ಡಾಲಿ ಧನಂಜಯ್ ನಟನೆಯ ‘ಕೋಟಿ’ ಸಿನಿಮಾಗೆ ಯೋಗರಾಜ್ ಭಟ್ ಸಾಹಿತ್ಯ

Public TV
1 Min Read

ಡಾಲಿ ಧನಂಜಯ್ (Dolly Dhananjay) ಅಭಿನಯದ ಕೋಟಿ (Kotee) ಸಿನಿಮಾದ ಮೊದಲ ಹಾಡು ‘ಮಾತು ಸೋತು’ ಮೇ 13, ಸೋಮವಾರ ಸಂಜೆ 5 ಗಂಟೆಗೆ ಬಿಡುಗಡೆಯಾಗಲಿದೆ. ಈ ಹಾಡನ್ನು ವಾಸುಕಿ ವೈಭವ್ ಸಂಯೋಜಿಸಿದ್ದು, ಯೋಗರಾಜ್ ಭಟ್ (Yogaraj Bhatt) ಸಾಹಿತ್ಯ ರಚಿಸಿ, ಅರ್ಮಾನ್ ಮಲಿಕ್ ಹಾಡಿದ್ದಾರೆ. ಕೋಟಿ ಸಿನಿಮಾದ ಹಾಡುಗಳ ಹಕ್ಕನ್ನು ಸರೆಗಮ ಖರೀದಿಸಿದ್ದು ಈ ಹಾಡಿನ ಲಿರಿಕಲ್ ವಿಡಿಯೋ ಸರೆಗಮ ಕನ್ನಡ ಯೂಟ್ಯೂಬ್ ಚಾನೆಲ್ಲಿನಲ್ಲಿ ಮೇ 13ರಂದು ಬಿಡುಗಡೆಯಾಗಲಿದೆ.

ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ರಮೇಶ್‌ ಇಂದಿರಾ, ತಾರಾ, ಸರ್ದಾರ್‌ ಸತ್ಯ ಮುಂತಾದವರು ಅಭಿನಯಿಸಿದ್ದಾರೆ.

ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು ಚಾರ್ಲಿ 777 ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮರಮನ್.

ಈ ಸಿನೆಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ʼಕೋಟಿʼ ಜೂನ್‌ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Share This Article