ಅತಿವೃಷ್ಠಿ ಅನಾಹುತ ಎದುರಿಸಲು ಎಲ್ಲಾ ಮುಂಜಾಗ್ರತಾ ಕ್ರಮ: ಜಿಲ್ಲಾಧಿಕಾರಿ

Public TV
2 Min Read

ಶಿವಮೊಗ್ಗ: ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಅತಿವೃಷ್ಟಿಯಿಂದ ಉಂಟಾಗಬಹುದಾದ ಅನಾಹುತಗಳನ್ನು ಎದುರಿಸಲು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದ್ದಾರೆ.

ಮುಂಗಾರು ಮಳೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಶನಿವಾರ ಮುಖ್ಯಮಂತ್ರಿ ಅವರ ವೀಡಿಯೋ ಸಂವಾದದಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿ ಅವರು, ಜಿಲ್ಲೆಯಲ್ಲಿ ಅತಿವೃಷ್ಟಿ ಎದುರಿಸಲು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಕಳೆದ 18 ದಿನಗಳಲ್ಲಿ ಸರಾಸರಿಗಿಂತ ಶೇ.20 ರಷ್ಟು ಹೆಚ್ಚಿನ ಮಳೆಯಾಗಿದೆ. ಭದ್ರಾ ಮತ್ತು ಲಿಂಗನಮಕ್ಕಿ ಜಲಾಶಯಗಳಿಗೆ ಕಳೆದ ಒಂದು ವಾರದಿಂದ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ತುಂಗಾಭದ್ರಾ ಜಲಾಶಯ ಬಹುತೇಕ ತುಂಬಿದೆ. ಎಲ್ಲಾ ಜಲಾಶಯಗಳ ನೀರಿನ ಮಟ್ಟದ ಬಗ್ಗೆ ನಿರಂತರ ನಿಗಾ ವಹಿಸಲಾಗಿದೆ ಎಂದಿದ್ದಾರೆ . ಇದನ್ನೂ ಓದಿ: 51ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ

67 ಗ್ರಾಮ ಪಂಚಾಯತ್‍ಗಳ 163 ಗ್ರಾಮಗಳು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ 74 ಪ್ರದೇಶಗಳು ಹಾಗೂ 18 ಮುಖ್ಯ ರಸ್ತೆಗಳನ್ನು ಅತಿವೃಷ್ಟಿಯಿಂದ ತೊಂದರೆ ಉಂಟಾಗಬಹುದಾದ ಸ್ಥಳಗಳೆಂದು ಗುರುತಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಂ ಆರಂಭಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕೆ ಕೊರತೆ ಇರುವುದಿಲ್ಲ. 26459 ಕ್ವಿಂಟಾಲ್ ಬಿತ್ತನೆ ಬೀಜ ಬೇಡಿಕೆ ಇದ್ದು, 30242 ಕ್ವಿಂಟಾಲ್ ದಾಸ್ತಾನಿದೆ. ಎಲ್ಲಾ ಕಡೆ ಕೃಷಿ ಚಟುವಟಿಕೆ ಆರಂಭವಾಗಿದ್ದು, ಈಗಾಗಲೇ 3341 ಕ್ವಿಂಟಾಲ್ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. ರಸಗೊಬ್ಬರವನ್ನು ಬೇಡಿಕೆಗೆ ಅನುಸಾರವಾಗಿ ಹಂತ ಹಂತವಾಗಿ ದಾಸ್ತಾನು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ದೂದ್ ಗಂಗಾ ಯೋಜನೆ -ಬಿಎಸ್‍ವೈ ಮಹತ್ವದ ಚರ್ಚೆ

ಜೂನ್ ಅಂತ್ಯದವರೆಗೆ 52 ಸಾವಿರ ಮೆಟ್ರಿಕ್ ಟನ್ ವಿವಿಧ ರಸಗೊಬ್ಬರ ಬೇಡಿಕೆ ಇದ್ದು, 1.07 ಮೆಟ್ರಿಕ್ ಟನ್ ದಾಸ್ತಾನಿದೆ. ಪ್ರಸ್ತುತ ಸಾಲಿನಲ್ಲಿ ಮಳೆಯಿಂದ 3 ಮಾನವ ಜೀವ ಹಾನಿ ಸಂಭವಿಸಿದ್ದು, 15 ಲಕ್ಷ ರೂ. ಪರಿಹಾರ ನೀಡಲಾಗಿದೆ. 2 ಜಾನುವಾರುಗಳು ಮೃತಪಟ್ಟಿದ್ದು 60 ಸಾವಿರ ರೂ. ನೀಡಲಾಗಿದೆ. 4 ಮನೆಗಳು ಶೇ.75ರಷ್ಟು ಹಾಗೂ 69 ಮನೆಗಳು ಸ್ವಲ್ಪಮಟ್ಟಿನ ಹಾನಿಗೀಡಾಗಿದ್ದು ಮಾರ್ಗಸೂಚಿ ಪ್ರಕಾರ ಪರಿಹಾರ ನೀಡಲಾಗುವುದು ಎಂದರು. ಪೆÇಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀ ಪ್ರಸಾದ್, ಜಿ.ಪಂ. ಸಿಇಒ ಎಂ.ಎಲ್.ವೈಶಾಲಿ, ಎಡಿಸಿ ಜಿ.ಅನುರಾಧ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *