ಭದ್ರಾ ಮೇಲ್ದಂಡೆ, ಎತ್ತಿನಹೊಳೆ ಯೋಜನೆಗಳ ಪ್ರಗತಿ ಪರಿಶೀಲಿಸಿದ ಸಿಎಂ

Public TV
1 Min Read

ಬೆಂಗಳೂರು: ಎತ್ತಿನಹೊಳೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದರು.

ಎತ್ತಿನಹೊಳೆ ಯೋಜನೆಯಲ್ಲಿ ಈ ವರೆಗೆ 9003.86 ಕೋಟಿ ರೂ. ವೆಚ್ಚವಾಗಿದ್ದು, ಮೊದಲ ಹಂತದಲ್ಲಿ ಜುಲೈ ಅಂತ್ಯದೊಳಗೆ ವೇದಾವತಿ ವ್ಯಾಲಿಗೆ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು. ಅಲ್ಲದೆ ಎತ್ತಿನಹೊಳೆ ಯೋಜನೆಯು ಏಳು ಜಿಲ್ಲೆಯ 29 ತಾಲೂಕುಗಳ 6,557 ಗ್ರಾಮಗಳ 68 ಲಕ್ಷಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರು ಒದಗಿಸಲಿದೆ ಎಂದು ವಿವರಿಸಿದರು.

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಕೇಂದ್ರ ಸಚಿವ ಸಂಪುಟದ ಅನುಮೋದನೆ ಬಾಕಿ ಇದೆ. ಈ ಬಗ್ಗೆ ಕೇಂದ್ರ ಸಚಿವರೊಂದಿಗೆ ದೂರವಾಣಿ ಮೂಲಕ ಚರ್ಚಿಸಲಾಗಿದ್ದು, ಶೀಘ್ರ ಅನುಮೋದನೆ ನೀಡಲು ಕೋರಲಾಗಿದೆ. ಅಗತ್ಯ ಬಿದ್ದರೆ ಕೇಂದ್ರ ಸಚಿವರನ್ನು ಖುದ್ದು ಭೇಟಿ ಮಾಡಿ ಮಂಜೂರಾತಿಗೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ಈ ಯೋಜನೆಯಡಿ ಕಳೆದೆರಡು ವರ್ಷಗಳಲ್ಲಿ 2362.62 ಕೋಟಿ ರೂ.ಗಳ ಆರ್ಥಿಕ ಪ್ರಗತಿಯನ್ನು ಸಾಧಿಸಲಾಗಿದ್ದು, ಯೋಜನೆಯಿಂದ ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಿಗೆ ಅನುಕೂಲವಾಗಲಿದೆ. ನೀರಾವರಿ ಯೋಜನೆಗಳನ್ನು ಯಾವುದೇ ಲೋಪವಿಲ್ಲದಂತೆ ಅನುಷ್ಠಾನಗೊಳಿಸಬೇಕು. ಯಾವುದೇ ಲೋಪದೋಷಗಳು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ಸಿಎಂ ಎಚ್ಚರಿಸಿದರು.

ಸಭೆಯಲ್ಲಿ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಜಲ ಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *