ಕಾರವಾರ: 1980ರಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ವ್ಯಕ್ತಿಯೊಬ್ಬನು ಸುಮಾರು 46 ವರ್ಷಗಳ ಕಾಲ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಇದೀಗ ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ 1980ರಲ್ಲಿ ದಾಖಲಾಗಿದ್ದ ಮೂರು ಪ್ರತ್ಯೇಕ ಕಳ್ಳತನ ಪ್ರಕರಣಗಳಲ್ಲಿ ಆರೋಪಿಯಾಗಿರುವ ಮಹಮ್ಮದ್ ಯೂಸುಫ್ ತಂದೆ ಅಬ್ದುಲ್ ರೆಹಮಾನ್ ಖಾಜಾ (68), ಮೂಲತಃ ಉಡುಪಿ ಜಿಲ್ಲೆಯ ಪರ್ಕಳ ನಿವಾಸಿಯಾಗಿದ್ದು, ಕಳೆದ 46 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ.
ಆರೋಪಿಯ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿದ ಪೊಲೀಸರು ವಿವಿಧ ತನಿಖಾ ಆಯಾಮಗಳನ್ನು ಅನುಸರಿಸಿ, ಖಚಿತವಾದ ತಾಂತ್ರಿಕ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದರು. ಇದರ ಫಲವಾಗಿ ಆಗಸ್ಟ್ 14ರಂದು ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದು, ಕಾನೂನುಬದ್ಧವಾಗಿ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಬಳಿಕ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಈ ಕಾರ್ಯಾಚರಣೆಯನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್. ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ, ಶಿರಸಿ ಉಪವಿಭಾಗದ ಡಿವೈಎಸ್‌ಪಿ ಗೀತಾ ಪಾಟೀಲ್ ಹಾಗೂ ಸಿಪಿಐ ಸಂಪತ್ ಇ.ಸಿ. ಅವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಯಿತು.
ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯ ಪಿಎಸ್‌ಐ ಬಸವರಾಜ ಕನಶೆಟ್ಟಿ ಹಾಗೂ ಪಿಎಸ್‌ಐ ಗೀತಾ ಕಲಘಟಗಿ ಅವರ ನೇತೃತ್ವದಲ್ಲಿ ಅಶೋಕ ಹರಿಕಂತ್ರ, ಕೋಟೇಶ್ ನಾಗರವಳ್ಳಿ, ಸಂದೀಪ ನಿಂಬಾಯಿ, ರಾಕೇಶ್ ಎನ್.ಹೆಚ್., ಅರುಣ ಲಮಾಣಿ ಹಾಗೂ ತಾಂತ್ರಿಕ ವಿಭಾಗದ ಬಬನ್ ಕದಂ, ಉದಯ ಗುನಗಾ ಮತ್ತು ಮಹಾಲಿಂಗ ಸಾವಳಗಿ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿರುವ ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯವನ್ನು ಜಿಲ್ಲಾ ಪೊಲೀಸ್ ಇಲಾಖೆ ಅಭಿನಂದಿಸಿದೆ.
