ಉಪಸಭಾಪತಿ ಎಸ್. ಎಲ್ ಧರ್ಮೇಗೌಡ ಆತ್ಮಹತ್ಯೆ- ಗಣ್ಯರಿಂದ ಸಂತಾಪ

Public TV
2 Min Read

ಬೆಂಗಳೂರು: ಉಪ ಸಭಾಪತಿ ಎಸ್.ಎಲ್ ಧರ್ಮೇಗೌಡ ಅವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗುಣಸಾಗರ ಸಕ್ಕರಾಯಪಟ್ಟಣದ ಬಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಬಂಧ ಇದೀಗ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಟ್ವೀಟ್ ಮಾಡಿ, ವಿಧಾನಪರಿಷತ್ ಉಪಸಭಾಪತಿ ಹಾಗೂ ಜೆಡಿಎಸ್ ಮುಖಂಡರಾದ ಎಸ್.ಎಲ್. ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಕೇಳಿ ಆಘಾತವಾಗಿದೆ. ಸಜ್ಜನ, ಸನ್ನಡತೆಯ ಉಪಸಭಾಪತಿಗಳನ್ನು ಕಳೆದುಕೊಂಡದ್ದು ನಮ್ಮ ರಾಜ್ಯದ ನಷ್ಟ. ಅವರ ಕುಟುಂಬ ಹಾಗೂ ಬಂಧುಮಿತ್ರರಿಗೆ ಈ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಟ್ವೀಟ್ ಮಾಡಿ, ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತಾ, ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ.

ಇನ್ನೊಂದು ಟ್ವೀಟ್ ಮಾಡಿ, ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡರ ನಿಧನದ ಸುದ್ದಿ ದಿಗ್ಭ್ರಮೆ ಮೂಡಿಸಿದೆ. ಇದನ್ನು ನಂಬಲಿಕ್ಕೇ ಸಾಧ್ಯವಾಗುತ್ತಿಲ್ಲ. ಶಾಸಕರಾಗಿ, ಉಪಸಭಾಪತಿಗಳಾಗಿ ಜನಮನ್ನಣೆ ಗಳಿಸಿದ್ದ ಅವರ ದುರಂತ ಅಂತ್ಯ ಅತ್ಯಂತ ದುಃಖವನ್ನುಂಟು ಮಾಡಿದೆ. ಹಿರಿಯ ಅಧಿಕಾರಿಗಳಿಂದ ಘಟನೆಯ ವಿವರ ಪಡೆದುಕೊಳ್ಳುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ, ವಿಧಾನಪರಿಷತ್ ಉಪಸಭಾಪತಿ, ಪಕ್ಷದ ಹಿರಿಯ ಮುಖಂಡರು ಹಾಗೂ ನನ್ನ ಸಹೋದರರಂತಿದ್ದ ಎಸ್.ಎಲ್ ಧರ್ಮೇಗೌಡರ ಆತ್ಮಹತ್ಯೆ ಸುದ್ದಿ ತೀವ್ರ ಆಘಾತವನ್ನುಂಟುಮಾಡಿದೆ. ನಿಷ್ಕಲ್ಮಶ ವ್ಯಕ್ತಿತ್ವದ ಸಜ್ಜನ ರಾಜಕಾರಣಿಯೊಬ್ಬರನ್ನು ನಾವು ಕಳೆದುಕೊಂಡಿದ್ದೇವೆ. ಧರ್ಮೇಗೌಡರ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ತಿಳಿಸಿದ್ದಾರೆ.

https://twitter.com/HdRevanna/status/1343729970028314624

ಮಾಜಿ ಸಚಿವ ಹೆಚ್.ಡಿ ರೇವಣ್ಣ ಟ್ವೀಟ್ ಮಾಡಿ, ಆತ್ಮೀಯ ಗೆಳೆಯರು ಹಾಗೂ ವಿಧಾನ ಪರಿಷತ್ತಿನ ಉಪಸಭಾಪತಿಗಳು ಮತ್ತು ಜೆಡಿಎಸ್ ಮುಖಂಡರಾದ ಎಸ್. ಎಲ್. ಧರ್ಮೇಗೌಡ ರವರು ನಿಧನರಾದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬವರ್ಗದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಟ್ವಿಟ್ ಮಾಡಿ, ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಧರ್ಮೇಗೌಡ ರವರ ಅಕಾಲಿಕ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಮೃತರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *