ನಲವತ್ತರ ವಯಸ್ಸಿನ ಪಾತ್ರ ಒಪ್ಪಿಕೊಂಡ ರಚಿತಾ ರಾಮ್

Public TV
2 Min Read

ಸಂಜು ವೆಡ್ಸ್ ಗೀತಾ 2 ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ನಟಿ ರಚಿತಾ ರಾಮ್, ಈ ನಡುವೆ ದುನಿಯಾ ವಿಜಯ್ ನಟನೆಯ ಹೊಸ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ರಚಿತಾ ಅವರದ್ದು ನಲವತ್ತರ ವಯಸ್ಸಿನ ಪಾತ್ರ ಎನ್ನುವುದು ಬಹಿರಂಗವಾಗಿದೆ. ಸದಾ ಗ್ಲಾಮ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದ ರಚ್ಚು, ಈ ಬಾರಿ ವಿಭಿನ್ನ ಪಾತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಜಂಟಲ್ ಮ್ಯಾನ್, ಗುರುಶಿಷ್ಯರು ಚಿತ್ರಗಳ ನಿರ್ದೇಶಕ ಹಾಗೂ ಕಾಟೇರ ಚಿತ್ರದ ಲೇಖಕ ಜಡೇಶ ಕೆ ಹಂಪಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಮಹಾಲಕ್ಷ್ಮೀಪುರದ ಶ್ರೀವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ನಡೆಯಿತು. ರಚಿತಾರಾಮ್ ಈ ಚಿತ್ರದ ನಾಯಕಿಯಾಗಿ ನಟಿಸುತ್ತಿದ್ದು, ದುನಿಯಾ ವಿಜಯ್ ಪುತ್ರಿ ರಿತನ್ಯ(ಮೋನಿಕಾ) ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. “ಡೇರ್ ಡೆವಿಲ್ ಮುಸ್ತಫಾ” ಖ್ಯಾತಿಯ ಶಿಶಿರ್ ಸಹ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದು ನಾನು ಕಂಡ, ಕೇಳಿದ ಹಾಗೂ ನೋಡಿದ ನೈಜ ಕಥೆ ಎಂದು ಮಾತನಾಡಿದ ನಿರ್ದೇಶಕ ಜಡೇಶ ಕೆ ಹಂಪಿ, ಇದು ಆಳಿದವರ ಕಥೆಯಲ್ಲ. ಅಳಿದು ಉಳಿದವರ ಕಥೆ.  ಕೋಲಾರ ಭಾಗದಲ್ಲಿ ನಡೆಯುವ ಕಥೆಯಾಗುವುದರಿಂದ ಸಂಭಾಷಣೆ ಕೋಲಾರದ ಭಾಷೆಯಲ್ಲೇ ಇರುತ್ತದೆ.   ಮಾಸ್ತಿ ಅವರು ಸಂಭಾಷಣೆ ಬರೆಯುತ್ತಿದ್ದಾರೆ. ಅವರು ಕೋಲಾರದವರೆ ಆಗಿರುವುದು ವಿಶೇಷ.ಇದು 90 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಶಿವರಾಮ ಕಾರಂತರ “ಚೋಮನ ದುಡಿ”ಯ ಚೋಮನ ಪಾತ್ರ ಈ ಚಿತ್ರಕ್ಕೆ ಸ್ಪೂರ್ತಿ. ಹಾಗಂತ “ಚೋಮನ ದುಡಿ” ಚಿತ್ರಕ್ಕೂ ಈ ಚಿತ್ರಕ್ಕೂ ಸಂಬಂಧವಿಲ್ಲ. ಇನ್ನು ಈ ಚಿತ್ರವನ್ನು ಜಗದೀಶ್ ಅವರು ನಿರ್ಮಿಸಬೇಕಿತ್ತು‌. ಕಾರಣಾಂತರದಿಂದ ಆಗಲಿಲ್ಲ. ಆನಂತರ ಸ್ನೇಹಿತರೊಬ್ಬರ ಮೂಲಕ ಸತ್ಯಪ್ರಕಾಶ್ ಅವರ ಪರಿಚಯವಾಯಿತು. ಅವರು ಹಾಗೂ ಅವರ ಮಗ ಸೂರಜ್ ಈ ಚಿತ್ರದ ಕಥೆ ಕೇಳಿ ಮೆಚ್ಚಿಕೊಂಡರು. ಕೇವಲ ಇಪ್ಪತ್ತು ದಿನಗಳಲ್ಲಿ ಚಿತ್ರಕ್ಕೆ ಚಾಲನೆ ದೊರಕ್ಕಿದೆ. ಬೆಂಗಳೂರಿನಲ್ಲಿ ಅದ್ದೂರಿ ಸೆಟ್ ಹಾಕಲಾಗುತ್ತಿದೆ. ಉಳಿದಂತೆ ಕೋಲಾರ, ಮೈಸೂರಿನಲ್ಲೂ ಚಿತ್ರೀಕರಣ ನಡೆಯಲಿದೆ. ನಾಯಕ ವಿಜಯ್ ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುತ್ತಾರೆ ನಿರ್ದೇಶಕರು.

ಈ ಚಿತ್ರದ ಮತ್ತೊಂದು ವಿಶೇಷವೆಂದರೆ ತಂದೆ – ಮಗ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ತಂದೆ – ಮಗಳು ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲೂ ದುನಿಯಾ ವಿಜಯ್ ಮಗಳು,  ಮಗಳ ಪಾತ್ರದಲ್ಲೇ ಅಭಿನಯಿಸುತ್ತಿದ್ದಾರೆ.

Share This Article