ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಯಶಸ್ವಿ ಕ್ರಮ: ಸಚಿವೆ ಶಶಿಕಲಾ ಜೊಲ್ಲೆ

Public TV
2 Min Read

– ಜಿಲ್ಲೆಗೆ ಬ್ಲಾಕ್ ಫಂಗಸ್ ಔಷಧ ನೀಡುವಂತೆ ಸಿಎಂಗೆ ಸಚಿವರ ಮನವಿ

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸಲು ಅಧಿಕಾರಿಗಳು ಹಾಗೂ ಎಲ್ಲ ಜನ ಪ್ರತಿನಿಧಿಗಳ ಸಹಕಾರದೊಂದಿಗೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ.

ಶನಿವಾರ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಕರೆದಿದ್ದ ಐದು ಜಿಲ್ಲೆಗಳ ಜನ ಪ್ರತಿನಿಧಿಗಳು ಮತ್ತು ಉಸ್ತುವಾರಿ ಸಚಿವರುಗಳ ಸಭೆಯಲ್ಲಿ ಬೆಂಗಳೂರಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಆಯಯಕ್ತರ ಕಚೇರಿಯಿಂದ ವಿಡಿಯೊ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈಗಾಗಲೇ ವಿಜಯಪುರ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳಾದ. ಬಿ.ಎಸ್. ಯಡಿಯೂರಪ್ಪ ಅವರ ಸೂಚನೆಯಂತೆ ಪ್ರತಿ ವಾರದಲ್ಲಿ ನಾಲ್ಕು ದಿನ ವಿಜಯಪುರ ಜಿಲ್ಲೆಯಲ್ಲಿ ವಾಸ್ತವ್ಯ ಹೂಡಿದ್ದೇನೆ. ಉಳಿದ ದಿನ ಕ್ಷೇತ್ರದಲ್ಲಿ ಕೊರೊನಾ ನಿಯಂತ್ರಣ ಕಾರ್ಯದಲ್ಲಿ ತೊಡಗಿಕೊಂಡಿದ್ದೆ.

ಜಿಲ್ಲೆಯಲ್ಲಿ ಕೈಗೊಂಡ ಕ್ರಮಗಳ ಕುರಿತು ಮುಖ್ಯಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತಂದಿದ್ದೇನೆ. ಜಿಲ್ಲೆಯಲ್ಲಿ ಶಾಸಕರು ಏನಾದರೂ ಸಮಸ್ಯೆ ಇದೆ ಎಂದು ಹೇಳಿದಾಗ ಅವರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಿದ್ದೇನೆ. ಅಲ್ಲದೇ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹರಿಸುವ ಪ್ರಯತ್ನ ನಡೆಸಿದ್ದೇನೆ ಎಂದು ವಿವರಣೆ ನೀಡಿದರು.

ವಿಜಯಪುರ ಜಿಲ್ಲೆಯಲ್ಲಿ ಬ್ಲಾಕ್ ಫಂಗಸ್ ರೋಗಕ್ಕೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸೂಕ್ತ ಸೌಕರ್ಯ ಇಲ್ಲದ ಕಾರಣ ಖಾಸಗಿ ಆಸ್ಪತ್ರೆಗಳಿಗೆ ಶಿಫಾರಸ್ಸು ಮಾಡಲಾಗುತ್ತಿದೆ. ಅಲ್ಲಿಯೂ ಕೂಡ ಬ್ಲಾಕ್ ಫಂಗಸ್ ಗೆ ಔಷಧದ ಕೊರತೆ ಇದೆ. ಅದನ್ನು ಪೂರೈಸುವಂತೆ ಈಗಾಗಲೇ ಮುಖ್ಯಮಂತ್ರಿಗಳು ಹಾಗೂ ಕೊವಿಡ್ ಕಾರ್ಯಪಡೆಯ ಅಧ್ಯಕ್ಷರಾಗಿರುವ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ಅವರ ಬಳಿ ಮನವಿ ಮಾಡಿಕೊಂಡಿದ್ದೇನೆ ಎಂದು ಸಚಿವರು ತಿಳಿಸಿದರು.

ಜಿಲ್ಲಾ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಹಾಗೂ ಅಂಬುಲೆನ್ಸ್ ಗಳ ಕೊರತೆ ಇದೆ. ಆದಷ್ಟು ಬೇಗ ವೈದ್ಯರನ್ನು ನಿಯೋಜಿಸುವಂತೆ ಸಭೆಯಲ್ಲಿ ಮನವಿ ಮಾಡಿರುವುದಾಗಿ ಸಚಿವರು ತಿಳಿಸಿದ್ದಾರೆ. ಇದಲ್ಲದೇ ಜಿಲ್ಲೆಯಲ್ಲಿ ಆರಂಭವಾಗುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ಮಾಣ ಕಾರ್ಯ ಆರಂಭಿಸಲಾಗುದ್ದು, ಆದಷ್ಟು ಬೇಗ ಪೂರ್ಣಗೊಳಿಸುವಂತೆ ಆರೋಗ್ಯ ಸಚಿವರಾಗಿರುವ ಡಾ. ಸುಧಾಕರ್ ಅವರನ್ನು ವಿಜಯಪುರ ಶಾಸಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ವಿಧಾನ ಪರಿಷತ್ ಸದಸ್ಯರಾಗಿರುವ ಅರುಣ್ ಶಹಾಪೂರ್ ಅವರೊಂದಿಗೆ ತೆರಳಿ ಮನವಿ ಮಾಡಿಕೊಳ್ಳಲಾಗಿದೆ. ಈಗಾಗಲೇ ನಿರ್ಮಾಣ ಕಾರ್ಯಾರಂಭ ಮಾಡಲಾಗಿದ್ದು ಆದಷ್ಟು ಶೀಘ್ರ ಪೂರ್ಣಗೊಳ್ಳಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಸಾರ್ವಜನಿಕರಲ್ಲಿ ಮಾಸ್ಕ್ ಬಳಕೆ, ಸ್ಯಾನಿಟೈಸರ್ ಬಳಕೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ನಿರಂತರ ಜಾಗೃತಿ ಮೂಡಿಸಲಾಗುತ್ತಿದೆ ಎಂದವರು ಹೇಳಿದರು.

ಇದೇ ವೇಳೆ ಸಚಿವರು ತಮ್ಮ ಕ್ಷೇತ್ರ ನಿಪ್ಪಾಣಿ ವಿಧಾನಸಭಾ ಕ್ಷೇತ್ರದಲ್ಲಿ ಐಸಿಯು ಹಾಗೂ ವೆಂಟಿಲೇಟರ್ ವ್ಯವಸ್ಥೆ ಮಾಡಲಾಗಿದ್ದರೂ ವೆಂಟಿಲೇಟರ್ ನಿರ್ವಹಣೆಗೆ ತಜ್ಞ ವೈದ್ಯರಿಲ್ಲ. ಹೀಗಾಗಿ ಆದಷ್ಟು ಬೇಗ ವೆಂಟಿಲೇಟರ್ ವೈದ್ಯರನ್ನು ನಿಯೋಜನೆ ಮಾಡುವಂತೆ ಮುಖ್ಯಮಂತ್ರಿಗಳಲ್ಲಿ ಸಚಿವರು ಮನವಿ ಮಾಡಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *