ಚಂಡೀಗಢ: ಪಂಜಾಬ್‌ನ (Punjab) ತರ್ನ್ ತರನ್‌ನಲ್ಲಿ ಆಮ್ ಆದ್ಮಿ ಪಕ್ಷದ (AAP) ಕಾರ್ಯಕರ್ತನನ್ನು ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು (Police) ತಿಳಿಸಿದ್ದಾರೆ.
ಹತ್ಯೆಗೀಡಾದ ಆಪ್ ಕಾರ್ಯಕರ್ತನನ್ನು ತಲ್ವಾಂಡಿ ಮೌರ್ ಸಿಂಗ್ ಗ್ರಾಮದ ನಿವಾಸಿ ರಾಜ್ವಿಂದರ್ ಸಿಂಗ್ ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿ ಬಂದ ಮೂವರು ಅಪರಿಚಿತರು, ಟಕ್ಕರ್‌ಪುರ ಗ್ರಾಮದ ಬಳಿ ಸಿಂಗ್ ಅವರ ಕಾರನ್ನು ಅಡ್ಡಗಟ್ಟಿದ್ದಾರೆ. ಬಳಿಕ ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೂಡಲೇ ರಾಜ್ವಿಂದರ್ ಸಿಂಗ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಈ ವೇಳೆ ವೈದ್ಯರು ಪರೀಕ್ಷಿಸಿ ಅವರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ.
ಪಕ್ಷದ ಕಾರ್ಯಕರ್ತನ ಸಾವಿಗೆ ಆಮ್ ಆದ್ಮಿ ಪಕ್ಷ ಶೋಕ ವ್ಯಕ್ತಪಡಿಸಿದೆ. ಆಪ್ ಸಂಸದ ಮಲ್ವಿಂದರ್ ಸಿಂಗ್ ಕಾಂಗ್ ಅವರು ರಾಜ್ವಿಂದರ್ ಅವರ ಕುಟುಂಬದೊಂದಿಗೆ ಪಕ್ಷ ಮತ್ತು ರಾಜ್ಯ ಸರ್ಕಾರ ನಿಂತಿದೆ ಎಂದು ಸಾಂತ್ವನ ಹೇಳಿದ್ದಾರೆ.
ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.