ಗರ್ಭಿಣಿ ಆನೆ ಹತ್ಯೆಗೈದ ಪ್ರಕರಣ- ಮೂವರು ಶಂಕಿತರು ವಶಕ್ಕೆ

Public TV
2 Min Read

ತಿರುವನಂತಪುರಂ: ಪೈನಾಪಲ್‍ನಲ್ಲಿ ಪಟಾಕಿ ಇಟ್ಟು 15 ವರ್ಷದ ಗರ್ಭಿಣಿ ಆನೆಯನ್ನು ಹತ್ಯೆಗೈದ ಪ್ರಕರಣದ ಸಂಬಂಧ ಪೊಲೀಸರು ಮೂವರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ.

ಶಂಕಿತ ಮೂವರು ಆರೋಪಿಗಳು ಕೇರಳದ ಮಲಪ್ಪುರಂ ಜಿಲ್ಲೆಯ ಮನ್ನಾರ್ಕಡ್ ಅರಣ್ಯ ಪ್ರದೇಶದವರಾಗಿದ್ದಾರೆ. ಪೊಲೀಸರು ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದ ದುರಂತದಲ್ಲಿ ಗರ್ಭಿಣಿ ಆನೆ ಮೃತಪಟ್ಟಿದೆ. ಈ ಸಂಬಂಧ ಅನೇಕರು ನಮಗೆ ದೂರು ನೀಡಿದ್ದಾರೆ. ನಿಮ್ಮ ಕಾಳಜಿ ಯಾವುದೇ ಕಾರಣಕ್ಕೂ ವ್ಯರ್ಥವಾಗುವುದಿಲ್ಲ ಎಂದು ಭರವಸೆ ನೀಡುತ್ತೇನೆ. ನ್ಯಾಯ ಮೇಲುಗೈ ಸಾಧಿಸುತ್ತದೆ ಎಂದು ತಿಳಿಸಿದ್ದಾರೆ.

ಮೂವರು ಶಂಕಿತರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಪೊಲೀಸ್ ಮತ್ತು ಅರಣ್ಯ ಇಲಾಖೆಗಳು ಜಂಟಿಯಾಗಿ ಪ್ರಕರಣದ ತನಿಖೆ ನಡೆಸಲಿವೆ. ಜಿಲ್ಲಾ ಪೊಲೀಸ್ ಮುಖ್ಯಸ್ಥ ಮತ್ತು ಜಿಲ್ಲಾ ಅರಣ್ಯ ಅಧಿಕಾರಿ ಗುರುವಾರ ಸ್ಥಳಕ್ಕೆ ಭೇಟಿ ನೀಡಿದ್ದರು. ಆರೋಪಿಗಳನ್ನು ನ್ಯಾಯಕ್ಕೆ ತರಲು ನಾವು ಎಲ್ಲ ಸಿದ್ಧತೆ ನಡೆಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಏನಿದು ಪ್ರಕರಣ?:
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಸ್ಥಳೀಯರು ಬುಧವಾರ ಪಟಾಕಿ ತುಂಬಿದ ಪೈನಾಪಲ್ ಹಣ್ಣನ್ನು ಗರ್ಭಿಣಿ ಆನೆಗೆ ತಿನ್ನಿಸಿದ್ದರು. ನಂತರ ಆನೆಯ ಬಾಯಿಯಲ್ಲಿ ಪಟಾಕಿ ಬ್ಲಾಸ್ಟ್ ಆಗಿ ಗಂಭೀರವಾಗಿ ಗಾಯಗೊಂಡಿತ್ತು. ಗರ್ಭಿಣಿ ಆನೆ ಯಾವೊಬ್ಬ ಗ್ರಾಮಸ್ಥರಿಗೂ ತೊಂದರೆ ನೀಡಿರಲಿಲ್ಲ. ಬಾಯಿಯಲ್ಲಿ ಪಟಾಕಿ ಸಿಡಿಯುತ್ತಿದ್ದಂತೆ ನೋವಿನಲ್ಲಿ ರಸ್ತೆ ತುಂಬಾ ಓಡಾಡಿತ್ತು. ಬಳಿಕ ವೆಲ್ಲಿಯಾರ್ ನದಿಯಲ್ಲಿ ಮುಳುಗಿತ್ತು. ಈ ಸುದ್ದಿ ತಿಳಿಯುತ್ತಿದ್ದಂತೆ ಆನೆಯನ್ನು ಮೇಲೆತ್ತಲು ಅರಣ್ಯ ಇಲಾಖೆ ಅಧಿಕಾರಿಗಳು ನೀಲಕಂಠನ್ ಹಾಗೂ ಸುರೇಂದ್ರನ್ ಎಂಬ ಎರಡು ಆನೆಗಳನ್ನು ಕರೆ ತಂದಿದ್ದು, ಅಷ್ಟೊತ್ತಿಗಾಗಲೇ ಸಂಜೆ 4ರ ಸುಮಾರಿಗೆ ಆನೆ ನದಿಯಲ್ಲೇ ಸಾವನ್ನಪ್ಪಿತ್ತು.

ಮಲಪ್ಪುರಂ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ಅರಣ್ಯಾಧಿಕಾರಿಯೊಬ್ಬರು ಆನೆ ನೋವಿನ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಅಪ್‍ಲೋಡ್ ಮಾಡಿದ್ದರು.

ಈ ವಿಚಾರವಾಗಿ ಪ್ರತಿಕ್ರಿಯಿಸಿದ್ದ ಕೇಂದ್ರ ಅರಣ್ಯ ಸಚಿವ ಪ್ರಕಾಶ್ ಜಾವಡೇಕರ್, ಕೇರಳದಲ್ಲಿ ಆನೆಯ ಹತ್ಯೆಯ ಪ್ರಕರಣವನ್ನು ಕೇಂದ್ರ ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲು ಸೂಚನೆ ನೀಡಲಾಗಿದೆ. ಆಹಾರದಲ್ಲಿ ಪಟಾಕಿ ಇಟ್ಟು ಕೊಲ್ಲುವುದು ಭಾರತೀಯ ಸಂಸ್ಕೃತಿಯಲ್ಲ ಎಂದು ಕಿಡಿಕಾರಿದ್ದರು.

Share This Article
Leave a Comment

Leave a Reply

Your email address will not be published. Required fields are marked *