ಪ್ರಸಾದ್‌ ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದರು – ಸಿಎಂ ಸಂತಾಪ

Public TV
5 Min Read

– ಶ್ರೀನಿವಾಸ ಪ್ರಸಾದ್‌ ನಿಧನಕ್ಕೆ ಕಂಬನಿ ಮಿಡಿದ ಬಿಜೆಪಿ ನಾಯಕರು

ಬೆಂಗಳೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು-ಚಾಮರಾಜನಗರ ಭಾಗದ ದಲಿತ ನಾಯಕ ವಿ.ಶ್ರೀನಿವಾಸ ಪ್ರಸಾದ್ ಅವರು ನಿಧರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ (Siddramaiah) ಸೇರಿದಂತೆ ಅನೇಕ ಬಿಜೆಪಿ ನಾಯಕರು (BJP Leaders) ಕಂಬನಿ ಮಿಡಿದಿದ್ದಾರೆ.

ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಪ್ರಸಾದ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ (Bengaluru Private Hospital) ನಸುಕಿನ ಜಾವ 1.27ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಾಯಕರು ತಮ್ಮ ಸೋಶಿಯಲ್‌ ಮೀಡಿಯಾ ಎಕ್ಸ್‌ ಖಾತೆಗಳಲ್ಲಿ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಶ್ರೀನಿವಾಸ್‌ ಪ್ರಸಾದ್‌ ವಿಧಿವಶ – ಪ್ರಭಾವಿ ದಲಿತ ನಾಯಕನ ರಾಜಕೀಯ ಏಳು-ಬೀಳಿನ ಹಾದಿ ಹೇಗಿತ್ತು?

ಸಿದ್ದರಾಮಯ್ಯ:
ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ. ದೀರ್ಘಕಾಲ ಕಾಂಗ್ರೆಸ್ ಪಕ್ಷದ ಪ್ರಮುಖ ನೇತಾರರಾಗಿ ಕೆಲಸ ಮಾಡಿದ್ದ ಶ್ರೀನಿವಾಸ ಪ್ರಸಾದ್ ಸಚಿವರಾಗಿ ಮತ್ತು ಲೋಕಸಭಾ ಸದಸ್ಯರಾಗಿ ದೀರ್ಘ ಕಾಲ ಜನ ಸೇವೆ ಮಾಡಿದ್ದಾರೆ. ಅವರೊಬ್ಬ ಪ್ರಗತಿಪರ ಚಿಂತನೆಯ ರಾಜಕೀಯ ನಾಯಕ.

ಹಳೆಮೈಸೂರು ಭಾಗದಲ್ಲಿ ಬಹಳಷ್ಟು ಕಾಲ ನಾವು ಬೇರೆಬೇರೆ ಪಕ್ಷಗಳಲ್ಲಿ ಕೆಲಸ ಮಾಡಿದ್ದರೂ ಪರಸ್ಪರ ಗೌರವಪೂರ್ಣ ಸಂಬಂಧವನ್ನು ಉಳಿಸಿಕೊಂಡಿದ್ದೆವು. ಇತ್ತೀಚೆಗಷ್ಟೇ ನಾನು ಭೇಟಿಯಾಗಿದ್ದ ಸಂದರ್ಭದಲ್ಲಿ ನಾವು ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡೆವು. ಆಗ ಗೆಲುವಾಗಿದ್ದ ಪ್ರಸಾದ್ ಇಷ್ಟು ಶೀಘ್ರ ನಮ್ಮನ್ನು ಅಗಲಿ ಹೋಗುತ್ತಾರೆ ಎಂಬ ನಿರೀಕ್ಷೆಯೇ ಇರಲಿಲ್ಲ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರವಾದ ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಇದನ್ನೂ ಓದಿ: ಸಾವಾದ್ರೂ ನಗುನಗುತ್ತಾ ಬೀಳ್ಕೊಡಿ ಅಂತಾ ತಂದೆ ಯಾವಾಗ್ಲೂ ಹೇಳ್ತಾ ಇದ್ರು: ಶ್ರೀನಿವಾಸ್ ಪ್ರಸಾದ್ ಮಗಳು

