ಬಾಗಲಕೋಟೆ: ಮತಗಟ್ಟೆ ಒಳಗೆ ಹೋಗಿದ್ದ ಕಾರ್ಯಕರ್ತರು ಕಾಂಗ್ರೆಸ್‍ಗೆ ಮತ ಹಾಕುವಂತೆ ಮತದಾರರಿಗೆ ಒತ್ತಾಯ ಮಾಡಿದ ಘಟನೆ ಜಿಲ್ಲೆಯ ಗುಳೇದಗುಡ್ಡದಲ್ಲಿ ನಡೆದಿದೆ.
ಗುಳೇದಗುಡ್ಡದ ಮತಗಟ್ಟೆ ಸಂಖ್ಯೆ 25 ರಲ್ಲಿ ಮತದಾನ ಪ್ರಕ್ರಿಯೆ ನಡೆಯುತಿತ್ತು. ಈ ವೇಳೆ ಅಲ್ಲಿಗೆ ಬಂದ ಕೆಲ ಕಾರ್ಯಕರ್ತರು ಕಾಂಗ್ರೆಸ್‍ಗೆ ಮತ ಹಾಕುವಂತೆ ಒತ್ತಾಯಿಸಿದರು. ಇದರಿಂದಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆಯಿತು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಬಾಗಲಕೋಟೆ ನಗರದ ಪಂಕಾ ಮಸಿದಿ ಬಳಿ ಮತಗಟ್ಟೆ 2ರಲ್ಲಿ ಮತಚಲಾಯಿಸುವ ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದು ಗಲಾಟೆಯಾಗಿತ್ತು. ಇದರಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣವೇ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಈ ಮೂಲಕ ಎರಡೂ ಪಕ್ಷದ ಕಾರ್ಯಕರ್ತರನ್ನು ಚದುರಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.
ಮತದಾನ ಪ್ರಕ್ರಿಯೆ ಯತಾಸ್ಥಿತಿಯಲ್ಲಿ ಮುಂದುವರಿದಿದ್ದು, ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ನಿಯಮ ಉಲ್ಲಂಘನೆ ಆರೋಪ ಕೇಳಿ ಬಂದಿದೆ.