ಬೆಂಗಳೂರು: ಸಂಪುಟ ರಚನೆ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ, ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಅಂತ ಬಿಜೆಪಿ ರಾಷ್ಟ್ರಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ದೆಹಲಿಯಿಂದ ಬೆಂಗಳೂರಿನ ಧವಳಗಿರಿ ನಿವಾಸಕ್ಕೆ ಆಗಮಿಸಿ ಮಾತನಾಡಿದ ಅವರು, ಸಚಿವ ಸಂಪುಟವನ್ನು ಆಮೇಲೆ ನೋಡೋಣ. ಮೊದಲು ಪ್ರವಾಹ ಪರಿಸ್ಥಿತಿ ನಿಭಾಯಿಸಿ ಎಂದು ಅಮಿತ್ ಶಾ ಅವರು ತಿಳಿಸಿದ್ದಾರೆ. ಹೀಗಾಗಿ ನಾನು ಬೆಳಗಾವಿಗೆ ತೆರಳುತ್ತಿದ್ದೇನೆ. ಮೂರ್ನಾಲ್ಕು ದಿನ ಬಿಟ್ಟು ಅಂದ್ರೆ ಆಗಸ್ಟ್ 10 ಮತ್ತು 11ರಂದು ಮತ್ತೆ ದೆಹಲಿಗೆ ಹೋಗುತ್ತೇನೆ. ಆಗ ಸಚಿವ ಸಂಪುಟದ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಹೇಳಿದರು.
Advertisement
Advertisement
ಕೇಂದ್ರ ಸಚಿವ ಸುರೇಶ್ ಅಂಗಡಿ ಸೇರಿದಂತೆ ಬಿಜೆಪಿಯ ಎಲ್ಲಾ ಸಂಸದರು, ಶಾಸಕರಿಗೂ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಇರುವಂತೆ ತಿಳಿಸಿದ್ದೇನೆ ಎಂದು ತಿಳಿಸಿದರು. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಮನೆ ಒಳಗೆ ಹೋದ ಸಿಎಂ ಯಡಿಯೂರಪ್ಪ ಅವರು ಕೆಲವೇ ನಿಮಿಷಗಳಲ್ಲಿ ಹೊರಗೆ ಬಂದು ಎಚ್‍ಎಎಲ್ ಕಡೆಗೆ ಪ್ರಯಾಣ ಬೆಳೆಸಿದರು.
Advertisement
ಸಿಎಂ ಯಡಿಯೂರಪ್ಪ ಅವರು ಇಂದು ಬೆಳಗಾವಿ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆಯಲಿದ್ದಾರೆ. ಗುರುವಾರ ವೈಮಾನಿಕ ಸಮೀಕ್ಷೆ ಮೂಲಕ ಬೆಳಗಾವಿ ಮತ್ತು ಬಾಗಲಕೋಟೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.