ನವದೆಹಲಿ: ಕೋವಿಡ್ ಸೋಂಕಿನಿಂದಾಗಿ ದೆಹಲಿಯ ಶ್ರೀ ಗಂಗಾ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಅಲ್ಲದೆ ವೈದ್ಯರು ಮನೆಯಲ್ಲೇ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.
ಜೂನ್ 2ರಂದು ಸೋನಿಯಾ ಅವರಿಗೆ ಕೋವಿಡ್-19 ದೃಢಪಟ್ಟಿತ್ತು. ಕೋವಿಡ್‌ನಿಂದ ಚೇತರಿಸಿಕೊಳ್ಳುತ್ತಿದ್ದ ಅವರಿಗೆ ಮೂಗಿನಲ್ಲಿ ರಕ್ತಸ್ರಾವ ಕಾಣಿಸಿಕೊಂಡಿತ್ತು. ಹಾಗಾಗಿ ಜೂನ್ 12ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ಕೋವಿಡ್ ನಂತ್ರ ಸೋನಿಯಾ ಗಾಂಧಿ ಶ್ವಾಸಕೋಶದಲ್ಲಿ ಫಂಗಲ್ ಇನ್ಫೆಕ್ಷನ್
ಕೋವಿಡ್ ನಂತರದ ಆರೋಗ್ಯ ಸಮಸ್ಯೆಗಳು ಹಾಗೂ ಶ್ವಾಸನಾಳದ ಕೆಳಭಾಗಕ್ಕೆ ತಗುಲಿದ್ದ ಸೋಂಕಿಗೆ ಚಿಕಿತ್ಸೆ ನೀಡಲಾಗಿತ್ತು. ಆಸ್ಪತ್ರೆಯಿಂದ ಇಂದು ಮನೆಗೆ ಮರಳಿರುವುದಾಗಿ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿ ಜೂನ್ 23ರಂದು ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ಈಗಾಗಲೇ ಸಮನ್ಸ್ ಜಾರಿಗೊಳಿಸಿದೆ. ಆದರೆ ವೈದ್ಯರು ಮನೆಯಲ್ಲೇ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿರುವುದರಿಂದ ಮುಂದೆ ಇಡಿ ವಿಚಾರಣೆಗೆ ಹಾಜರಾಗುತ್ತಾರೆಯೋ ಇಲ್ಲವೋ ಎಂಬುದೇ ಪ್ರಶ್ನೆ.