ಬಂಗಾಳದಲ್ಲಿ ವಕ್ಫ್‌ ಕಾಯ್ದೆ ವಿರೋಧಿಸಿ ಪ್ರತಿಭಟನೆ – ಘರ್ಷಣೆಯಲ್ಲಿ ಮೂವರು ಸಾವು

Public TV
1 Min Read

ಕೋಲ್ಕತ್ತಾ: ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಕಾಯ್ದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದ ಹಿಂಸಾತ್ಮಕ ಘರ್ಷಣೆಗಳಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಶುಕ್ರವಾರ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 118 ಜನರನ್ನು ಬಂಧಿಸಲಾಗಿದೆ. ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮ್ಮ ರಾಜ್ಯವು ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರುವುದಿಲ್ಲ ಎಂದು ಘೋಷಿಸಿದ್ದಾರೆ.

ನಾವು ವಕ್ಫ್‌ ವಿಷಯದ ಬಗ್ಗೆ ನಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದೇವೆ. ನಾವು ಈ ಕಾನೂನನ್ನು ಬೆಂಬಲಿಸುವುದಿಲ್ಲ. ಈ ಕಾನೂನನ್ನು ನಮ್ಮ ರಾಜ್ಯದಲ್ಲಿ ಜಾರಿಗೆ ತರಲಾಗುವುದಿಲ್ಲ. ಹೀಗಿದ್ದಾಗ ಗಲಭೆ ಯಾಕೆ ಎಂದು ಎಕ್ಸ್‌ನಲ್ಲಿ ಬ್ಯಾನರ್ಜಿ ಪೋಸ್ಟ್‌ ಹಾಕಿದ್ದಾರೆ.

ರಾಜ್ಯದ ಹಲವಾರು ಪ್ರದೇಶಗಳಲ್ಲಿ, ವಿಶೇಷವಾಗಿ ಅಲ್ಪಸಂಖ್ಯಾತರ ಪ್ರಾಬಲ್ಯದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ವಕ್ಫ್ ಕಾಯ್ದೆಯ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ಶಾಂತಿ ಕಾಪಾಡುವಂತೆ ಸಿಎಂ ಮನವಿ ಮಾಡಿಕೊಂಡಿದ್ದಾರೆ.

ಪ್ರತಿಭಟನೆಗಳ ಹೆಸರಿನಲ್ಲಿ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡುವ ಯಾವುದೇ ಪ್ರಯತ್ನಗಳನ್ನು ರಾಜ್ಯ ಪೊಲೀಸರು ಸಹಿಸುವುದಿಲ್ಲ ಎಂದು ಪೊಲೀಸ್ ಮಹಾನಿರ್ದೇಶಕ ರಾಜೀವ್ ಕುಮಾರ್ ಪ್ರತಿಭಟನಾಕಾರರಿಗೆ ಎಚ್ಚರಿಕೆ ನೀಡಿದ್ದಾರೆ.

Share This Article