– ವೇತನ ಹೆಚ್ಚಳ ಕೇಳುವುದರಲ್ಲಿ ತಪ್ಪಿಲ್ಲ, ಆದರೆ ಸರಿಯಾದ ಮಾರ್ಗದಲ್ಲಿ ಬೇಡಿಕೆ ಸಲ್ಲಿಸಿ
ಮಡಿಕೇರಿ: ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎನ್ನುವುದು ಸರಿಯಲ್ಲ. (ASHA workers’ protest) ಅವರ ಬೇಡಿಕೆಗಳು ಸರ್ಕಾರದ ಗಮನದಲ್ಲಿದ್ದು, ಸೂಕ್ತ ತೀರ್ಮಾನ ಕೈಗೊಳ್ಳುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿಗಳ (D K Shivakumar) ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ (A S Ponnanna) ಹೇಳಿದ್ದಾರೆ.
ಮಡಿಕೇರಿಯಲ್ಲಿ ಮಾತಾನಾಡಿದ ಅವರು ಹಣದುಬ್ಬರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೇತನ ಹೆಚ್ಚಳಕ್ಕೆ ಒತ್ತಾಯಿಸುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ, ತಮ್ಮ ಬೇಡಿಕೆಗಳನ್ನು ಸರಿಯಾದ ಮಾರ್ಗದಲ್ಲಿ ಸಲ್ಲಿಸಬೇಕು. ಕೆಲಸಕ್ಕೆ ಸೇರುವಾಗಲೇ ವೇತನದ ಬಗ್ಗೆ ಅರಿವು ಇರುತ್ತದೆ. ಹಾಗೆಂದು ವೇತನ ಹೆಚ್ಚಳ ಕೇಳುವುದನ್ನು ನಾವು ವಿರೋಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ ರಾಜ್ಯದ ಅಭಿವೃದ್ಧಿ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧವೂ ಪೊನ್ನಣ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದ ಅಭಿವೃದ್ಧಿ ಕಾಮಗಾರಿಗಳ ಶೇಕಡಾ 84ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ. ಕೇಂದ್ರದಿಂದ ನಿರೀಕ್ಷಿತ ಪ್ರಮಾಣದಲ್ಲಿ ಅನುದಾನ ಹಾಗೂ ಸಹಕಾರ ಸಿಗುತ್ತಿಲ್ಲ ಎಂದು ಆರೋಪಿಸಿದ್ದಾರೆ. ಭೂಸ್ವಾಧೀನ ಮತ್ತು ನಿರ್ಮಾಣ ವೆಚ್ಚಕ್ಕೂ ಕೇಂದ್ರದ ನೆರವು ದೊರೆಯುತ್ತಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ನಡೆಯಬೇಕಾದ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಸೂಕ್ತ ಸಹಕಾರ ನೀಡಬೇಕು.ಇದನ್ನೂ ಓದಿ: ಸರಿಯಾಗಿ ಕೆಲಸ ಮಾಡಿಲ್ಲ ಅಂದ್ರೆ ಒಂದೇ ಗಂಟೆಯಲ್ಲಿ ಎತ್ತಂಗಡಿ – ನೂತನ ಕಮಿಷನರೇಟ್ಗಳಿಗೆ ಸಿಎಂ ಖಡಕ್ ವಾರ್ನಿಂಗ್
ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಒಂದು ರೀತಿಯ, ಇತರ ರಾಜ್ಯಗಳಿಗೆ ಮತ್ತೊಂದು ರೀತಿಯ ಅನುದಾನ ನೀಡುವ ಮೂಲಕ ತಾರತಮ್ಯ ಮಾಡಬಾರದು ಎಂದು ಆಗ್ರಹಿಸಿದ್ದಾರೆ. ಆರೋಗ್ಯ ಕ್ಷೇತ್ರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜಂಟಿ ಜವಾಬ್ದಾರಿಯಾಗಿದ್ದು, ಕೇಂದ್ರ ಸರ್ಕಾರವೂ ತನ್ನ ಪಾಲಿನ ನೆರವು ನೀಡಬೇಕು. ಜಿಎಸ್ಟಿ ಹಾಗೂ ಆದಾಯ ತೆರಿಗೆ ಸೇರಿದಂತೆ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲನ್ನು ಸಮರ್ಪಕವಾಗಿ ಹಂಚಿಕೆ ಮಾಡಬೇಕು. ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ಹೆಚ್ಚುವರಿ ಅನುದಾನ ನೀಡುವ ವಿಚಾರದ ಬಗ್ಗೆಯೂ ಪ್ರಸ್ತಾಪಿಸಿದ ಅವರು, ನಮಗೆ ಹೆಚ್ಚುವರಿ ಹಣ ಬೇಡ, ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾದ ಪಾಲನ್ನು ನೀಡಿ ಎಂದು ಒತ್ತಾಯಿಸಿದ್ದಾರೆ.
ರಾಜ್ಯಕ್ಕೆ ಬರಬೇಕಾದ ಅನುದಾನ ದೊರೆತರೆ ಅಭಿವೃದ್ಧಿ ಕಾಮಗಾರಿಗಳಿಗೆ ಮತ್ತಷ್ಟು ವೇಗ ನೀಡಲು ಸಾಧ್ಯ. ಕೇಂದ್ರದಲ್ಲಿ ಅಧಿಕಾರ ಹೊಂದಿರುವ ಸರ್ಕಾರ ರಾಜ್ಯದ ಅಭಿವೃದ್ಧಿಗೆ ಸಹಕಾರ ನೀಡಬೇಕೇ ಹೊರತು, ಕೇವಲ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಎ.ಎಸ್. ಪೊನ್ನಣ್ಣ ತಿರುಗೇಟು ನೀಡಿದ್ದಾರೆ.ಇದನ್ನೂ ಓದಿ: ಶೆಟ್ಟಿಹಳ್ಳಿ ಗ್ರಾಮದ ಕಾಫಿತೋಟದಲ್ಲಿ ನಿಂತ 32 ಆನೆಗಳು – ಡ್ರೋನ್ ಕ್ಯಾಮೆರಾದಲ್ಲಿ ಕಾಡಾನೆ ಹಿಂಡು ಪ್ರತ್ಯಕ್ಷ
