ಮಂಗಳೂರು: ಸಂಚಾರದಲ್ಲಿದ್ದ ಬೈಕ್ ನಿಯಂತ್ರಣ ತಪ್ಪಿ ಬಿ.ಸಿ. ರೋಡ್ ಫ್ಲೈಓವರ್ನಿಂದ ಕೆಳಗಿನ ಸರ್ವೀಸ್ ರಸ್ತೆಗೆ ಬಿದ್ದ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಅಪಘಾತದ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದೃಷ್ಟವಶಾತ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಫ್ಲೈಓವರ್ನಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರ ಏಕಾಏಕಿ ನಿಯಂತ್ರಣ ಕಳೆದುಕೊಂಡು ಮೇಲಿನಿಂದ ಕೆಳಕ್ಕೆ ಉರುಳಿಬಿದ್ದಿದ್ದಾರೆ. ಆದರೆ, ಅವರು ಸರ್ವೀಸ್ ರಸ್ತೆಗೆ ಬಿದ್ದಿದ್ದು, ಆ ಸಂದರ್ಭ ರಸ್ತೆಯಲ್ಲಿ ಯಾವುದೇ ವಾಹನಗಳು ಸಂಚರಿಸದಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಅಪಘಾತದಲ್ಲಿ ಗಾಯಗೊಂಡ ಸವಾರನನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹೆಲ್ಮೆಟ್ ಧರಿಸಿದ್ದ ಕಾರಣ ತಲೆಗೆ ಯಾವುದೇ ಗಾಯವಾಗಿಲ್ಲ ಎಂದು ತಿಳಿದುಬಂದಿದೆ. ಸವಾರ ಅತ್ತಾವರ ನಿವಾಸಿ ಎನ್ನಲಾಗಿದ್ದು, ಅವರ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಬೈಕ್ ಸವಾರ ಯಾವ ಕಾರಣಕ್ಕೆ ನಿಯಂತ್ರಣ ಕಳೆದುಕೊಂಡು ಫ್ಲೈಓವರ್ನಿಂದ ಕೆಳಕ್ಕೆ ಬಿದ್ದಿದ್ದಾರೆ ಎಂಬುದು ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಬಂಟ್ವಾಳ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
