‘ಬರಬೇಡಿ, ಮರಳಿ ಹೋಗಿ’ – ಪ್ರವಾಸಿಗರನ್ನು ವಾಪಸ್ ಕಳುಹಿಸಿದ ಕೊಡಗಿನ ಗ್ರಾಮಸ್ಥರು

Public TV
2 Min Read

– ಲಾಕ್‌ಡೌನ್‌ಗೆ ಕೊಡಗು ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಅವಕಾಶ ಕೊಟ್ಟಿರುವುದರಿಂದ ಕೊರೊನಾ ಸೋಂಕು ಹೆಚ್ಚುತ್ತಿದ್ದು ಜಿಲ್ಲಾಡಳಿತ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಪ್ರತಿಭಟನೆ ಮಾಡಿದ ಘಟನೆ ಸೋಮವಾರಪೇಟೆ ತಾಲೂಕಿನ ಬೆಟ್ಟದಳ್ಳಿ ಹಾಗೂ ಶಾಂತಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

ಬೆಟ್ಟದಳ್ಳಿ ಜಂಕ್ಷನ್ ಬಳಿ ರಸ್ತೆ ತಡೆ ನಡೆಸಿದ ಗ್ರಾಮಸ್ಥರು ಪ್ರವಾಸಿಗರ ವಾಹನಗಳನ್ನು ತಡೆದು ವಾಪಸ್‌ ಕಳುಹಿಸಿದ ಪ್ರಸಂಗವೂ ನಡೆಯಿತು. ನಗರ ಪ್ರದೇಶದಲ್ಲಿದ್ದ ಸೋಂಕು ಈಗ ಗ್ರಾಮೀಣ ಭಾಗದಲ್ಲೂ ವ್ಯಾಪಕವಾಗಿ ಹರಡುತ್ತಿದೆ. ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಮಲ್ಲಳ್ಳಿ ಜಲಪಾತ ವೀಕ್ಷಿಸುವ, ಬೆಟ್ಟದ ಮೇಲೆ ಟ್ರೆಕ್ಕಿಂಗ್‌ ಮಾಡುವ ನೆಪದಲ್ಲಿ ರೆಸಾರ್ಟ್‌ಗಳಲ್ಲಿ ಪ್ರವಾಸಿಗರು ಮೋಜು-ಮಸ್ತಿ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.

ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ಅಂಗಡಿಗಳಿಗೆ ತೆರಳಿ ವಸ್ತುಗಳನ್ನು ಖರೀದಿ ಮಾಡುತ್ತಾರೆ. ಅದರಲ್ಲಿ ಸೋಂಕಿತರನ್ನು ಕಂಡು ಹಿಡಿಯಲು ಸಾಧ್ಯವಾಗುತ್ತಿಲ್ಲ. ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ರೈತಾಪಿ ವರ್ಗ ಸಂಕಷ್ಟದಲ್ಲಿದೆ. ಮಳೆಗಾಲದಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಬೇಕಾಗಿದೆ. ಈಗಂತೂ ಕೊರೊನಾ ಭಯದಿಂದ ಮನೆ ಬಿಟ್ಟು ಹೊರಬರಲು ರೈತರು ಭಯಪಡುತ್ತಿದ್ದಾರೆ.

ಹೊರಗಿನಿಂದ ಬರುವ ಪ್ರವಾಸಿಗರನ್ನು ಕಂಡರೆ ಭಯವಾಗುತ್ತಿದೆ. ಕೊರೊನಾ ಮಾಹಾಮಾರಿ ಹೆಚ್ಚಾಗಿ ಗ್ರಾಮೀಣ ಭಾಗದಲ್ಲಿ ಹರಡಿಲ್ಲ. ನಗರ ಪ್ರದೇಶದ ಜನ ಕೊಡಗಿನ ಗ್ರಾಮೀಣ ಭಾಗಗಳಲ್ಲಿ ಎಂಜಾಯ್ ಮಾಡಲು ಬರುತ್ತಿರುವುದು ನಮಗೆ ಅತಂಕ ತಂದಿದೆ ಎನ್ನುತ್ತಿದ್ದಾರೆ ಗ್ರಾಮಸ್ಥರು.

ಉತ್ತಮ ಸ್ಪಂದನೆ: ಭಾನುವಾರ ರಾಜ್ಯಾದ್ಯಂತ ಸಂಪೂರ್ಣ ಲಾಕ್‌ಡೌನ್ ಘೋಷಿಸಿದ್ದು, ಮಂಜಿನ ನಗರಿ ಕೊಡಗಿನಲ್ಲೂ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಮಡಿಕೇರಿ ನಗರದಲ್ಲಿ ಅಗತ್ಯ ಸೇವೆಗಳಾದ ಮೆಡಿಕಲ್, ತರಕಾರಿ ಅಂಗಡಿಗಳನ್ನು ಹೊರತು ಪಡಿಸಿದರೆ ಎಲ್ಲಾ ಅಂಗಡಿ, ಮುಂಗಟ್ಟುಗಳು ಬಂದ್ ಆಗಿವೆ. ರಸ್ತೆಗಳಲ್ಲಿ ಅಗತ್ಯ ವಸ್ತುಗಳನ್ನು ತೆಗೆದುಕೊಳ್ಳಲು ಹೊರತುಪಡಿಸಿ ಜನರ ಓಡಾಟವಿಲ್ಲದೆ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿವೆ.

ಜಿಲ್ಲೆಯ ಶನಿವಾರ ಸಂತೆ, ಸೋಮವಾರಪೇಟೆ, ವಿರಾಜಪೇಟೆ ತಾಲೂಕು ಕೇಂದ್ರಗಳಲ್ಲೂ ಜನರ ಓಡಾಟವಿಲ್ಲದೆ ಬಿಕೋ ಎನ್ನುತ್ತಿದ್ದು, ಮನೆಯಿಂದ ಜನರೇ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ.

ಜಿಲ್ಲೆಯಲ್ಲಿ ಈಗಾಗಲೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದಲೇ ಜಿಲ್ಲೆಯಲ್ಲಿ ಜನಸಂಖ್ಯೆ ವಿರಳವಾಗಿ ಕಂಡುಬರುತ್ತಿದ್ದು, ಇಂದು ಲಾಕ್ ಡೌನ್ ಇರುವುದರಿಂದ ಜನರೇ ಇಲ್ಲದೇ ಗ್ರಾಮೀಣ ಭಾಗದ ರಸ್ತೆಗಳಲ್ಲಿ ವಾಹನ ಸಂಚಾರ ವಿರಳವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *