ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ತೀನೈಘಾಟ್ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರಿಗೆ ಗಂಭೀರ ಗಾಯಗಳಾಗಿವೆ.
ಜೊಯಿಡಾ ತಾಲೂಕಿನ ರಾಮನಗರ ಗೋವಾ ಸಂಪರ್ಕಿಸುವ ತೀನೈಘಾಟ್ ಇದಾಗಿದೆ. ವಾಹನಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಟೆಂಪೋ ಚಾಲಕ ಸಾವು ಕಂಡಿದ್ದಾನೆ. ಇದಲ್ಲದೇ ಖಾಸಗಿ ಬಸ್ಸಲ್ಲಿದ್ದ ನಾಲ್ವರು ಪ್ರಯಾಣಿಕರು ಹಾಗೂ ಬೈಕ್ ಚಾಲಕ ಗಂಭೀರ ಗಾಯಗೊಂಡಿದ್ದಾರೆ.
ಹೈದರಾಬಾದ್‌ನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಮ್ಯಾಂಗನೀಸ್ ತುಂಬಿಕೊಂಡು ಹೋಗುತ್ತಿದ್ದ ಟ್ರಕ್ ಓವರ್‌ಟೇಕ್ ಮಾಡುತ್ತಿದ್ದಾಗ ಮುಂಭಾಗ ಬರುತ್ತಿದ್ದ ಟೆಂಪೋಗೆ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ಕು ವಾಹನಗಳು ಜಖಂ ಆಗಿವೆ.
ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಆಗಮಿಸಿದ ರಾಮನಗರ ಪೊಲೀಸರು ಪರಿಶೀಲನೆ ನಡೆಸಿ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದಾರೆ. ಘಟನೆ ಸಂಬಂಧ ರಾಮನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.