ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ (76) (Bank Janardhan) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಂದು ನಿಧನರಾಗಿದ್ದಾರೆ.
ಬಹುದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜನಾರ್ಧನ್ ತಡರಾತ್ರಿ 2:30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಸುಲ್ತಾನ್ ಪಾಳ್ಯದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 – 4 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಪಾತ್ರ:
ಪೋಷಕ ನಟ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ಜನಾರ್ಧನ್ ಅವರು ಸುಮಾರು 500ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾ ಅಲ್ಲದೇ, ಕಿರುತೆರೆ ಹಾಗೂ ರಂಗಭೂಮಿಯಲ್ಲೂ ಛಾಪು ಮೂಡಿಸಿದ್ದಾರೆ.
80, 90ರ ದಶಕದ ಬಹುಬೇಡಿಕೆ ಹೊಂದಿದ್ದ ಹಾಸ್ಯನಟರಲ್ಲಿ ಒಬ್ಬರಾದ ಜನಾರ್ಧನ್ ಉಪೇಂದ್ರ ನಿರ್ದೇಶನದ ಶ್, ತರ್ಲೆ ನನ್ಮಗ, ಬೆಳ್ಳಿಯಪ್ಪ ಬಂಗಾರಪ್ಪ, ಗಣೇಶ ಸುಬ್ರಮಣ್ಯ, ಕೌರವ ಚಿತ್ರಗಳಲ್ಲಿ ಗಮನ ಸೆಳೆಯುವ ಪಾತ್ರ ನಿರ್ವಹಿಸಿದ್ದಾರೆ. ಮಾಂಗಲ್ಯ, ರೋಬೋ ಫ್ಯಾಮಿಲಿ, ಪಾಪ ಪಾಂಡು, ಜೋಕಾಲಿ ಸೇರಿದಂತೆ ಸಾಲು ಸಾಲು ಸೀರಿಯಲ್‌ಗಳಲ್ಲಿ ಬಣ್ಣ ಹಚ್ಚಿ ಸೈ ಎನಿಸಿಕೊಂಡಿದ್ದಾರೆ.