ಯಾದಗಿರಿ: ಆಲಮಟ್ಟಿ ಅಣೆಕಟ್ಟಿನಲ್ಲಿ ಒಳಹರಿವು ಹೆಚ್ಚಳವಾದ ಹಿನ್ನೆಲೆ, ಕೃಷ್ಣ ನದಿಪಾತ್ರದ ನಿವಾಸಿಗಳಿಗೆ ಯಾದಗಿರಿ ಜಿಲ್ಲಾಡಳಿತ ಹೈ ಹಲರ್ಟ್ ಘೋಷಣೆ ಮಾಡಿದೆ.
ಆಲಮಟ್ಟಿ ಜಲಾಶಯದ ಸದ್ಯದ ಒಳ ಹರಿವು 1,10,000 ಕ್ಯೂಸೆಕ್ ಇದ್ದು, ಇನ್ನೂ ಕೆಲವೇ ಗಂಟೆಗಳಲ್ಲಿ ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿಯಾಗಲಿದೆ. ಹೀಗಾಗಿ ಯಾದಗಿರಿ ಜಿಲ್ಲೆಯ ನಾರಾಯಣಪುರ ಅಣೆಕಟ್ಟುಗೆ ಇಂದು ಸಂಜೆಯ ವೇಳೆಗೆ 50,000 ಕ್ಯೂಸೆಕ್ಸ್ ನೀರು ಬಿಡುಗಡೆಯಾಗಲಿದೆ. ನಾಳೆ ಯಾವುದೇ ಸಮಯದಲ್ಲಿ ನಾರಾಯಣಪುರ ಅಣೆಕಟ್ಟಿನಿಂದ, ಕೃಷ್ಣ ನದಿಗೆ ಭಾರೀ ಪ್ರಮಾಣದ ನೀರು ಹರಿಸುವ ಸಾಧ್ಯತೆಯಿದೆ ಹೀಗಾಗಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
Advertisement
Advertisement
ಅಪಾರ ಪ್ರಮಾಣದ ನೀರು ನದಿಗೆ ಬಿಡುತ್ತಿರುವ ಹಿನ್ನೆಲೆ ಪ್ರವಾಹದ ಭೀತಿ ಉಂಟಾಗಿದೆ. ಈ ಬಗ್ಗೆ ಕೃಷ್ಣ ಭಾಗ್ಯ ಜಲ ನಿಗಮ ಮಂಡಳಿ ಸುತ್ತೋಲೆ ಸಹ ಹೊರಡಿಸಿದೆ. ಆದ್ದರಿಂದ ಕೃಷ್ಣ ನದಿ ಪಾತ್ರದ ಜನರಿಗೆ ಮತ್ತು ಅಧಿಕಾರಿಗಳಿಗೆ ಯಾದಗಿರಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಣೆ ಮಾಡಿದೆ.
Advertisement
ವಾಣಿಜ್ಯ ನಗರಿ ಮುಂಬೈ ಸೇರಿದಂತೆ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿಯುತ್ತಿದ್ದು, ಈ ಹಿನ್ನೆಲೆ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ಆಲಮಟ್ಟಿ ಅಣೆಕಟ್ಟಿನಲ್ಲಿ ಒಳ ಹರಿವು ಹೆಚ್ಚಾಗಿದೆ. ಹೀಗಾಗಿ ಸಂಜೆ ವೇಳೆಗೆ ನಾರಾಯಣಪುರ ಅಣೆಕಟ್ಟಿಗೆ ನೀರು ಹರಿ ಬಿಡಲು ನಿರ್ಧರಿಸಲಾಗಿದೆ. ನಾಳೆ ನಾರಾಯಣಪುರ ಅಣೆಕಟ್ಟಿನಿಂದ ಕೃಷ್ಣ ನದಿಗೆ ನೀರು ಹರಿಬಿಡಲಾಗುತ್ತಿದೆ.
Advertisement
ಮಹಾರಾಷ್ಟ್ರದಲ್ಲಿ ಭಾರೀ ಮಳೆ:
ಮುಂಬೈ ಸೇರಿದಂತೆ ಮಹಾರಾಷ್ಟ್ರದ ಮತ್ತಿತರ ಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ಅವಾಂತರವೇ ಸೃಷ್ಟಿಯಾಗಿದೆ. ರಸ್ತೆ ಮತ್ತು ರೈಲ್ವೇ ಹಳಿಗಳು ಜಲಾವೃತಗೊಂಡಿದ್ದವು. ಕೆಲ ದಿನಗಳ ಕಾಲ ರೈಲು ಸಂಚಾರವನ್ನೂ ಸ್ಥಗಿತಗೊಳಿಸಲಾಗಿತ್ತು. ಮಳೆಯಿಂದಾಗಿ ವಿಪರೀತ ಸಾವು ನೋವು ಸಂಭವಿಸಿದೆ. ಧಾರಾಕಾರ ಮಳೆಯಿಂದಾಗಿ ಈ ಹಿಂದೆ `ಪಶ್ಚಿಮ ರೈಲ್ವೇ ವಿಭಾಗದ 13 ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿತ್ತು. ಪಾಲ್ಗಾಟ್ ಪ್ರದೇಶದ ರೈಲ್ವೆ ಹಳಿಗಳು ಜಲಾವೃತಗೊಂಡಿದ್ದರಿಂದ ಮುಂಬೈ-ವಲ್ಸಾಡ್-ಸೂರತ್ ರೈಲು ಸಂಚಾರವನ್ನೂ ಸ್ಥಗಿತಗೊಳಿಸಲಾಗಿತ್ತು. ಮಳೆಯಿಂದಾಗಿ ನಗರದ ಬಹುತೇಕ ರಸ್ತೆಗಳಲ್ಲಿ ನೀರು ನಿಂತಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ. ಹೀಗಾಗಿ ಟ್ರಾಫಿಕ್ ನಿಯಂತ್ರಿಸಲು 500ಕ್ಕೂ ಅಧಿಕ ಸಂಚಾರಿ ಪೊಲೀಸರು ಕರ್ತವ್ಯದಲ್ಲಿ ನಿರತರಾಗಿದ್ದಾರೆ ಎಂದು ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಕ್ಯೂಸೆಕ್ ಟಿಎಂಸಿ ಎಂದರೆ ಎಷ್ಟು?
ಕ್ಯೂಸೆಕ್ ಎಂಬುದು cubic foot per second ಹೃಸ್ವರೂಪ. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಆಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.