ಜಿಲ್ಲಾಡಳಿತ, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಅಭಿಪ್ರಾಯ ಪಡೆದು ಲಾಕ್‍ಡೌನ್ ನಿರ್ಧಾರ: ಶೆಟ್ಟರ್

Public TV
2 Min Read

ಹುಬ್ಬಳ್ಳಿ: ಜಿಲ್ಲೆಯಲ್ಲಿ ಲಾಕ್‍ಡೌನ್ ಮುಂದುವರಿಸುವ ಕುರಿತು ಜಿಲ್ಲಾಡಳಿತ, ಜನಪ್ರತಿನಧಿಗಳು ಹಾಗೂ ಸಂಘ ಸಂಸ್ಥೆಗಳ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ನಗರದ ಮಧುರ ಕಾಲೋನಿಯ ನಿವಾಸದಲ್ಲಿ ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳೊಂದಿಗೆ ನಡೆದ ವಿಡಿಯೋ ಸಂವಾದದಲ್ಲಿ ಜಿಲ್ಲೆಯಲ್ಲಿ ಲಾಕ್‍ಡೌನ್ ಮಾಡುವ ಅವಶ್ಯಕತೆ ಕುರಿತು ಚರ್ಚಿಸಲಾಯಿತು. ಮುಖ್ಯಮಂತ್ರಿಗಳು ಹಾಗೂ ಮುಖ್ಯಕಾರ್ಯದರ್ಶಿಗಳ ಒಪ್ಪಿಗೆ ಪಡೆದು ಜಿಲ್ಲೆಯಲ್ಲಿ ಜುಲೈ 24ರವರೆಗೆ ಲಾಕ್‍ಡೌನ್ ಮಾಡಲಾಗಿದೆ. ಕೊರೊನಾ ವೇಗವಾಗಿ ಹರಡುತ್ತಿರುವ ಹಿನ್ನೆಲೆ ಸೋಂಕಿನ ಸರಪಳಿ ಕತ್ತರಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದರು.

ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಹೆಚ್ಚುವರಿಯಾಗಿ 250 ಹಾಸಿಗೆಗಳನ್ನು ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಸಿದ್ಧಪಡಿಸಲಾಗುತ್ತಿದೆ. ಹಂತ ಹಂತವಾಗಿ ಕಿಮ್ಸ್ ನಲ್ಲಿ ಕೋವಿಡ್-19 ಚಿಕಿತ್ಸೆಗಾಗಿ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು. ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಲು ಮುಂದೆ ಬಂದಿವೆ. ಧಾರವಾಡದ ಎಸ್‍ಡಿಎಂ ಆಸ್ಪತ್ರೆಯಲ್ಲಿ ಈಗಾಗಲೇ 80 ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು 500 ಹಾಸಿಗೆಗಳನ್ನು ಕೊರೊನಾ ರೋಗಿಗಳಿಗೆ ಸಿದ್ಧಪಡಿಸುವಂತೆ ಎಸ್‍ಡಿಎಂ ಆಸ್ಪತ್ರೆಗೆ ತಿಳಿಸಲಾಗಿದೆ ಎಂದರು.

ಎಸ್‍ಡಿಎಂ ಎಂಜಿನಿಯರಿಂಗ್ ಹಾಸ್ಟೆಲ್‍ನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲಾಗುವುದು. ಹುಬ್ಬಳ್ಳಿಯ ಡಾಕ್ಟರ್ ಬಂಗಾರ ಶೆಟ್ಟರ್ ಅವರು ತಮ್ಮ 30 ಹಾಸಿಗೆಗಳ ಅಶೋಕ್ ಆಸ್ಪತ್ರೆಯನ್ನು ಕೋವಿಡ್-19 ಚಿಕಿತ್ಸೆಗಾಗಿ ಜಿಲ್ಲಾಡಳಿತಕ್ಕೆ ನೀಡಿದ್ದಾರೆ. ಆಸ್ಪತ್ರೆಯಲ್ಲಿ ಜಿಲ್ಲಾಡಳಿತದಿಂದ ಹೆಚ್ಚುವರಿಯಾಗಿ 20 ಹಾಸಿಗೆಗಳನ್ನು ವ್ಯವಸ್ಥೆ ಮಾಡಲಾಗುವುದು. ಸುಚಿರಾಯು, ತತ್ವದರ್ಶಿ ಸೇರಿದಂತೆ ಇತರೆ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ರೋಗಿಗಳಿಗೆ ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾಧಿಕಾರಿಗಳು ಖಾಸಗಿ ಆಸ್ಪತ್ರೆಯ ಆಡಳಿತ ಮಂಡಳಿ ಜೊತೆ ಸಭೆ ನಡೆಸಿದ್ದಾರೆ. ಜಿಲ್ಲಾಡಳಿತ ಖಾಸಗಿ ಆಸ್ಪತ್ರೆಯ ವೈದ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೋವಿಡ್ ತುರ್ತುಪರಿಸ್ಥಿತಿಯನ್ನು ಎದುರಿಸಲಾಗುವುದು. ಜಿಲ್ಲಾಸ್ಪತ್ರೆಗೆ ಏಳು ಹೊಸ ಅಂಬುಲೆನ್ಸ್ ಗಳ ಖರೀದಿಗೆ ಒಪ್ಪಿಗೆ ನೀಡಲಾಗಿದೆ. ಶೀಘ್ರದಲ್ಲೇ ಹೊಸ ಅಂಬುಲೆನ್ಸ್ ಗಳು ಬರಲಿವೆ. ಒಟ್ಟು 2000 ಹಾಸಿಗೆಗಳನ್ನು ಜಿಲ್ಲೆಯಲ್ಲಿ ಸಿದ್ಧಪಡಿಸಲಾಗಿದೆ ಎಂದರು.

ರಸಗೊಬ್ಬರ ಕೊರತೆಯಿಲ್ಲ
ಜಿಲ್ಲೆಯಲ್ಲಿ ಯೂರಿಯಾ ಸೇರಿದಂತೆ ಯಾವುದೇ ರಸಗೊಬ್ಬರ ಕೊರತೆಯಿಲ್ಲ. ಸಾಕಷ್ಟು ಪ್ರಮಾಣದಲ್ಲಿ ರೈತರಿಗೆ ರಸಗೊಬ್ಬರ ಒದಗಿಸಲಾಗುವುದು. ಖಾಸಗಿ ರಸಗೊಬ್ಬರ ಅಂಗಡಿಗಳಲ್ಲಿ ಅಧಿಕ ಬೆಲೆಗೆ ಮಾರಾಟ ಮಾಡದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *