ವರುಣನ ಅಬ್ಬರಕ್ಕೆ ಉಕ್ಕಿ ಹರಿಯುತ್ತಿರೋ ನದಿ, ಹಳ್ಳಕೊಳ್ಳಗಳು- ಜನ ಜೀವನ ಅಸ್ತವ್ಯಸ್ತ

Public TV
1 Min Read

– ಉಡುಪಿಯಲ್ಲಿ 3 ದಿನ ಆರೆಂಜ್ ಅಲರ್ಟ್ ಘೋಷಣೆ

ಕಾರವಾರ/ಉಡುಪಿ: ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಜನರ ಜೀವನ ಅಸ್ತವ್ಯಸ್ತವಾಗಿತ್ತದೆ. ಇತ್ತ ಮಳೆಯಿಂದ ಅನೇಕ ನದಿಗಳು ತುಂಬಿ ಹರಿಯುತ್ತಿವೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಅಬ್ಬರದ ಮಳೆ ಸುರಿಯುತ್ತಿದೆ. ಕರಾವಳಿ ಭಾಗದ ಅಂಕೋಲ ಭಾಗದಲ್ಲಿ ಅಬ್ಬರದ ಮಳೆಗೆ ಗಂಗಾವಳಿ ನದಿ ಉಕ್ಕಿ ಹರಿಯುತ್ತಿದೆ. ಪರಿಣಾಮ ತಗ್ಗು ಪ್ರದೇಶ ಶಿರೂರು ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಮಳೆಯ ಅಬ್ಬರಕ್ಕೆ ಆವರ್ಸಾದ ಬಳಿ ವಿದ್ಯುತ್ ಕಂಬ ಉರುಳಿ ಎರಡು ಹಸುಗಳು ಸಾವು ಕಂಡಿವೆ. ಕರಾವಳಿ ಉದ್ದಕ್ಕೂ ಮಳೆ ಪ್ರಮಾಣ ಹೆಚ್ಚಾಗಿದ್ದು, ಸಮುದ್ರದ ಅಲೆಯ ಪ್ರಮಾಣ ಸಹ ಏರಿಕೆಯಾಗಿದೆ. ಹೀಗಾಗಿ ಮೀನುಗಾರಿಕೆ ಸಹ ಬಂದ್ ಮಾಡಲಾಗಿದೆ. ಇನ್ನೂ ನಾಲ್ಕು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಬೀಳುತ್ತಿದ್ದು, ಮೂರು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಂಗಳವಾರ ರಾತ್ರಿಯಿಂದ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ಇಂದು ಬೆಳಗ್ಗೆಯೂ ಧಾರಾಕಾರ ಮಳೆ ಸುರಿದಿದೆ. ಜಿಲ್ಲೆಯಾದ್ಯಂತ ಕಳೆದ 24 ಗಂಟೆಯಲ್ಲಿ 116 ಮಿಲಿ ಮೀಟರ್ ಮಳೆ ಬಿದ್ದಿದೆ. ಇದೇ ಅವಧಿಯಲ್ಲಿ ಕುಂದಾಪುರ ತಾಲೂಕಿನಲ್ಲಿ ಗರಿಷ್ಠ ಸರಾಸರಿ 129 ಮಿಲಿ ಮೀಟರ್ ಮಳೆಯಾಗಿದೆ. ಉಡುಪಿ ತಾಲೂಕಿನಲ್ಲಿ 106, ಕಾರ್ಕಳ ತಾಲೂಕಿನಲ್ಲಿ 108 ಮಿಲಿ ಮೀಟರ್ ಮಳೆ ಬಿದ್ದಿದೆ. ಮಾನ್ಸೂನ್ ಮಳೆ ಮುಂದುವರೆಯಲಿದೆ.

ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಹೀಗಾಗಿ ಜಿಲ್ಲೆಯ ಎಲ್ಲಾ ನದಿ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಕಳೆದ 24 ಗಂಟೆಯಿಂದ ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕಿನಲ್ಲಿ ಎಡಬಿಡದೆ ಮಳೆಯಾಗುತ್ತಿದ್ದು, ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಜಿಲ್ಲೆಯಲ್ಲಿ ಸರಾಸರಿ 38.66 ಮಿ.ಮೀ. ಮಳೆಯಾಗಿದೆ. ಜಿಲ್ಲೆಯಲ್ಲಿ ಮಳೆ ಹೆಚ್ಚಿನ ಪ್ರಮಾಣದಲ್ಲಿ ಆಗುತ್ತಿರುವ ಕಾರಣ ಜಿಲ್ಲೆಯ ಜಲಾಶಯಗಳಲ್ಲಿ ಒಳ ಹರಿವು ಹೆಚ್ಚಾಗಿದೆ.

Share This Article
Leave a Comment

Leave a Reply

Your email address will not be published. Required fields are marked *