ಜುಲೈ ಅಂತ್ಯದ ವೇಳೆಗೆ ಕುವೆಂಪು ವಿವಿ ಘಟಿಕೋತ್ಸವ

Public TV
1 Min Read

– ರಾಜ್ಯಪಾಲರ ಸಮ್ಮತಿ, ಸಿಂಡಿಕೇಟ್ ಅನುಮೋದನೆ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ 30ನೇ ಘಟಿಕೋತ್ಸವ ನಡೆಸಲು ರಾಜ್ಯಪಾಲರು ಸಮ್ಮತಿಸಿದ್ದು, ಜಿಲ್ಲಾಧಿಕಾರಿಗಳು ಅನುಮತಿ ನೀಡಿದರೆ ಜುಲೈ 28 ಅಥವಾ 29 ರಂದು ಆಂತರಿಕವಾಗಿ ಘಟಿಕೋತ್ಸವವನ್ನು ಆಯೋಜಿಸಲು ಸಿಂಡಿಕೇಟ್ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ ತಿಳಿಸಿದ್ದಾರೆ.

ಜುಲೈ 09 ರಂದು ನಡೆದ ಸಿಂಡಿಕೇಟ್ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಈ ವರ್ಷದ ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ನಡೆಯಬೇಕಿದ್ದ ಘಟಿಕೋತ್ಸವ ಕೋವಿಡ್-19ರ ಕಾರಣದಿಂದ ವಿಳಂಬವಾಗಿದೆ. ಈ ಕುರಿತು ವಿಶ್ವವಿದ್ಯಾಲಯ ಸಲ್ಲಿಸಿದ ಮನವಿಗೆ ಸ್ಪಂದಿಸಿದ ರಾಜ್ಯಪಾಲ ವಜುಭಾಯಿ ವಾಲಾ ಅವರು ಸೂಕ್ತ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಿ ಘಟಿಕೋತ್ಸವ ಆಯೋಜಿಸಲು ಸಮ್ಮತಿ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಿಂಗಳ ಅಂತ್ಯದ ವೇಳೆಗೆ ಘಟಿಕೋತ್ಸವ ಆಯೋಜಿಸಲು ಸಿಂಡಿಕೇಟ್ ಸದಸ್ಯರು ಸಹಮತ ವ್ಯಕ್ತಪಡಿಸಿದ್ದಾರೆ. ಅನುಮತಿಗಾಗಿ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದರು.

ಕೋವಿಡ್ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಅನುಮತಿಸಿದಲ್ಲಿ ಈ ಬಾರಿಯ ಘಟಿಕೋತ್ಸವವನ್ನು ಇನ್ ಹೌಸ್ ಮಾದರಿಯಲ್ಲಿ (ಆಂತರಿಕವಾಗಿ) ಆಯೋಜಿಸಲಾಗುವುದು. ಸುಮಾರು ಒಂದು ಸಾವಿರ ಸಭಿಕರು ಭಾಗವಹಿಸಬಹುದಾದ ವಿಶ್ವವಿದ್ಯಾಲಯದ ಹೊಸ ಘಟಿಕೋತ್ಸವ ಸಭಾಂಗಣದಲ್ಲಿ ದೈಹಿಕ ಅಂತರವನ್ನು ಕಾಯ್ದುಕೊಂಡು ಸರ್ಕಾರದ ಮಾರ್ಗದರ್ಶಿ ಸೂತ್ರಗಳ ಅನ್ವಯ ಘಟಿಕೋತ್ಸವವನ್ನು ನಡೆಸಲಾಗುವುದು. ರ‌್ಯಾಂಕ್ ವಿಜೇತರು, ಪಿಎಚ್‍ಡಿ ಪದವೀಧರರು, ಗೌರವ ಡಾಕ್ಟರೇಟ್ ಪಡೆದವರು, ಸಿಂಡಿಕೇಟ್ ಸದಸ್ಯರು, ಶೈಕ್ಷಣಿಕ ಮಂಡಳಿ ಸದಸ್ಯರು ಮತ್ತು ವಿಶ್ವವಿದ್ಯಾಲಯದ ಸಿಬ್ಬಂದಿ ಒಳಗೊಂಡಂತೆ ಸುಮಾರು 500 ಮಂದಿ ಮಾತ್ರ ಭಾಗವಹಿಸಬಹುದಾಗಿದ್ದು, ಪೋಷಕರು ಮತ್ತು ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *