ಮಂತ್ರಾಲಯದ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಸಚಿವ ಅರವಿಂದ ಲಿಂಬಾವಳಿ

Public TV
1 Min Read

ರಾಯಚೂರು: ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಚುರುಕುಗೊಳಿಸಲು ಅಗತ್ಯ ಸಹಕಾರ ನೀಡುವುದಾಗಿ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

ಇಂದು ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿ, ದರ್ಶನ ಪಡೆದರು. ಈ ವೇಳೆ ಮಠದಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಈ ಸಮಯದಲ್ಲಿ ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಶ್ರೀ ಸುಭುಧೇಂದ್ರ ತೀರ್ಥ ಸ್ವಾಮೀಜಿ ಈ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು.

ಸಚಿವ ಅರವಿಂದ ಲಿಂಬಾವಳಿ ಮಂತ್ರಾಲಯ ಗುರು ಶ್ರೀ ರಾಘವೇಂದ್ರ ಮಠದ ಅಭಿವೃದ್ಧಿ ಸಮಿತಿ ಸದಸ್ಯರಾಗಿ 2009ರಿಂದಲೂ ಕರ್ತವ್ಯ ನಿರ್ವಹಿಸುತ್ತಿದ್ದು, ಶ್ರೀಮಠದ ಕೆಲಸಗಳಲ್ಲಿ ಸಕ್ರಿಯವಾಗಿದ್ದಾರೆ. ಹೀಗಾಗಿ ಅವರು ಇಂದು ಮಂತ್ರಾಲಯದ ಅಭಿವೃದ್ಧಿ ಕಾರ್ಯಗಳ ವೀಕ್ಷಣೆ ನಡೆಸಿದರು. ನಾನಾ ಹಂತಗಳಲ್ಲಿ ಈ ಕಾಮಗಾರಿಗಳು ನಡೆಯುತ್ತಿದ್ದು, ಹಲವು ಸಮಸ್ಯೆಗಳು ಮತ್ತು ಅಡಚಣೆಗಳಿಂದಾಗಿ ಕೆಲಸ ನಿಧಾನವಾಗುತ್ತಿದೆ ಎಂದು ಸಚಿವರ ಗಮನ ಸೆಳೆದರು. ಇದಕ್ಕೆ ಸ್ಪಂದಿಸಿದ ಸಚಿವರು, ಈ ಬಗ್ಗೆ ಕೂಡಲೇ ಕ್ರಮ ವಹಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅಗತ್ಯವಿರುವ ಎಲ್ಲ ಸಹಕಾರ ನೀಡುವುದಾಗಿ ತಿಳಿಸಿದರು.

ಇದೇ ವೇಳೆ ನಾಡಿದ್ದು ಮಂತ್ರಾಲಯದಲ್ಲಿ ಉದ್ಘಾಟನೆ ಆಗಲಿರುವ ಶ್ರೀ ಅಭಯ ಆಂಜನೇಯ ಸ್ವಾಮಿ ದರ್ಶನ ಪಡೆದು, ಕಾಮಗಾರಿಗಳ ಪರಿಶೀಲನೆ ನಡೆಸಿದರು. ಅಲ್ಲದೆ ಉದ್ಘಾಟನಾ ಕಾರ್ಯಕ್ರಮದ ಬಗ್ಗೆ ಸಚಿವರು ಮಾಹಿತಿ ಪಡೆದರು.

Share This Article
Leave a Comment

Leave a Reply

Your email address will not be published. Required fields are marked *