ನವದೆಹಲಿ: ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ಹಾಗೂ ರಾಜಸ್ಥಾನದ ಸಹ-ಉಸ್ತುವಾರಿ ತರುಣ್ ಕುಮಾರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ತರುಣ್ ಕುಮಾರ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ಅವರ ಕೈಗೆ ಮತ್ತೊಂದು ರಾಜೀನಾಮೆ ಪತ್ರ ತಲುಪಿದಂತಾಗಿದೆ.
AICC Secretary and Rajasthan Co-Incharge Tarun Kumar submits his resignation from the post, to Congress President Rahul Gandhi, pic.twitter.com/CmE4rKGrBG
— ANI (@ANI) June 29, 2019
ಪಕ್ಷವು ನನಗೆ 2017ರಲ್ಲಿಯೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡಿದೆ. ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಮುನ್ನಡೆ ಸಾಧಿಸಿ, ಸರ್ಕಾರ ರಚನೆ ಮಾಡಿದ್ದೇವೆ. ಲೋಕಸಭಾ ಚುನಾವಣೆ ವೇಳೆಯೂ ಉತ್ತಮ ರೀತಿಯಲ್ಲಿ ಪ್ರಚಾರ ಹಾಗೂ ಪಕ್ಷ ಸಂಘಟನೆ ಮಾಡಿದ್ದೇವು. ಆದರೆ ಫಲಿತಾಂಶ ನಮ್ಮ ನಿರೀಕ್ಷೆಯನ್ನು ಹುಸಿಗೊಳಿಸಿದೆ. ಪಕ್ಷದ ಸೋಲನ್ನು ಸಂಪೂರ್ಣವಾಗಿ ನೀವು ಹೊತ್ತು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವಿರಿ. ಈ ಸೋಲಿಗೆ ನಾವು ಕೂಡ ಜವಾಬ್ದಾರರಾಗಿದ್ದೇವೆ. ಹೀಗಾಗಿ ನಿಮಗೆ ರಾಜೀನಾಮೆ ಪತ್ರ ನೀಡುತ್ತಿರುವೆ ಎಂದು ತರುಣ್ ಕುಮಾರ್, ರಾಹುಲ್ ಗಾಂಧಿ ಅವರಿಗೆ ತಿಳಿಸಿದ್ದಾರೆ.
ರಾಹುಲ್ ಗಾಂಧಿ ಅವರೇ ಪಕ್ಷವನ್ನು ಮುನ್ನಡೆಸಬೇಕು ಎಂದು ಅನೇಕ ಯುವಕರು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್‍ನ ಹಿರಿಯ ನಾಯಕರ ಮೇಲೆ ಒತ್ತಡ ಹೇರುತ್ತಿದ್ದಾರೆ.
ಕಾಂಗ್ರೆಸ್‍ನ ಮಧ್ಯಪ್ರದೇಶ ಘಟಕದ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ದೀಪಕ್ ಬಬಾರಿಯಾ ಮತ್ತು ಗೋವಾ ಕಾಂಗ್ರೆಸ್ ಘಟಕ ಅಧ್ಯಕ್ಷ ಗಿರೀಶ್ ಚೊಡನ್‍ಕರ್ ಅವರು ಈಗಾಗಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಎಐಸಿಸಿ ಪ್ರಧಾನ ಕಚೇರಿಗೆ ಭೇಟಿ ನೀಡಿದ 300ಕ್ಕೂ ಹೆಚ್ಚು ಯುವ ನಾಯಕರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.