ಪಹಲ್ಗಾಮ್‌ನಲ್ಲಿ ನಡೆದಿದ್ದು ಘೋರ ದುರಂತ – ಭಾರತ, ಪಾಕ್‌ ಉದ್ವಿಗ್ನತೆ ಬಗೆಹರಿಸಿಕೊಳ್ಳಲಿವೆ: ಟ್ರಂಪ್

Public TV
2 Min Read

ವಾಷಿಂಗ್ಟನ್‌: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ (Pahalgam Terror Attack) ಅತ್ಯಂತ ಘೋರ ಘಟನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಹೇಳಿದ್ದಾರೆ.

ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆಗಾಗಿ ರೋಮ್‌ಗೆ ತೆರಳುವಾಗ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ನಾನು ಭಾರತ ಮತ್ತು ಪಾಕಿಸ್ತಾನ (Pakistan) ಎರಡೂ ದೇಶಕ್ಕೂ ಆಪ್ತನಾಗಿದ್ದೇನೆ. ಈ ಎರಡೂ ದೇಶಗಳ ನಡುವೆ 1,000- 1,500 ವರ್ಷಗಳಿಂದ ಉದ್ವಿಗ್ನತೆ ಇದೆ. ಈ ಉದ್ವಿಗ್ನತೆಯನ್ನು ಒಂದಲ್ಲ ಒಂದು ರೀತಿಯಲ್ಲಿ ಅವರು ಬಗೆಹರಿಸಿಕೊಳ್ಳುತ್ತಾರೆ ಎಂಬ ನಂಬಿಕೆ ನನಗಿದೆ ಎಂದಿದ್ದಾರೆ.

ಪಹಲ್ಗಾಮ್ ಉಗ್ರರ ದಾಳಿಯ ವಿಚಾರವಾಗಿ, ಇದು ತುಂಬಾ ಭೀಕರ ದಾಳಿಯಾಗಿದೆ. ಇಂತಹ ಉದ್ವಿಗ್ನ ಪರಿಸ್ಥಿತಿ ಭಾರತ ಪಾಕ್‌ ನಡುವೆ ಹಲವಾರು ವರ್ಷಗಳಿಂದಲೂ ಇದೆ. ಎರಡೂ ದೇಶಗಳು ಈ ಸಮಸ್ಯೆಯನ್ನು ಸರಿಪಡಿಸಿಕೊಳ್ಳುತ್ತಾರೆ ಎಂದಿದ್ದಾರೆ.

ಮಂಗಳವಾರ ಪಹಲ್ಗಾಮ್ ಬಳಿಯ ಬೈಸರನ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 25 ಭಾರತೀಯರು ಮತ್ತು ಒಬ್ಬ ನೇಪಾಳಿ ಪ್ರಜೆ ಸಾವನ್ನಪ್ಪಿದ್ದರು. ಇತ್ತೀಚಿನ ವರ್ಷಗಳಲ್ಲಿ ಈ ಪ್ರದೇಶದಲ್ಲಿ ನಾಗರಿಕರ ಮೇಲೆ ನಡೆದ ಅತ್ಯಂತ ಭೀಕರ ದಾಳಿಗಳಲ್ಲಿ ಇದು ಒಂದಾಗಿದೆ.

ದಾಳಿಯ ಬಳಿಕ ಬುಧವಾರ ಪ್ರಧಾನಿ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ತುರ್ತು ಸಭೆ ನಡೆಸಿ ಪಾಕಿಸ್ತಾನದ ವಿರುದ್ಧ ಐದು ಕ್ರಮಗಳನ್ನು ತೆಗೆದುಕೊಂಡಿದೆ. ಅದರಲ್ಲಿ ಪ್ರಮುಖವಾಗಿ, ಸಾರ್ಕ್ ವೀಸಾ ವಿನಾಯಿತಿ ಯೋಜನೆಯಡಿಯಲ್ಲಿ ಪಾಕಿಸ್ತಾನಿ ಪ್ರಜೆಗಳು ಇನ್ನು ಮುಂದೆ ಭಾರತಕ್ಕೆ ಪ್ರಯಾಣಿಸಲು ಅನುಮತಿಸಲಾಗುವುದಿಲ್ಲ. ಈ ಯೋಜನೆಯಡಿಯಲ್ಲಿ ಅಸ್ತಿತ್ವದಲ್ಲಿರುವ ಎಲ್ಲಾ ವೀಸಾಗಳನ್ನು ರದ್ದುಗೊಳಿಸಲಾಗಿದ್ದು, ಪಾಕ್‌ ಪ್ರಜೆಗಳು 48 ಗಂಟೆಗಳ ಒಳಗೆ ಭಾರತವನ್ನು ತೊರೆಯಬೇಕು. ಭಾರತ ಮತ್ತು ಪಾಕಿಸ್ತಾನದ ನಡುವಿನ ಏಕೈಕ ಭೂ ಮಾರ್ಗ ಈಗ ಮುಚ್ಚಲಾಗಿದೆ. ಅಲ್ಲದೇ ಪಾಕಿಸ್ತಾನ ಭಯೋತ್ಪಾದನೆಗೆ ಬೆಂಬಲ ನೀಡುವುದನ್ನು ನಿಲ್ಲಿಸುವವರೆಗೆ 1960ರ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿದೆ.

Share This Article