ಕೊಪ್ಪಳ: ಕೆಕೆಆರ್‌ಡಿಬಿ ಅನುದಾನದಲ್ಲಿ ಆಡಳಿತಾತ್ಮಕ ಅನುಮೋದನೆ ಪಡೆದ ನಂತರ ಕಾಮಗಾರಿ ವಿಳಂಬವಾದರೆ ಅನುಷ್ಠಾನ ಏಜೆನ್ಸಿಗಳನ್ನೇ ಹೊಣೆ ಮಾಡಲಾಗುವುದು ಎಂದು ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿ ಶಾಸ್ತ್ರ ಸಚಿವ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
Advertisement
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಮಂಜೂರಾದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಗೆ ಕೆಕೆಆರ್‌ಡಿಬಿ ಇಂದ ಕಳೆದ 2-3 ವರ್ಷಗಳ ಹಿಂದೆ ಮಂಜೂರಾದ ಕಾಮಗಾರಿಗಳಲ್ಲಿ ಅನೇಕ ಕಾಮಗಾರಿಗಳು ಇನ್ನೂ ಆರಂಭವಾಗಿಲ್ಲ. ಆಡಳಿತಾತ್ಮಕ ಅನುಮೋದನೆ ಪಡೆದ ನಂತರವೂ ಕಾಮಗಾರಿ ಆರಂಭ ಮಾಡದೇ ಇರುವುದು ಅನುಷ್ಠಾನ ಏಜೆನ್ಸಿಗಳ ಇಚ್ಛಾಶಕ್ತಿ ಕೊರತೆಯನ್ನು ತೋರಿಸುತ್ತದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲೂ ಕಾಮಗಾರಿಗಳನ್ನು ನಿಗದಿತ ಅನುಷ್ಠಾನ ಏಜೆನ್ಸಿಗಳಿಗೆ ಹಂಚಿಕೆ ಮಾಡಲಾಗಿದೆ. ಸಂಬಂಧಿಸಿದ ಇಲಾಖೆಗಳು ತಮ್ಮ ಇಲಾಖಾ ಕಾಮಗಾರಿಗಳನ್ನು ಏಜೆನ್ಸಿಗಳ ಮೂಲಕ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳು ಹಾಗೂ ಅನುಷ್ಠಾನ ಏಜೆನ್ಸಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಸತ್ತಿರುವ ವಿಚಾರಕ್ಕೆ ಹೋರಾಟ ಮಾಡಿದ್ದು ಸಣ್ಣ ವಿಚಾರನಾ?: ಸಿದ್ದರಾಮಯ್ಯ ಕಿಡಿ
Advertisement
Advertisement
ಕಾಮಗಾರಿ ಅನುಷ್ಠಾನಕ್ಕೆ ಆಡಳಿತಾತ್ಮಕ ಅನುಮೋದನೆ ಪಡೆಯುವ ಮೊದಲೇ ಕಾಮಗಾರಿ ಅನುಷ್ಠಾನಕ್ಕೆ ಬರಬಹುದಾದ ತಾಂತ್ರಿಕ ಸಮಸ್ಯೆಗಳನ್ನು ಪರಿಶೀಲಿಸಿ, ಸೂಕ್ತ ಕ್ರಿಯಾ ಯೋಜನೆಯೊಂದಿಗೆ ಕಾಮಗಾರಿ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಬಹುತೇಕ ಎಲ್ಲ ತಾಲೂಕುಗಳಲ್ಲಿ ಕಾಮಗಾರಿಗಳು ಆರಂಭವಾಗಿಲ್ಲ ಮತ್ತು ಬಹಳಷ್ಟು ಕಾಮಗಾರಿಗಳು ಪೂರ್ಣಗೊಂಡಿಲ್ಲ. ಒಂದು ಕಾಮಗಾರಿಯನ್ನು ಪೂರ್ಣಗೊಳಿಸಲು ನಿಗದಿತ ಗಡುವನ್ನು ನೀಡಲಾಗಿರುತ್ತದೆ. ಆ ನಂತರವೂ ಹಲವಾರು ವರ್ಷಗಳ ಕಾಲ ಒಂದೇ ಕಾಮಗಾರಿಗೆ ಸಮಯವನ್ನು ಮೀಸಲಿರಿಸಿದರೆ ಜಿಲ್ಲೆಯ ಉಳಿದ ಭಾಗಗಳಲ್ಲಿನ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಳ್ಳುವುದು ಯಾವಾಗ ಎಂದು ಅವರು ಸಂಬಂಧಿಸಿದ ಅಧಿಕಾರಿಗಳನ್ನು ಪ್ರಶ್ನಿಸಿದರು.
Advertisement
ಪ್ರಸಕ್ತ ಸಾಲಿನ ಅಭಿವೃದ್ಧಿ ಕಾಮಗಾರಿಗಳಿಗೆ ಕೆಕೆಆರ್‌ಡಿಬಿಗೆ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಬೇಕಾಗಿದೆ. ಆದ್ದರಿಂದ ಜಿಲ್ಲೆಯ ಎಲ್ಲ ಕ್ಷೇತ್ರಗಳ ಶಾಸಕರು ತಮ್ಮ ಕ್ಷೇತ್ರದಲ್ಲಿ ಅಗತ್ಯವಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಪ್ರಸ್ತಾವನೆ ಸಲ್ಲಿಸಿದಲ್ಲಿ, ಅವುಗಳನ್ನು ಕ್ರೋಢೀಕರಿಸಿ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಿ ಮಂಜೂರಾತಿ ಪಡೆಯ ಬಹುದು. ಆದ್ದರಿಂದ ಎರಡು ದಿನಗಳಲ್ಲಿ ಎಲ್ಲ ಶಾಸಕರು ತಮ್ಮ ಕ್ಷೇತ್ರದ ಕಾಮಗಾರಿಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸಿ ಎಂದು ಶಾಸಕರಿಗೆ ತಿಳಿಸಿದರು. ಇದನ್ನೂ ಓದಿ: ಸಂತೋಷ್ ಪಾಟೀಲ್ ಪತ್ನಿಗೆ 11 ಲಕ್ಷ ರೂ. ಚೆಕ್ ವಿತರಿಸಿದ ಡಿಕೆಶಿ
ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರು ಹಾಗೂ ಯಲಬುರ್ಗಾ ಕ್ಷೇತ್ರದ ಶಾಸಕರಾದ ಹಾಲಪ್ಪ ಆಚಾರ್ ಮಾತನಾಡಿ, ಕ್ಷೇತ್ರದ ಅಭಿವೃದ್ಧಿ ಬಗ್ಗೆ ಶಾಸಕರಿಗೆ ಹೆಚ್ಚಿನ ಜವಾಬ್ದಾರಿ ಇರುತ್ತದೆ. ಸಂಬಂಧಿಸಿದ ಅಧಿಕಾರಿಗಳು ಹಾಗೂ ಅನುಷ್ಠಾನ ಏಜೆನ್ಸಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡುವುದರ ಮೂಲಕ ಕಾಮಗಾರಿಗಳನ್ನು ಪೂರ್ಣಗೊಳಿಸಲು ಶಾಸಕರು ಆಗಾಗ ಕಾಮಗಾರಿ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸುವುದು ಮುಖ್ಯವಾಗುತ್ತದೆ. ಅದರಂತೆ ನಾವೆಲ್ಲರೂ ನಮ್ಮ ನಮ್ಮ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗುವ ಕಾಮಗಾರಿಗಳ ಬಗ್ಗೆ ಕೆಕೆಆರ್‌ಡಿಬಿಗೆ ಪ್ರಸ್ತಾವನೆ ಸಲ್ಲಿಸಿ, ಕ್ಷೇತ್ರದ ಅಭಿವೃದ್ಧಿಗೆ ಕ್ರಮ ವಹಿಸಬೇಕಿದೆ ಎಂದು ಹೇಳಿದರು.