ಕೆಆರ್‌ಎಸ್‌ನಿಂದ 1.30 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆ

Public TV
2 Min Read

ಮಂಡ್ಯ: ಕೊಡಗು (Kodagu), ಹಾಸನ (Hassana) ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಮಂಡ್ಯದಲ್ಲಿರುವ ಕೃಷ್ಣರಾಜ ಸಾಗರ ಜಲಾಶಯದಿಂದ (KRS Dam) 1.30 ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ವರುಣನ ಅಬ್ಬರ ಜೋರಾಗಿದ್ದು ಹಾರಂಗಿ ಮತ್ತು ಹೇಮಾವತಿ ಜಲಾಶಯದಿಂದ ಭಾರೀ ಪ್ರಮಾಣದ ನೀರನ್ನು ನದಿ ಹರಿಸಲಾಗುತ್ತಿದೆ. ಪರಿಣಾಮ ಕ್ಷಣ ಕ್ಷಣಕ್ಕೂ ಕೆಆರ್‌ಎಸ್‌ ಒಳ ಹರಿವು ಹಾಗೂ ಹೊರಹರಿವಿನಲ್ಲಿ ಏರಿಕೆಯಾಗುತ್ತಿದೆ.

ಜಲಾಶಯ ಈಗಾಗಲೇ ಸಂಪೂರ್ಣ ಭರ್ತಿಯಾಗಿದೆ. 124.84 ಅಡಿ ಗರಿಷ್ಠ ಮಟ್ಟದ ಜಲಾಶಯದಲ್ಲಿ 124.80 ಅಡಿ ನೀರು ಸಂಗ್ರಹವಾಗಿದೆ. 1,20,000 ಕ್ಯೂಸೆಕ್ ಒಳ ಹರಿವು ಇದ್ದು 1,30,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. 49.452 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 48.643 ಟಿಎಂಸಿ ನೀರು ಸಂಗ್ರಹಗೊಂಡಿದೆ. ಇದನ್ನೂ ಓದಿ: ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಅದ್ಧೂರಿ ಚಾಲನೆ – ಬೋಟ್‌ಗಳಲ್ಲಿ ಕ್ರೀಡಾಪಟುಗಳ ಪಥಸಂಚಲನ

 ಬಾಗಿನ ಸಮರ್ಪಣೆ:
ಎರಡು ವರ್ಷದ ಬಳಿಕ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜುಲೈ 29 ಸೋಮವಾರ  ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಬಾಗಿನ ಸಮರ್ಪಣೆ ಮಾಡಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ಹೆಗ್ಗಡದೇವನಕೋಟೆ ತಾಲೂಕಿನ ಬಿಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಸಿಎಂ ಬಾಗಿನ ಸಮರ್ಪಿಸಲಿದ್ದಾರೆ.

ಕ್ಯುಸೆಕ್ ಮತ್ತು ಟಿಎಂಸಿ ಎಂದರೆ ಎಷ್ಟು?
ಕ್ಯುಸೆಕ್ ಎಂಬುದು Cubic feet per Secondನ ಹ್ರಸ್ವರೂಪ ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯುಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯುಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯುಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಆಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.

Share This Article