ಫೋನ್ ಕದ್ದಾಲಿಕೆ ಯಾಕೆ? ಹೇಗೆ? ಯಾರು ಮಾಡಬಹುದು?

Public TV
3 Min Read

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಒಂದು ಕಡೆ ನಾಯಕತ್ವ ಬದಲಾವಣೆ ಕೂಗು ಕೇಳಿ ಬಂದರೆ. ಇನ್ನೊಂದೆಡೆ ಸ್ವಪಕ್ಷೀಯರೇ ಒಬ್ಬರಿಗೊಬ್ಬರು ಆರೋಪಗಳನ್ನು ಹೊರಿಸುತ್ತಿದ್ದಾರೆ. ಈ ನಡುವೆ ಬಿಜೆಪಿಯ ಶಾಸಕ ಅರವಿಂದ್ ಬೆಲ್ಲದ್ ಅವರು ತಮ್ಮ ಫೋನ್ ಕದ್ದಾಲಿಕೆಯಾಗಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಈ ಹಿಂದೆ ಮೈತ್ರಿ ಸರ್ಕಾರದ ಮೇಲೆ ಬಿಜೆಪಿ ನಾಯಕರೇ ಫೋನ್ ಕದ್ದಾಲಿಕೆಯ ಆರೋಪ ಮಾಡಿದ್ದರು. ಈಗ ಬಿಜೆಪಿ ಸರ್ಕಾರ ಇರುವಾಗಲೇ ಅವರದೇ ಶಾಸಕರು ಫೋನ್ ಕದ್ದಾಲಿಕೆ ಆರೋಪ ಮಾಡಿದ್ದಾರೆ. ಈ ಹಿಂದೆ ಕೇಂದ್ರ ಸರ್ಕಾರದ ವಿರುದ್ಧವೂ ಫೋನ್ ಕದ್ದಾಲಿಕೆ ಆರೋಪ ಕೇಳಿ ಬಂದಿತ್ತು. ಹೀಗಾಗಿ ಇಲ್ಲಿ ಫೋನ್ ಕದ್ದಾಲಿಕೆ ಎಂದರೇನು? ಯಾರು ಮಾಡಬಹುದು? ಹೇಗೆ ಮಾಡುತ್ತಿದ್ದಾರೆ ಎನ್ನುವ ವಿಚಾರವನ್ನು ವಿವರಿಸಲಾಗಿದೆ. ಇದನ್ನೂ ಓದಿ: ನನ್ನ ಫೋನ್ ಕದ್ದಾಲಿಕೆಯಾಗಿದೆ, ಜೈಲಿನಿಂದ ಕಾಲ್ ಬರುತ್ತೆ – ಬೆಲ್ಲದ್

ಕ್ರಿಮಿನಲ್ ಕೃತ್ಯ ಎಸಗಲಿರುವವರನ್ನು, ಎಸಗಿದವರನ್ನು ಎಲ್ಲೇ ಅಡಗಿದ್ದರೂ ಪತ್ತೆ ಹಚ್ಚಿ ಅವರನ್ನು ಪತ್ತೆ ಹಚ್ಚಲು ಫೋನ್ ಕದ್ದಾಲಿಕೆ ಮಾಡಲಾಗುತ್ತದೆ. ಕಾನೂನಿನ ಅನ್ವಯ ಸರ್ಕಾರದ ಕೆಲವೇ ಇಲಾಖೆಗಳಿಗೆ ಮಾತ್ರ ಫೋನ್ ಕದ್ದಾಲಿಕೆ ಮಾಡಲು ಅವಕಾಶವಿದ್ದು, ಈಗ ಕೆಲವು ಸಮಾಜ ಘಾತುಕ ಶಕ್ತಿಗಳು ಫೋನ್ ಟ್ಯಾಪಿಂಗ್ ಮಾಡಲು ಆರಂಭಿಸಿವೆ. ಇಂದು ರಾಜಕಾರಣಿಗಳು, ಗಣ್ಯ ವ್ಯಕ್ತಿಗಳ ಫೋನ್ ಟ್ಯಾಪಿಂಗ್ ಹೆಚ್ಚಾಗುತ್ತಿದ್ದು, ಅಡಳಿತ ಪಕ್ಷದ ವಿರುದ್ಧ ವಿರೋಧಿ ಪಕ್ಷಗಳು ಫೋನ್ ಕದ್ದಾಲಿಕೆ ಆರೋಪ ಮಾಡುತ್ತಿದೆ.

