ರಾಜ್ಯದಲ್ಲಿ ಮೊದಲ ಬಾರಿಗೆ ಹುಬ್ಬಳ್ಳಿಯಲ್ಲಿ ಪ್ಲಾಸ್ಮಾ ಥೆರಪಿ ಯಶಸ್ವಿ

Public TV
2 Min Read

ಹುಬ್ಬಳ್ಳಿ: ಜಗತ್ತನ್ನೇ ತಲ್ಲಣಗೊಳಿಸಿದ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಉತ್ತರ ಕರ್ನಾಟಕ ಭಾಗದ ಸಂಜೀವಿನಿ ಎಂದೇ ಖ್ಯಾತಿ ಪಡೆದ ಕಿಮ್ಸ್ ಈಗ ಮತ್ತೊಂದು ಚಿಕಿತ್ಸೆಯನ್ನು ಯಶಸ್ವಿಗೊಳಿಸಿದೆ.

ಕೊವೀಡ್ ಸೋಂಕಿತರನ್ನು ಗುಣಮುಖರನ್ನಾಗಿ ಮಾಡಲು ಪಾಸ್ಮಾ ಥೆರಪಿ ಚಿಕಿತ್ಸೆ ಪ್ರಯೋಗ ಮಾಡಲಾಗಿತ್ತು. ಆದರೆ ಹಲವೆಡೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ ವಿಫಲವಾದ ನಂತರ ಇದೀಗ ರಾಜ್ಯದಲ್ಲಿ ಮೊದಲ ಭಾರಿಗೆ ಹುಬ್ಬಳ್ಳಿಯಲ್ಲಿ ಪಾಸ್ಮಾ ಥೆರಪಿ ಚಿಕಿತ್ಸೆ ಯಶಸ್ವಿಯಾಗಿದೆ.

ಹುಬ್ಬಳ್ಳಿಯ ಕೋವಿಡ್ ನಿಂದ ಗುಣಮುಖರಾದ ವ್ಯಕ್ತಿಯ ಪ್ಲಾಸ್ಮಾ ಪಡೆದು ಮುಂಬೈನಿಂದ ರಾಜ್ಯಕ್ಕೆ ವಾಪಸ್ ಆಗಿದ್ದ 65 ವರ್ಷದ ಸೋಂಕಿತ ಪಿ-2710 ಪ್ಲಾಸ್ಮಾ ಥೆರಪಿ ಮಾಡಿ ವೈದ್ಯರ ತಂಡ ಯಶಸ್ಸು ಸಾಧಿಸಿದೆ ಎಂದು ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಹೇಳಿದ್ದಾರೆ.

ಕಿಮ್ಸ್ ನಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ನೀಡಲು ಐಸಿಎಂಆರ್ ಅನುಮತಿ ನೀಡಿದ್ದು, ರಾಜ್ಯದಲ್ಲಿ ಮೊದಲಿಗೆ ಹುಬ್ಬಳ್ಳಿಯ ವೈದ್ಯಕೀಯ ಶಿಕ್ಷಣ ಸಂಸ್ಥೆಗೆ ಅನುಮತಿ ನೀಡಲಾಗಿತ್ತು. ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಕಿಮ್ಸ್ ವೈದ್ಯರು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಕೋವಿಡ್ ಸೋಂಕಿನಿಂದ ಗುಣಮುಖರಾದ ರೋಗಿಗಳು ಪ್ಲಾಸ್ಮಾ ನೀಡಲು ಮೊದಲಿಗೆ ಹಿಂದೇಟು ಹಾಕುತ್ತಿದ್ದರು. ಆದರೆ ಕಿಮ್ಸ್ ಆಡಳಿತ ಮಂಡಳಿ ಗುಣಮುಖರಾದವರನ್ನು ಮನವೊಲಿಸಿ ಯಶಸ್ವಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಮಾಡಿರುವುದು ವಿಶೇಷವಾಗಿದೆ.

ಹಲವಾರು ಸವಾಲುಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ರಾಜ್ಯದಲ್ಲಿಯೇ ಮೊದಲ ಯಶಸ್ವಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಮಾಡುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದೆ. ಈ ಮೂಲಕ ವೈದ್ಯಕೀಯ ಲೋಕದಲ್ಲಿ ಹೊಸ ಮೈಲಿಗಲ್ಲನ್ನು ಸೃಷ್ಟಿಸಿದೆ.

ಈ ಮೊದಲು ಬೆಂಗಳೂರಿನಲ್ಲಿ ಪ್ಲಾಸ್ಮಾ ಚಿಕಿತ್ಸೆ ನಡೆಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರೋಗಿ ಮೃತಪಟ್ಟಿದ್ದರು. ಸಾಧಾರಣವಾಗಿ ಗಂಭೀರವಾಗಿ ಬಳಲುತ್ತಿರುವ ರೋಗಿಗಳಿಗೆ ಈ ಚಿಕಿತ್ಸೆ ನೀಡಲಾಗುತ್ತಿದೆ.

ಪ್ಲಾಸ್ಮಾ ಥೆರಪಿ ಎಂದರೇನು?
ಕೊರೊನಾದಿಂದ ಚೇತರಿಸಿಕೊಂಡ ವ್ಯಕ್ತಿಯ ರಕ್ತದಲ್ಲಿ ಆಂಟಿಬಾಡಿಗಳು ಇರುತ್ತವೆ. ಅವು ರೋಗ ನಿರೋಧಕ ಶಕ್ತಿ ಹೊಂದಿರುತ್ತವೆ. ಆ ಪ್ಲಾಸ್ಮಾವನ್ನು ತೆಗೆದು ಸೋಂಕಿತ ಅಥವಾ ಸೋಂಕು ಶಂಕೆ ಹೊಂದಿರುವ ವ್ಯಕ್ತಿಗೆ ನೀಡುವುದನ್ನೇ ಪ್ಲಾಸ್ಮಾ ಥೆರಪಿ ಎನ್ನಲಾಗುತ್ತದೆ. ಪ್ಲಾಸ್ಮಾ ಥೆರಪಿಗೆ ಒಳಗಾದ ವ್ಯಕ್ತಿಗಳು ಬೇಗನೆ ಕೊರೊನಾದಿಂದ ಗುಣಮುಖರಾಗುವುದು ವಿದೇಶಗಳಲ್ಲಿ ಸಾಬೀತಾಗಿದೆ.

ಸೋಂಕ ಮುಕ್ತವಾದ ವ್ಯಕ್ತಿ ಚೇತರಿಸಿಕೊಂಡ 28 ದಿನಗಳ ಬಳಿಕ ಪ್ಲಾಸ್ಮಾವನ್ನು ದಾನ ಮಾಡಬಹುದು, ಮೊದಲ ಪರೀಕ್ಷೆಯಲ್ಲಿ ಪಾಸಿಟಿವ್ ಬಂದು, 2ನೇ ಪರೀಕ್ಷೆಯಲ್ಲಿ ನೆಗೆಟಿವ್ ಬಂದವರು ಕೂಡಾ ದಾನ ಮಾಡಬಹುದಾಗಿದೆ. ದಾನಿಯೊಬ್ಬನ ಪ್ಲಾಸ್ಮಾವನ್ನು ಅದೇ ರಕ್ತದ ಗುಂಪಿನ ರೋಗಿಗಳಿಗೆ ಮಾತ್ರ ನೀಡಬಹುದು ಎಂದು ತಜ್ಞರು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *