ್ಷೆ ಇಲ್ಲದೇ ಪಾಸ್ ಮಾಡೋದಾದರೆ ಎಲ್ಲರನ್ನು ಪಾಸ್ ಮಾಡಿ. ಕೇವಲ ರೆಗ್ಯೂಲರ್ ವಿದ್ಯಾರ್ಥಿಗಳನ್ನು ಪಾಸ್ ಮಾಡಿ, ರಿಪೀಟರ್ಸ್ ಗೆ ಪರೀಕ್ಷೆ ಮಾಡುವ ನಿರ್ಧಾರ ಸರಿಯಲ್ಲ. ಗುರುವಾರದವರೆಗೆ ಪಿಯು ಫಲಿತಾಂಶ ಪ್ರಕಟಿಸುವಂತಿಲ್ಲ. ಈ ಬಗ್ಗೆ ಗುರುವಾರದೊಳಗೆ ಸ್ಪಷ್ಟನೆ ನೀಡಿ ಎಂದು ಅಡ್ವೋಕೇಟ್ ಜನೆರಲ್‍ಗೆ ಹೈಕೋರ್ಟ್ ಸೂಚನೆ ನೀಡಿದೆ. ಅಲ್ಲಿಯವರೆಗೂ ಫಲಿತಾಂಶ ಪ್ರಕಟಿಸಬಾರದು ಎಂದು ಕೋರ್ಟ್ ಸ್ಪಷ್ಟವಾಗಿ ತಿಳಿಸಿದೆ.
ಇದೇ ಗುರುವಾರ ಮತ್ತೆ ಅರ್ಜಿ ವಿಚಾರಣೆ ನಡೆಯಲಿದೆ. ಸರ್ಕಾರ ಎಲ್ಲರನ್ನೂ ಒಂದೇ ತಕ್ಕಡಿಗೆ ಹಾಕಿ ಪಾಸ್ ಮಾಡುವ ನಿರ್ಧಾರ ಕೈಗೊಳ್ಳುತ್ತಾ..? ಇಲ್ಲ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಳ್ಳುತ್ತಾ ಎಂಬ ಕುತೂಹಲ ಮನೆ ಮಾಡಿದೆ.