ಏನಿದು ಫೋನ್ ಕದ್ದಾಲಿಕೆ?
ವಿಶೇಷ ಎಲೆಕ್ಟ್ರಾನಿಕ್ ಸಾಧನಗಳ ನೆರವಿನಿಂದ ಇಬ್ಬರು ಮಾತನಾಡುತ್ತಿರುವುದನ್ನು ಮೂರನೇಯವರು ಕದ್ದಾಲಿಸುವುದು ಫೋನ್ ಕದ್ದಾಲಿಕೆ. ಫೋನ್ ಕದ್ದಾಲಿಕೆಗೆ ಕಾನೂನಿನಡಿ ಅವಕಾಶವೂ ಇದೆ. ಆದರೆ ಇದಕ್ಕೆ ನಿರ್ದಿಷ್ಟ ರೀತಿ ನೀತಿಗಳಿವೆ. ಅದು ಹೊರತಾಗಿ ಕದ್ದಾಲಿಸಿದರೆ ಅದು ಕಾನೂನಿನ ಅಡಿ ಅಪರಾಧವಾಗುತ್ತದೆ. ಇದನ್ನೂ ಓದಿ: ವಿಶ್ವನಾಥ್ ಒರಿಜಿನಲ್ ಬಿಜೆಪಿ ಅಲ್ಲ – ರೇಣುಕಾಚಾರ್ಯ

ಆಧುನಿಕ ತಂತ್ರಜ್ಞಾನ ಬೆಳೆದಂತೆ ಫೋನ್ ಕದ್ದಾಲಿಕೆ ಮಾಡಲೆಂದೇ ಹೊಸ ಸಾಧನಗಳು ತಯಾರಾಗಿವೆ. ಅಲ್ಲದೇ ದೇಶ ವಿದೇಶದಿಂದ ಫೋನ್ ಕದ್ದಾಲಿಕೆ ಮಾಡುವ ಸಾಧನಗಳು ಅಕ್ರಮವಾಗಿ ದೇಶದೊಳಗೆ ರವಾನಿಸುವ ಜಾಲವೂ ಹುಟ್ಟಿಕೊಂಡಿದೆ. ತಜ್ಞರ ಪ್ರಕಾರ ಈ ಸಾಧನಗಳು ಸುಮಾರು ಎರಡು ಕಿ.ಮೀ. ದೂರದ ವರೆಗಿನ ವ್ಯಕ್ತಿಗಳ ಫೋನ್ ಕರೆಗಳನ್ನು ಕದ್ದಾಲಿಕೆ ಮಾಡುವ ಸಾಮರ್ಥ್ಯ ಹೊಂದಿರುತ್ತವೆ.

ಯಾರಿಗೆ ಅನುಮತಿ ಇದೆ?
ಸಮಾಜ ಘಾತುಕ ಶಕ್ತಿಗಳ ಚಲನವಲನ, ಕ್ರಿಮಿನಲ್ ಸಂಚು, ದೇಶದ, ಗಣ್ಯರ ವಿರುದ್ಧ ದಾಳಿಯಂತಹ ಚಟುವಟಿಕೆಗಳನ್ನು ತಡೆಯಲು ಗುಪ್ತಚರ ಸಂಸ್ಥೆಗಳು ಫೋನ್ ಕದ್ದಾಲಿಕೆ ಮಾಡುತ್ತವೆ. ಸಿಬಿಐ, ಗುಪ್ತಚರ ಇಲಾಖೆ, ಕಂದಾಯ ಗುಪ್ತಚರ, ಮಾದಕವಸ್ತು ನಿಯಂತ್ರಣ ದಳ, ಆದಾಯ ತೆರಿಗೆ ಇಲಾಖೆ ಮತ್ತು ಪೋಲಿಸ್ ಇಲಾಖೆ ಕದ್ದಾಲಿಕೆಯನ್ನು ಕಾನೂನಿನ ಅಡಿ ಮಾಡಬಹುದು. ಫೋನ್ ಕದ್ದಾಲಿಸಲು ಉಪಗ್ರಹ ಆಧಾರಿತ ವ್ಯವಸ್ಥೆಗಳು, ಟೆಲಿಫೋನ್ ಎಕ್ಸ್ ಚೇಂಜ್‍ನ ನೆರವಿನೊಂದಿಗೆ ಪ್ರತ್ಯೇಕ ಎಲೆಕ್ಟ್ರಾನಿಕ್ ವ್ಯವಸ್ಥೆಗಳ ಮೂಲಕ ಕದ್ದಾಲಿಕೆ ಮಾಡಲಾಗುತ್ತದೆ.

ನಿಯಮ ಏನು ಹೇಳುತ್ತೆ: 1885ರ ಇಂಡಿಯನ್ ಟೆಲಿಗ್ರಾಫ್ ಕಾಯ್ದೆ ಸೆಕ್ಷನ್ 5 (2)ರಲ್ಲಿ 419ನೇ ಮತ್ತು 419ಎ ನಿಬಂಧನೆಗಳಲ್ಲಿ ಫೋನ್ ಕರೆಗಳ ಮಾಹಿತಿ ಪಡೆಯುವ, ಕೇಳುವ ಬಗ್ಗೆ ಹೇಳಲಾಗಿದೆ. ರಾಷ್ಟ್ರದ ಹಿತಾಸಕ್ತಿಗೆ ವಿರುದ್ಧವಾಗಿ, ಭದ್ರತೆಗೆ ತೊಂದರೆಯಾಗುವ ವಿಚಾರಗಳಲ್ಲಿ ಫೋನ್ ಕದ್ದಾಲಿಕೆಗೆ ಅವಕಾಶವಿದ್ದು ಕ್ಯಾಬಿನೆಟ್ ಕಾರ್ಯದರ್ಶಿ, ಕಾನೂನು ಕಾರ್ಯದರ್ಶಿ ಈ ಬಗ್ಗೆ ನಿರ್ಧಾರ ಕೈಗೊಂಡು, ಗೃಹ ಇಲಾಖೆಗೆ ಮಾಹಿತಿ ನೀಡಬೇಕು. ಈ ಬಗ್ಗೆ ಗೃಹ ಇಲಾಖೆ 2 ತಿಂಗಳೊಳಗೆ ಪರಿಶೀಲನೆ ನಡೆಸಿ ತೀರ್ಮಾನಿಸಬೇಕು. ಒಂದು ಬಾರಿ ಅನುಮತಿ ನೀಡಿದರೆ ಅದು 6 ತಿಂಗಳ ಅವಧಿಯದ್ದಾಗಿರುತ್ತದೆ. ಹೀಗೆ ಕದ್ದಾಲಿಕೆ ವೇಳೆ ಪಡೆದ ಮಾಹಿತಿಗಳನ್ನು ಬಳಸಿ 2 ತಿಂಗಳೊಳಗೆ ಅವುಗಳನ್ನು ನಾಶಪಡಿಸಬೇಕು. ಇದು ಹೊರತಾಗಿ ಕೋರ್ಟ್ ನಿರ್ದೇಶನದ ಮೇರೆಗೆ ಫೋನ್ ಕದ್ದಾಲಿಕೆಗೆ ಅವಕಾಶವಿದೆ.

ಒಂದೊಮ್ಮೆ ಫೋನ್ ಕದ್ದಾಲಿಕೆಯಾದರೆ ವ್ಯಕ್ತಿಯ ಖಾಸಗಿ ತನಕ್ಕೆ ಧಕ್ಕೆ ತಂದದ್ದಕ್ಕಾಗಿ ಆತ ಮಾನವ ಹಕ್ಕುಗಳ ಆಯೋಗದ ಮೊರೆ ಹೋಗಬಹುದು. ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಬಹುದು. ಅಕ್ರಮ ಕದ್ದಾಲಿಕೆ ವಿಚಾರದ ಬಗ್ಗೆ ಭಾರತೀಯ ಟೆಲಿಗ್ರಾಫ್ ಕಾಯ್ದೆಯ ಸೆ26(ಬಿ) ಅಡಿಯಲ್ಲಿ ಕೋರ್ಟ್‍ಗೂ ದೂರು ನೀಡಬಹುದು. ಒಂದು ವೇಳೆ ಕದ್ದಾಲಿಸಿದ್ದು ಸಾಬೀತಾದರೆ ಅಪರಾಧಿಗೆ 3 ವರ್ಷಗಳ ವರೆಗೆ ಕಾರಾಗೃಹ ಶಿಕ್ಷೆ ನೀಡಲು ಕಾನೂನಿನಲ್ಲಿ ಅವಕಾಶವಿದೆ.

Share This Article
Leave a Comment

Leave a Reply

Your email address will not be published. Required fields are marked *