ವಿಜಯಪುರ: ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಪ್ರತಿಪಕ್ಷಗಳು ಜನರ ದಾರಿ ತಪ್ಪಿಸುತ್ತಿದೆ. ಇಂತಹ ವದಂತಿಗೆ ಯಾರೂ ಕಿವಿಕೊಡಬೇಡಿ ಎಂದು ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಜನರಿಗೆ ಕಿವಿಮಾತು ಹೇಳಿದ್ದಾರೆ.
ವಿಜಯಪುರದಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ದಂಪತಿಗೆ ಸನ್ಮಾನ ಸಮಾರಂಭ ಜರುಗಿತು. ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಸೀರೆ ಕೊಟ್ಟು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಜೋಗೂರ ಸನ್ಮಾನಿಸಿದರು. ಇನ್ನು ಅಣ್ಣಾ ಸಾಹೇಬ್ ಜೊಲ್ಲೆ ಅವರಿಗೆ ಗಣ್ಯರು ಶಾಲು ಹೊದಿಸಿ ಸನ್ಮಾನಿಸಿದರು. ಇದೆ ವೇಳೆ ಮಾತನಾಡಿದ ಅಣ್ಣಾ ಸಾಹೇಬ್ ಜೊಲ್ಲೆ, ಪೌರತ್ವ ಕಾಯ್ದೆಯ ಬಗ್ಗೆ ಪ್ರತಿಪಕ್ಷಗಳು ಜನರನ್ನು ತಪ್ಪು ದಾರಿಗೆಳೆಯುತ್ತಿವೆ. ಇಂಥ ವದಂತಿಗಳಿಗೆ ಯಾರೂ ಕಿವಿಗೊಡಬಾರದು. ಅಲ್ಲದೆ ಪೌರತ್ವ ಕಾಯ್ದೆಯಿಂದ ಭಾರತೀಯ ಮುಸ್ಲಿಮರಿಗೆ ಯಾವುದೇ ತೊಂದರೆಯಿಲ್ಲ. ಹೋರಾಟ ಮಾಡುವವರು ಈ ಕಾಯ್ದೆಯ ಬಗ್ಗೆ ಸರಿಯಾದ ಮಾಹಿತಿ ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.
Advertisement
Advertisement
ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಶಶಿಕಲಾ ಜೊಲ್ಲೆ ಅವರು, ಕಾಂಗ್ರೆಸ್ ದಶಕಗಳ ಕಾಲ ಅಧಿಕಾರದಲ್ಲಿದ್ದರೂ ಗರೀಬಿ ಹಟಾವೋ ಘೋಷಣೆ ಹೇಳುತ್ತ ಹೋಯಿತು. ಆದರೆ ಬಡವರ ಉದ್ಧಾರ ಮಾಡಲಿಲ್ಲ. ಆದರೆ ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಭಾರತ ಸರ್ವಾಂಗೀಣ ಅಭಿವೃದ್ಧಿಯಾಗುತ್ತಿದೆ. ತ್ರಿವಳಿ ತಲಾಕ್, ಸಿಎಎ ಸೇರಿದಂತೆ ನಾನಾ ಕಾಯ್ದೆಗಳು ಜಾರಿಯಾಗುತ್ತಿವೆ. ವಿಶ್ವಾದ್ಯಂತ ಭಾರತದ ಗೌರವ ಹೆಚ್ಚಿದೆ ಎಂದು ಕಾಂಗ್ರೆಸ್ ವಿರುದ್ಧ ಮಾತಿನ ಚಾಟಿ ಬೀಸಿದರು.
Advertisement
Advertisement
ಪೌರತ್ವ ಕಾಯ್ದೆ ಅನುಕೂಲತೆಯ ಬಗ್ಗೆ ಬಿಜೆಪಿ ನಾಯಕರು, ಕಾರ್ಯಕರ್ತರು ಜನರಿಗೆ ಮಾಹಿತಿ ಮುಟ್ಟಿಸಬೇಕು. ಭಾರತೀಯ ಮುಸ್ಲಿಮರಿಗೆ ಪೌರತ್ವ ಕಾಯ್ದೆಯಿಂದ ಯಾವುದೇ ರೀತಿಯ ತೊಂದರೆಯಿಲ್ಲ ಎಂಬುದರ ಕುರಿತು ಅರಿವು ಮೂಡಿಸಬೇಕು ಎಂದು ಕರೆ ಕೊಟ್ಟರು. ಪೌರತ್ವ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಹಿಂಸಾಚಾರ ಸರಿಯಲ್ಲ ಎಂದು ಅಸಮಾಧಾನ ಹೊರಹಾಕಿದರು.
ಇದೇ ವೇಳೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಮಹಿಳಾ ಸಾಹಿತಿ ಡಾ. ಸರಸ್ವತಿ ಚಿಮ್ಮಲಗಿ ಅವರಿಗೂ ಸನ್ಮಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ್, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಕವಟಗಿ ಮುಂತಾದವರು ಭಾಗಿಯಾಗಿದ್ದರು.