ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ಕಟ್ಟಿದ ನಾಯಕರಲ್ಲಿ ಒಬ್ಬರಾದ ಕೆ.ಎಸ್ ಈಶ್ವರಪ್ಪ ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡುವಂತೆ ಕೆಂಪೇಗೌಡ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘ ಆಗ್ರಹಿಸಿದೆ.
ಶಿವಮೊಗ್ಗದಲ್ಲಿ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಘದ ಅಧ್ಯಕ್ಷ ತಿಮ್ಮೇಗೌಡ, ಮಾಜಿ ಸಚಿವ ಈಶ್ವರಪ್ಪ ಅವರಿಗೆ ಮಾಜಿ ಸಿಎಂ ಯಡಿಯೂರಪ್ಪ ನಂತರ ಮುಖ್ಯಮಂತ್ರಿ ಆಗುವ ಎಲ್ಲಾ ಅರ್ಹತೆ ಇತ್ತು. ಆದರೂ ಈಶ್ವರಪ್ಪ ಅವರಿಗೆ ಸಿಎಂ ಹುದ್ದೆ ಕೈತಪ್ಪಿ ಹೋಗಿದೆ. ಹೀಗಾಗಿ ಈಶ್ವರಪ್ಪ ಅವರಿಗೆ ಉಪಮುಖ್ಯಮಂತ್ರಿ ಹುದ್ದೆಯನ್ನಾದರೂ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನಾನು ಸಚಿವ ಸ್ಥಾನಕ್ಕಾಗಿ ಎಲ್ಲೂ ಹೋಗಲ್ಲ: ಅಪ್ಪಚ್ಚು ರಂಜನ್
ಈಶ್ವರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ, ಉಪಮುಖ್ಯಮಂತ್ರಿ ಆಗಿ, ಸಚಿವರಾಗಿ ಉತ್ತಮ ಕಾರ್ಯ ಮಾಡಿದ್ದಾರೆ. ರಾಜ್ಯದಲ್ಲಿ ಪಕ್ಷ ಸಂಘಟನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ರಾಜಕಾರಣದಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಹೀಗಾಗಿ ಬೊಮ್ಮಾಯಿ ಸರ್ಕಾರದಲ್ಲಿ ಈಶ್ವರಪ್ಪ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಇಲ್ಲದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಕೆಂಪೇಗೌಡ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಎಚ್ಚರಿಕೆ ನೀಡಿದ್ದಾರೆ.