ವಿಜಯೇಂದ್ರ:
ಕೇಂದ್ರದ ಮಾಜಿ ಸಚಿವರು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರು, ಹಿರಿಯ ಮುತ್ಸದ್ದಿಗಳಾದ ಶ್ರೀ ವಿ ಶ್ರೀನಿವಾಸ್ ಪ್ರಸಾದ್ ಅವರು ಅನಾರೋಗ್ಯದಿಂದ ನಿಧನರಾದ ಸುದ್ದಿ ಅತೀವ ದುಃಖ ತರಿಸಿದೆ. ಅವರ ಅಗಲಿಕೆಯಿಂದ ದಕ್ಷಿಣ ಕರ್ನಾಟಕದ ದಲಿತ ಸೂರ್ಯ ಮುಳುಗಿದಂತಾಗಿದೆ. ಅವರ ರಾಜಕೀಯ ಜೀವನದ ಕಡೇ ದಿನಗಳಲ್ಲಿ ಬಿಜೆಪಿಯನ್ನು ಆಯ್ದುಕೊಂಡು ಸಂಸದರಾಗಿ ಪಕ್ಷದ ತತ್ವ, ಸಿದ್ದಾಂತ ಹಾಗೂ ರಾಷ್ಟ್ರೀಯವಾದದ ಸತ್ವವನ್ನು ಜನರಿಗೆ ತಿಳಿಸುವಲ್ಲಿ ನಾಯಕತ್ವ ವಹಿಸಿದ್ದು ಬಿಜೆಪಿಯ ಸಾಮಾಜಿಕ ನ್ಯಾಯ ಹಾಗೂ ಸಂವಿಧಾನ ಮೌಲ್ಯವನ್ನು ಎತ್ತಿ ಹಿಡಿಯುವ ಬದ್ಧತೆಯನ್ನು ಸಾಕ್ಷೀಕರಿಸಿತ್ತು. ಪ್ರಸ್ತುತ ಕಾಲಮಾನದಲ್ಲಿ ಮಾನ್ಯ ಪ್ರಸಾದರ ಅನುಪಸ್ಥಿತಿ ರಾಷ್ಟ್ರರಾಜಕಾರಣದಲ್ಲೂ ಕೊರತೆ ಸೃಷ್ಟಿಸಿದಂತಾಗಿದೆ. ಅವರ ಅಗಲಿಕೆಯ ನೋವನ್ನು ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ.

ಸಿ.ಟಿ ರವಿ:
ದಕ್ಷಿಣ ಕರ್ನಾಟಕದ ದಲಿತಸೂರ್ಯ ಅಸ್ತಂಗತ. ಹಿರಿಯ ನಾಯಕರು, ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದರಾದ ಶ್ರೀ ವಿ.ಶ್ರೀನಿವಾಸ್ ಪ್ರಸಾದ್ ವಿಧಿವಶರಾದ ಸುದ್ದಿ ನೋವನ್ನುಂಟು ಮಾಡಿದೆ. ಪ್ರಭಾವಿ ದಲಿತ ಮುಖಂಡರಾಗಿ , ಸಂಸದೀಯ ಪಟುವಾಗಿ ರಾಜ್ಯ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಇವರ ನಿಧನ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಸದ್ಗತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ,ಬಂಧು ಮಿತ್ರ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

ಡಾ.ಕೆ ಸುಧಾಕರ್‌:
ನಾಡಿನ ಮುತ್ಸದ್ಧಿ ನಾಯಕರಾದ ಶ್ರೀ ಶ್ರೀನಿವಾಸ ಪ್ರಸಾದ್ ಅವರ ನಿಧನದ ಸುದ್ದಿ ಆಘಾತ ಮೂಡಿಸಿದೆ. ಕೇಂದ್ರ ಹಾಗು ರಾಜ್ಯ ಸಚಿವರಾಗಿ, ಆರು ಬಾರಿ ಸಂಸದರಾಗಿ, ಎರಡು ಬಾರಿ ಶಾಸಕರಾಗಿ ಸುಮಾರು ಐದು ದಶಕಗಳ ಸುದೀರ್ಘ ಸಾರ್ವಜನಿಕ ಜೀವನ ನಡೆಸಿದ ಶ್ರೀ ಶ್ರೀನಿವಾಸ್ ಪ್ರಸಾದ್ ಅವರ ಅಗಲಿಕೆಯಿಂದ ನಮ್ಮ ನಾಡು ಒಬ್ಬ ಶ್ರೇಷ್ಠ ಜನನಾಯಕನನ್ನು ಕಳೆದುಕೊಂಡಿದೆ. ಶ್ರೀಯುತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರು, ಬಂಧು-ಮಿತ್ರರು ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ.

ವಿ. ಸೋಮಣ್ಣ:
ಹಿರಿಯ ರಾಜಕೀಯ ನಾಯಕರು ಹಾಗೂ ಸಂಸದರಾದ ಶ್ರೀ ವಿ. ಶ್ರೀನಿವಾಸ್ ಪ್ರಸಾದ್ ರವರ ನಿಧನದ ಸುದ್ದಿ ಕೇಳಿ ಅತ್ಯಂತ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

Share This Article