ವಿದುರಾಶ್ವತ್ಥದಲ್ಲಿ ಮೊಳಗಿದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಹಳೆ

Public TV
1 Min Read

ಚಿಕ್ಕಬಳ್ಳಾಪುರ: ದೇಶಕ್ಕೆ ಸ್ವಾತಂತ್ರ್ಯ ಬಂದು 2022 ಆಗಸ್ಟ್ 15ಕ್ಕೆ 75 ವರ್ಷಗಳು ತುಂಬುತ್ತಿರುವ ಹಿನ್ನೆಲೆ ಕೇಂದ್ರ ಸರ್ಕಾರ, ಸ್ವಾತಂತ್ರ್ಯ ಸಂಗ್ರಾಮದ ಸ್ಥಳಗಳಲ್ಲಿ, 75 ವಾರಗಳ ವರೆಗೂ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಇದರ ಭಾಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯಪಾಲ ವಿ.ಆರ್.ವಾಲಾ ಜಲಿಯನ್ ವಾಲಾಬಾಗ್ ಖ್ಯಾತಿಯ ವಿದುರಾಶ್ವತ್ಥಕ್ಕೆ ಭೇಟಿ ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಇಂದು ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ನಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರೆ, ರಾಜ್ಯದಲ್ಲಿ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥಕ್ಕೆ ಸಿಎಂ ಹಾಗೂ ರಾಜ್ಯಪಾಲರು ಭೇಟಿ ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸ್ವಾತಂತ್ರ್ಯ ಸಂಗ್ರಾಮ, ಸ್ವಾತಂತ್ರ್ಯ ಹೋರಾಟಗಾರರು, ದೇಶ ಭಕ್ತಿಯ ಬಗ್ಗೆ ಜನಜಾಗೃತಿ ಮೂಡಿಸಲು ಮುಂದಾಗಿರುವ ಕೇಂದ್ರ ಸರ್ಕಾರ, ದೇಶದ 75 ಸ್ವಾತಂತ್ರ್ಯ ಸಂಗ್ರಾಮ ಸ್ಥಳಗಳಲ್ಲಿ ಏಕಕಾಲಕ್ಕೆ, ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸಲು ಚಾಲನೆ ನೀಡಿದೆ.

ವಿದುರಾಶ್ವತ್ಥಕ್ಕೆ ಆಗಮಿಸಿ ಹುತಾತ್ಮ ಸ್ವಾತಂತ್ರ್ಯ ಸೇನಾನಿಗಳ ಸ್ಮಾರಕ ಸ್ಥೂಪಗಳಿಗೆ ಪುಷ್ಪನಮನ ಸಲ್ಲಿಸಿ, ಗೌರವ ವಂದನೆ ಸಲ್ಲಿಸಿದರು. ಇದೇ ವೇಳೆ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮ ವೇದಿಕೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪ್ರಧಾನಿ ಮೋದಿಯವರ ಆಶಯದಂತೆ ಶಾಲಾಕಾಲೇಜು, ಸಾರ್ವಜನಿಕ ಸ್ಥಳಗಳಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.

ರಾಜ್ಯಪಾಲ ವಿ.ಆರ್.ವಾಲಾ ಮಾತನಾಡಿ, ಸ್ವಾತಂತ್ರ್ಯ ಸೇನಾನಿಗಳ ತ್ಯಾಗ, ಬಲಿದಾನ, ಶ್ರಮದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು, ಈಗ ನಮ್ಮ ಸೈನಿಕರು ಹಿಮ ಪ್ರದೇಶದಲ್ಲಿ ದೇಶದ ರಕ್ಷಣೆ ಮಾಡುತ್ತಿದ್ದಾರೆ. ನಾವು ಎಸಿ ರೂಮ್ ಗಳಲ್ಲಿ ಹಾಯಾಗಿ ಕೆಲಸ ಮಾಡುತ್ತಿದ್ದೇವೆ. ಇಂದಿನ ಯುವ ಸಮುದಾಯಕ್ಕೆ, ಸಾಕಷ್ಟು ಅವಕಾಶಗಳಿವೆ ದೇಶ ಸೇವೆಗಾಗಿ ಜೀವನ ಮುಡುಪಾಗಿಡಬೇಕೆಂದು ಕರೆ ನೀಡಿದರು.

ಸಿಎಂ ಯಡಿಯೂರಪ್ಪ ಹಾಗೂ ರಾಜ್ಯಪಾಲರು ವಿಧುರಾಶ್ವತ್ಥಕ್ಕೆ ಆಗಮಿಸುತ್ತಿದ್ದಂತೆ ಆಶ್ವತ್ಥ ನಾರಾಯಣಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಇಂದಿನಿಂದ ಮುಂದಿನ 75 ವಾರಗಳ ಕಾಲ ದೇಶದ ವಿವಿಧ ಸ್ಥಳಗಳಲ್ಲಿ ವಾರಕ್ಕೊಮ್ಮೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮಗಳು ನಡೆಯಲಿವೆ.

Share This Article
Leave a Comment

Leave a Reply

Your email address will not be published. Required fields are marked *