ಕರ್ನಾಟಕದ ವಿರುದ್ಧ ಸುಪ್ರೀಂನಲ್ಲಿ ಗೋವಾದಿಂದ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ

Public TV
2 Min Read

– ಅಕ್ರಮವಾಗಿ ಕರ್ನಾಟಕ ಮಹದಾಯಿ ನದಿ ತಿರುಗಿಸುತ್ತಿದೆ

ಪಣಜಿ: ಕರ್ನಾಟಕ ಮಹದಾಯಿ ನೀರು ತಿರುಗಿಸುತ್ತಿದೆ ಎಂದು ಆರೋಪಿಸಿ ಗೋವಾ ಸರ್ಕಾರ ಸುಪ್ರೀಂ ಕೋರ್ಟ್‍ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.

ಈ ವಿಚಾರವಾಗಿ ಟ್ವೀಟ್ ಮಾಡಿದ ಗೋವಾ ಸಿಎಂ ಪ್ರಮೋದ್ ಸಾವಂತ್, ಇಂದು ಸುಪ್ರೀಂ ಕೋರ್ಟ್‍ನಲ್ಲಿ ಅಕ್ರಮವಾಗಿ ಮಹದಾಯಿ ನೀರು ತಿರುಗಿಸುವ ವಿಚಾರವಾಗಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ. ನಾವು ನಮ್ಮ ಹಕ್ಕುಗಳಿಗೆ ಹೋರಾಟ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಮಹದಾಯಿ ವಿಚಾರವಾಗಿ ಗೋವಾ ಸಿಎಂ ವಿರುದ್ಧ ಕಿಡಿ ಕಾರಿದ್ದ ವಿಪಕ್ಷಗಳು ಶ್ವೇತಪತ್ರ ಹೊರಡಿಸುವಂತೆ ಆಗ್ರಹಿಸಿದ್ದವು. ಈ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಸುದ್ದಿಗೋಷ್ಠಿ ನಡೆಸಿದ್ದ ಗೋವಾ ಸಿಎಂ ಹಿಂದಿನ ಕಾಂಗ್ರೆಸ್ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಮಹದಾಯಿ ನದಿ ನೀರು ತಿರುವಿಗೆ ಹಿಂದಿನ ಕಾಂಗ್ರೆಸ್ ಸರ್ಕಾರ ಅವಕಾಶ ನೀಡಿತ್ತೆಂದು ಆರೋಪಿಸಿದ್ದರು. ಅಷ್ಟೇ ಅಲ್ಲದೇ ಸಾಕ್ಷ್ಯಾಧಾರಗಳ ಮೂಲಕ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದರು.

ಕರ್ನಾಟಕ ಮತ್ತು ಗೋವಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್‌, ಬಿಜೆಪಿ ಪಕ್ಷಗಳಿಗೆ ಮಹದಾಯಿ ನದಿ ವಿಚಾರವೇ ದೊಡ್ಡ ವಿಷಯ. ಸದ್ಯ ಎರಡು ಕಡೆ ಬಿಜೆಪಿ ಪಕ್ಷದ ಮುಖ್ಯಮಂತ್ರಿಗಳಿದ್ದಾರೆ. ಕೇಂದ್ರದಲ್ಲೂ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವಿದೆ. ಹೀಗಾಗಿ ಬಿಜೆಪಿ ಹೇಗೆ ಈ ವಿಚಾರವನ್ನು ಇತ್ಯರ್ಥ ಮಾಡುತ್ತದೆ ಎಂಬ ಕುತೂಹಲ ಮೂಡಿದೆ.

ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಧಿಕರಣ ನೀಡಿದ್ದ ಐ ತೀರ್ಪಿಗೆ ಕೇಂದ್ರ ಸರ್ಕಾರ ನೋಟಿಫಿಕೇಷನ್ ಹೊರಡಿಸಿತ್ತು. ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಅನುಮತಿ ಪಡೆದು ನದಿ ಕಣಿವೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಯೋಜನೆಗಳ ಕಾಮಗಾರಿ ಮತ್ತು ಜಲ ವಿದ್ಯುತ್ ಯೋಜನೆಗಳ ಕಾಮಗಾರಿ ಆರಂಭಿಸಬಹುದೆಂದು ಕೇಂದ್ರ ಸರ್ಕಾರ ತಿಳಿಸಿತ್ತು. ಇದನ್ನೂ ಓದಿ: ಮಹದಾಯಿ ನದಿ ನೀರಿಗೆ ಗೋವಾ ಕ್ಯಾತೆ ಯಾಕೆ? ಇಲ್ಲಿದೆ ಪೂರ್ಣ ಮಾಹಿತಿ

ಸುದೀರ್ಘ ವಿಚಾರಣೆ ನಡೆಸಿದ್ದ ಮಹದಾಯಿ ನ್ಯಾಯಾಧಿಕರಣ 2018ರ ಅಗಸ್ಟ್ 14 ರಂದು ತನ್ನ ಐತೀರ್ಪು ಪ್ರಕಟಿಸಿತ್ತು. ಕರ್ನಾಟಕದ ಪಾಲಿಗೆ ಮಹದಾಯಿ ನದಿಯಿಂದ 13.5 ಟಿಎಂಸಿ ನೀರು ಹಂಚಿಕೆ ಮಾಡಿತ್ತು. ಇದರಲ್ಲಿ ಮಹದಾಯಿ ನದಿಯಿಂದ ಮಲಪ್ರಭೆಗೆ ಕುಡಿಯುವ ನೀರಿಗಾಗಿ 4 ಟಿಎಂಸಿ ನೀರು ಹರಿಸಲು ಒಪ್ಪಿಗೆ ಸೂಚಿಸಿತ್ತು. ಮಹದಾಯಿ ನದಿಯಿಂದ ಕರ್ನಾಟಕಕ್ಕೆ 12 ಟಿಎಂಸಿ ನೀಡಿದ್ದ ನ್ಯಾಯಾಧಿಕರಣ ಬಂಡೂರ ಯೋಜನೆಗೆ ಒಟ್ಟು 2.18 ಟಿಎಂಸಿ, ಕಳಸಾ ಯೋಜನೆಗೆ 1.72 ಟಿಎಂಸಿ, ಜಲ ವಿದ್ಯುತ್ ಯೋಜನೆಗೆ 8.02 ಟಿಎಂಸಿ, ಮಹದಾಯಿ ನದಿ ಕಣಿವೆಯಲ್ಲಿ ಬಳಸಲು 1.5 ಟಿಎಂಸಿ ನೀರು ಹಂಚಿಕೆ ಮಾಡಿತ್ತು.

ಐತೀರ್ಪು ಎಂದರೇನು?
ನ್ಯಾಯಾಲಯಗಳು ಪ್ರಕಟಿಸುವ ಅಂತಿಮ ಆದೇಶಕ್ಕೆ ತೀರ್ಪು(Verdict) ಎಂದರೆ ನ್ಯಾಯಾಧಿಕರಣಗಳು ನೀಡುವ ಅಂತಿಮ ಆದೇಶಕ್ಕೆ ಐತೀರ್ಪು(Award) ಎಂದು ಕರೆಯಲಾಗುತ್ತದೆ.

Share This Article
Leave a Comment

Leave a Reply

Your email address will not be published. Required fields are marked *