ರಾಯ್ಪುರ: ಬಿಜಾಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು (Security Forces) ಶನಿವಾರ ಮುಂಜಾನೆ ನಡೆಸಿದ ಎನ್‌ಕೌಂಟರ್‌ನಲ್ಲಿ ನಾಲ್ವರು ಮಾವೋವಾದಿಗಳು (Maoists) ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಿರ್ತೂರ್ ಪೊಲೀಸ್ ಠಾಣಾ ವ್ಯಾಪ್ತಿಯ ಪೊಮ್ರಾ ಅರಣ್ಯ ಪ್ರದೇಶದಲ್ಲಿ 30-40 ಮಾವೋವಾದಿಗಳು ಅಡಗಿದ್ದ ಬಗ್ಗೆ ಭದ್ರತಾ ಪಡೆಗಳಿಗೆ ಮಾಹಿತಿ ಲಭಿಸಿದೆ. ಭದ್ರತಾ ಪಡೆಗಳು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದು, ಬಿಜಾಪುರ ಜಿಲ್ಲೆಯ ಮಿರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಬೆಳಿಗ್ಗೆ 07:30 ರ ಸುಮಾರಿಗೆ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್‌ನಲ್ಲಿ ಡೀಸೆಲ್ ಖಾಲಿ – ದಾರಿ ಮಧ್ಯೆ ಅಸುನೀಗಿದ ಬಡ ಜೀವ
ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್), ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ಮತ್ತು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಜವಾನರೊಂದಿಗಿನ ಎನ್‌ಕೌಂಟರ್‌ನಲ್ಲಿ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲರು ಹತರಾಗಿದ್ದಾರೆ ಎಂದು ಬಿಜಾಪುರ ಎಸ್ಪಿ ಆಂಜನೇಯ ವರ್ಷ್ನಿ ತಿಳಿಸಿದ್ದಾರೆ.
ಎನ್‌ಕೌಂಟರ್ ಬಳಿಕ ಮೂವರು ನಕ್ಸಲರ ಮೃತದೇಹಗಳು ಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ವೇಳೆ ನಾಲ್ಕನೇ ನಕ್ಸಲನ ಮೃತದೇಹ ಪತ್ತೆಯಾಗಿದೆ. ಸ್ಥಳದಲ್ಲಿದ್ದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಪ್ರದೇಶದಲ್ಲಿ ಶೋಧ ಮುಂದುವರಿದಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಶ್ರದ್ಧಾವಾಕರ್ ಹತ್ಯೆ ಪ್ರಕರಣ – ಪಾಲಿಗ್ರಾಫ್ ಪರೀಕ್ಷೆ ವೇಳೆ ಅಫ್ತಾಬ್‍ಗೆ ಕೇಳಿದ ಪ್ರಶ್ನೆಗಳೇನು?
ಈ ವರ್ಷದ ಏಪ್ರಿಲ್‌ನಲ್ಲಿ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಪೊಲೀಸ್ ಶಿಬಿರದ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ನಾಲ್ವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಇದಕ್ಕೂ ಮುನ್ನ ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟದಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಸಹಾಯಕ ಸಬ್ ಇನ್ಸ್‌ಪೆಕ್ಟರ್ ಶ್ರೇಣಿಯ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದರು.