ಬೆಂಗಳೂರು: ಸದ್ಯ ದೇಶದ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತಿರುವ ರಫೇಲ್ ವಿಮಾನ ಭಾರತದಲ್ಲಿ ಲ್ಯಾಂಡ್ ಆಗಿದೆ. ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ಫ್ರಾನ್ಸಿನ ಡಸಾಲ್ಟ್ ಕಂಪನಿಯ 3 ರಫೇಲ್ ವಿಮಾನಗಳು ಯಲಹಂಕ ವಾಯುನೆಲೆಗೆ ಆಗಮಿಸಿವೆ.
ಮೂರು ವಿಮಾನಗಳ ಪೈಕಿ 2 ವಿಮಾನಗಳು ವೈಮಾನಿಕ ಪ್ರದರ್ಶನ ನೀಡಿದರೆ ಒಂದು ವೀಕ್ಷಣೆಗೆ ಇರಿಸಲಾಗುತ್ತದೆ. ಹಾರಾಟ ಪ್ರದರ್ಶನ ನೀಡಲಿರುವ ವಿಮಾನಗಳ ಅಧಿಕೃತ ಪೂರ್ವಸಿದ್ಧತೆಯ ಹಾರಾಟ ಗುರುವಾರದಿಂದ ಆರಂಭವಾಗಲಿದೆ. 12ನೇ ಆವೃತ್ತಿಯ ಏರೋ ಇಂಡಿಯಾ ವೈಮಾನ ನಿಕ ಪ್ರದರ್ಶನ ಫೆ.20 ರಿಂದ ಫೆ.24ರವರೆಗೆ ನಡೆಯಲಿದೆ. ಇದನ್ನೂ ಓದಿ: ರಫೇಲ್ ಡೀಲ್ – ಯಾವುದು ಅಗ್ಗ? ಯಾವುದು ದುಬಾರಿ?
ಇದುವರೆಗೆ ದೇಶ- ವಿದೇಶಗಳ 365 ಕಂಪನಿಗಳು ಪ್ರದರ್ಶನದಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಂಡಿದ್ದು, ಆಕಾಶದಲ್ಲಿ ಪ್ರದರ್ಶನ ನೀಡಲು 31 ವಿಮಾನಗಳು ಒಪ್ಪಿಗೆ ನೀಡಿವೆ. 22 ವಿಮಾನಗಳನ್ನು ಪ್ರದರ್ಶನಕ್ಕಿಡಲಾಗುತ್ತಿದ್ದು, ದೇಶೀಯ ಸಾರಂಗ್, ಸೂರ್ಯಕಿರಣ್ ವಿಮಾನಗಳು ಭಾಗವಹಿಸಲಿವೆ.
ರಫೇಲ್ ವಿಶೇಷತೆ ಏನು?
ಎರಡು ಎಂಜಿನ್, ಎರಡು ಸೀಟ್ ಗಳನ್ನು ಹೊಂದಿರುವ ವಿಮಾನ ಗಂಟೆಗೆ ಗರಿಷ್ಟ 2 ಸಾವಿರ ಕಿ.ಮೀ ವೇಗದಲ್ಲಿ ಹಾರಾಟ ನಡೆಸಬಲ್ಲದು. 9,500 ಕೆಜಿ ತೂಕದ ಈ ವಿಮಾನ 9,500 ಕೆಜಿ ತೂಕದ ಶಸ್ರ್ತಾಸ್ತ್ರಗಳನ್ನು ಹೊತ್ತುಕೊಂಡು ಹೋಗುವ ಸಾಮರ್ಥ್ಯವನ್ನು ಹೊಂದಿದೆ. ಈ ವಿಮಾನ ಇಳಿಯಲು ಮತ್ತು ಹಾರಾಟಕ್ಕೆ 400 ಮೀಟರ್ ಉದ್ದದ ರನ್‍ವೇ ಅಗತ್ಯವಿಲ್ಲ.
ವೈರಿಗಳನ್ನು ಗುರುತಿಸಲು ರಫೇಲ್ ವಿಮಾನದಲ್ಲಿ ಸ್ಪೆಕ್ಟ್ರಾ ಸಿಸ್ಟಂ ಇದೆ. ಥೇಲ್ಸ್ ಗ್ರೂಪ್ ಈ ಸ್ಪೆಕ್ಟ್ರಾ ಸಿಸ್ಟಂ ಅನ್ನು ಅಭಿವೃದ್ಧಿ ಪಡಿಸಿದೆ. ರೇಡಿಯೋ ಫಿಕ್ವೆನ್ಸಿ, ರೇಡಾರ್ ವಾರ್ನಿಂಗ್ ರಿಸೀವರ್, ಲೇಸರ್ ವಾರ್ನಿಂಗ್, ಮಿಸೈಲ್ ವಾರ್ನಿಂಗ್, ರೇಡಾರ್ ಜಾಮರ್ ಗಳನ್ನು ಸ್ಪೆಕ್ಟ್ರಾ ಸಿಸ್ಟಂ ನಲ್ಲಿರುವ ಸೆನ್ಸರ್ ಗಳು ಗ್ರಹಿಸುತ್ತವೆ. 1800 ಕಿ.ಮಿ ವ್ಯಾಪ್ತಿ ವಿರೋಧಿಗಳ ಕಾರ್ಯ ಚಟುವಟಿಕೆಯನ್ನು ಗ್ರಹಿಸುವ ಸಾಮರ್ಥ್ಯ ಹೊಂದಿದೆ. ಈ ಕಾರಣಕ್ಕಾಗಿಯೇ ರಫೇಲ್ ವಿಮಾನ ಬೇರೆ ಯುದ್ಧ ವಿಮಾನಗಳಿಗಿಂತ ಭಿನ್ನವಾಗಿ ಗುರುತಿಸಿಕೊಂಡಿದೆ.
ಡಸಾಲ್ಟ್ ಕಂಪನಿ 1986ರಲ್ಲಿ ಮೊದಲ ರಫೇಲ್ ವಿಮಾನವನ್ನು ನಿರ್ಮಿಸಿದ್ದು, ಭಾರತ ಅಲ್ಲದೇ ಈಜಿಪ್ಟ್, ಕತಾರ್ ದೇಶಗಳು ರಫೇಲ್ ಖರೀದಿ ಸಂಬಂಧ ಡಸಾಲ್ಟ್ ಕಂಪನಿಯ ಜೊತೆ ಮಾತುಕತೆ ನಡೆಸಿವೆ. ಇದನ್ನೂ ಓದಿ: ಪ್ರಧಾನಿ ಮೋದಿಗೆ ಅತಿ ದೊಡ್ಡ ಗೆಲುವು: ಸುಪ್ರೀಂ ತೀರ್ಪಿನಲ್ಲಿರುವ ಪ್ರಮುಖ ಅಂಶಗಳು ಏನು?
ಯಾವ ದೇಶ ಏನು ಬೇಡಿಕೆ ಇಡುತ್ತದೋ ಆ ಬೇಡಿಕೆಗೆ ಅನುಗುಣವಾಗಿ ಡಸಾಲ್ಟ್ ಕಂಪನಿ ರಫೇಲ್ ವಿಮಾನವನ್ನು ಅಭಿವೃದ್ಧಿ ಪಡಿಸುತ್ತದೆ. ಲೋ ಬ್ಯಾಂಡ್ ಜಾಮರ್, 10 ಗಂಟೆಗಳ ಹಾರಾಟ ಮಾಹಿತಿ ಸಂಗ್ರಹ, ಇಸ್ರೇಲಿ ಹೆಲ್ಮೆಟ್ ಮೌಂಟೆಡ್ ಡಿಸ್ಪ್ಲೇ, ರೆಡಾರ್ ವಾರ್ನಿಂಗ್ ಇನ್ಫ್ರಾರೆಡ್ ಶೋಧ ಮತ್ತು ಟ್ರ್ಯಾಕಿಂಗ್ ಸೇರಿದಂತೆ ಹಲವು ಅತ್ಯಾಧುನಿಕ ಉಪಕರಣಗಳ ಹಾಗೂ ಸೌಲಭ್ಯಗಳನ್ನು ಅಳವಡಿಸಬೇಕೆಂದು ಭಾರತ ಬೇಡಿಕೆ ಇಟ್ಟಿದ್ದು, ಈ ಬೇಡಿಕೆಗೆ ಅನುಗುಣವಾಗಿ ರಫೇಲ್ ವಿಮಾನ ತಯಾರಾಗುತ್ತಿದೆ.
#WATCH Two Rafale fighter planes (total 3) of the French Air Force land in Bengaluru for the Aero India show. Top IAF officers including IAF Deputy Chief Air Marshal VIvek Chaudhari to fly the plane during Aero India show. pic.twitter.com/i4e42pQKVI
— ANI (@ANI) February 13, 2019